ಸಿದ್ದರಾಮಯ್ಯನವರಿಗೆ ತಿಳಿಸದೆ ಮುಡಾ ಸೈಟ್‌ ಹಿಂದಿರುಗಿಸುವ ನಿರ್ಧಾರ ಕೈಗೊಂಡ ಪತ್ನಿ ಪಾರ್ವತಿ

ಭಾರಿ ಸಂಚಲನ ಸೃಷ್ಟಿಸಿದ ಪಾರ್ವತಿ ಸಿದ್ದರಾಮಯ್ಯನವರ ಭಾವನಾತ್ಮಕ ಪತ್ರ

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿ ಲೋಕಾಯುಕ್ತ ಮತ್ತು ಜಾರಿ ನಿರ್ದೇಶನಾಲಯದಲ್ಲಿ ಪ್ರತ್ಯೇಕ ಕೇಸ್‌ಗಳು ದಾಖಲಾಗಿರುವಂತೆಯೇ ಈ ಹಗರಣ ಹಠಾತ್‌ ತಿರುವು ಪಡೆದುಕೊಂಡಿದೆ. ಸಿದ್ದರಾಮಯ್ಯನವರ ಪತ್ನಿ ಪಾರ್ವತಿಯವರು ಪತಿಗೆ ತಿಳಿಸದೆಯೇ ತನ್ನ ಹೆಸರಿಗೆ ಮಂಜೂರಾಗಿದ್ದ ಎಲ್ಲ 14 ನಿವೇಶನಗಳನ್ನು ಮುಡಾಕ್ಕೆ ಮರಳಿಸಲು ನಿರ್ಧರಿಸಿದ್ದು, ಈ ಕುರಿತು ಅವರು ಬರೆದಿರುವ ಪತ್ರ ಸಂಚಲನ ಉಂಟು ಮಾಡಿದೆ. ತಾನೂ ಯಾರಲ್ಲೂ ಚರ್ಚಿಸದೆ ಅತ್ಮಸಾಕ್ಷಿ ಪ್ರಕಾರ ಸೈಟ್‌ಗಳನ್ನು ವಾಪಸ್‌ ಮಾಡುವ ನಿರ್ಧಾರ ಕೈಗೊಂಡಿರುವುದಾಗಿ ಪಾರ್ವತಿ ಪತ್ರದಲ್ಲಿ ಹೇಳಿಕೊಂಡಿದ್ದಾರೆ. ಆದರೆ ಈ ಪತ್ರದಲ್ಲಿ ತಾರೀಕು ನಮೂದಿಸಿಲ್ಲ ಎನ್ನಲಾಗಿದೆ.

ಇನ್ನೊಂದೆಡೆ ಪತ್ನಿಯ ನಿರ್ಧಾರಕ್ಕೆ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, ನನ್ನ ವಿರುದ್ಧ ನಡೆಯುತ್ತಿರುವ ರಾಜಕೀಯ ಷಡ್ಯಂತ್ರದಿಂದ ನನ್ನ ಪತ್ನಿ ನೊಂದು ಈ ನಿರ್ಧಾರವನ್ನು ಕೈಗೊಂಡಿದ್ದಾರೆ. ನನ್ನ ಪತ್ನಿಯ ನಿರ್ಧಾರ ನನಗೂ ಆಶ್ಚರ್ಯ ಉಂಟು ಮಾಡಿದೆ ಎಂದಿದ್ದಾರೆ. ನಿನ್ನೆ ಸಂಜೆಯಿಂದೀಚೆಗೆ ನಡೆದಿರುವ ಈ ಕ್ಷಿಪ್ರ ಬೆಳವಣೆಗೆಗಳಿಗೆ ಗಂಡ-ಹೆಂಡತಿ ಸೇರಿಕೊಂಡು ಆಡುತ್ತಿರುವ ಭಾವನಾತ್ಮಕ ಆಟ ಎಂಬ ಟೀಕೆಯೂ ವ್ಯಕ್ತವಾಗಿದೆ.































 
 

ಮೈಸೂರಿನ ವಿಜಯನಗರದ 3 ಮತ್ತು 4ನೇ ಹಂತದಲ್ಲಿ ಪಡೆದ 14 ನಿವೇಶನಗಳನ್ನು ಹಿಂದಿರುಗಿಸುವುದಾಗಿ ಪಾರ್ವತಿ ಅವರು ಮುಡಾ ಆಯುಕ್ತರಿಗೆ ಪತ್ರ ಬರೆದಿದ್ದಾರೆ. ಸಿದ್ದರಾಮಯ್ಯನವರಿಗೆ ರಾಜಕೀಯವಾಗಿ ಆಗುತ್ತಿರುವ ಸಂಕಷ್ಟವನ್ನು ನೋಡಲಾಗದೆ ಪತ್ನಿ ಈ ನಿರ್ಧಾರಕ್ಕೆ ಬಂದಿದ್ದಾರೆ. ಈ ಬಗ್ಗೆ ಖುದ್ದು ಮುಡಾಗೆ ಬರೆದ ಪತ್ರದಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಿದ್ದಾರೆ. ಆದರೆ ಪತ್ರದಲ್ಲಿ ದಿನಾಂಕ ಇಲ್ಲದಿರುವುದು ನಾನಾ ಚರ್ಚೆಗೆ ಗ್ರಾಸವಾಗಿದೆ.

ಪಾರ್ವತಿಯವರು ನೀಡಿರುವ ಭಾವನಾತ್ಮಕ ಪ್ರಕಟಣೆ

ನನ್ನ ಪತಿಯಾಗಿರುವ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ 40 ವರ್ಷದ ಸುದೀರ್ಘ ರಾಜಕಾರಣದಲ್ಲಿ ಯಾವುದೇ ಸಣ್ಣ ಕಳಂಕವೂ ಅಂಟಿಕೊಳ್ಳದಂತಹ ನೈತಿಕತೆಯನ್ನು ವ್ರತದಂತೆ ಪಾಲಿಸಿಕೊಂಡು ಬಂದವರು. ರಾಜಕೀಯವೂ ಸೇರಿದಂತೆ ಸಾರ್ವಜನಿಕ ಜೀವನದಲ್ಲಿ ಕಾಣಿಸಿಕೊಂಡು ಅವರಿಗೆ ಮುಜುಗರ ಉಂಟು ಮಾಡಬಾರದು ಎಂಬ ನಿರ್ಧಾರಕ್ಕೆ ಬದ್ಧಳಾಗಿ ಬದುಕಿದವಳು. ನಾನೆಂದೂ ಮನೆ, ಆಸ್ತಿ, ಚಿನ್ನ, ಸಂಪತ್ತನ್ನು ಬಯಸಿದವಳಲ್ಲ. ಯಾವುದೇ ಕಾರಣಕ್ಕೂ ನನ್ನಿಂದ ಅವರ ರಾಜಕೀಯ ಜೀವನಕ್ಕೆ ಒಂದು ಸಣ್ಣ ಹನಿಯಷ್ಟೂ ಕಳಂಕ ತಟ್ಟಬಾರದೆಂದು ಎಚ್ಚರಿಕೆಯಿಂದ ನಡೆದುಕೊಂಡವಳು. ನನ್ನ ಪತಿಗೆ ರಾಜ್ಯದ ಜನತೆ ಹರಿಸುತ್ತಾ ಬಂದ ಪ್ರೀತಿ ಅಭಿಮಾನಗಳನ್ನು ದೂರದಿಂದಲೇ ಕಂಡು ಸಂತೋಷ ಮತ್ತು ಹೆಮ್ಮೆ ಪಟ್ಟವಳು.

ಹೀಗಿದ್ದರೂ ಮೈಸೂರಿನ ಮುಡಾ ನಿವೇಶನಕ್ಕೆ ಸಂಬಂಧಿಸಿದಂತೆ ಕೇಳಿಬಂದ ಆರೋಪಗಳಿಂದ ನಾನು ಘಾಸಿಗೊಂಡಿದ್ದೇನೆ. ನನ್ನ ಸ್ವಂತ ಸೋದರ ಅರಿಶಿಣ ಕುಂಕುಮದ ಭಾಗವಾಗಿ ಕೊಟ್ಟ ಜಮೀನಿನ ಬಾಬ್ತು ಪಡೆದ ನಿವೇಶನದಿಂದ ಇಷ್ಟೊಂದು ರಾದ್ಧಾಂತವಾಗುತ್ತದೆ, ಇದರಿಂದ ನನ್ನ ಪತಿಯವರು ಅನ್ಯಾಯವಾಗಿ ಆರೋಪಗಳನ್ನು ಎದುರಿಸುವಂತಾಗಬಹುದು ಎನ್ನುವುದನ್ನು ನಾನು ಊಹಿಸಿದವಳೂ ಅಲ್ಲ. ನನಗೆ ಈ ನಿವೇಶನ, ಮನೆ, ಆಸ್ತಿ, ಸಂಪತ್ತು ಯಾವುದೂ ಕೂಡ ನನ್ನ ಪತಿಯ ಗೌರವ, ಘನತೆ, ಮರ್ಯಾದೆ ಮತ್ತು ಅವರ ನೆಮ್ಮದಿಗಿಂತ ದೊಡ್ಡದಲ್ಲ. ಇಷ್ಟು ವರ್ಷಗಳ ಕಾಲ ಅಧಿಕಾರದಲ್ಲಿದ್ದ ಅವರಿಂದ ಏನನ್ನೂ ನನಗಾಗಲಿ ನನ್ನ ಕುಟುಂಬಕ್ಕಾಗಲಿ ಬಯಸದೇ ಇದ್ದ ನನಗೆ ಈ ನಿವೇಶನಗಳು ತೃಣಕ್ಕೆ ಸಮ. ಈ ಹಿನ್ನೆಲೆಯಲ್ಲಿ ವಿವಾದಕ್ಕೆ ಕಾರಣವಾಗಿರುವ ಮುಡಾದ 14 ನಿವೇಶನಗಳನ್ನು ವಾಪಸ್ ಮಾಡಲು ನಿರ್ಧರಿಸಿದ್ದೇನೆ.

ಈ ಬಗ್ಗೆ ನನ್ನ ಪತಿಯವರ ಅಭಿಪ್ರಾಯ ಏನಿದೆ ಎನ್ನುವುದು ನನಗೆ ತಿಳಿದಿಲ್ಲ. ನನ್ನ ಮಗನ ಬಳಿಯಾಗಲಿ, ನನ್ನ ಕುಟುಂಬದ ಇತರ ಸದಸ್ಯರ ಬಳಿಯಾಗಲಿ ಇದರ ಬಗ್ಗೆ ನಾನು ಚರ್ಚಿಸಿಲ್ಲ. ಇದು ನಾನು ನನ್ನ ಆತ್ಮಸಾಕ್ಷಿಯ ಕರೆಗೆ ಓಗೊಟ್ಟು ಪ್ರಜ್ಞಾಪೂರ್ವಕವಾಗಿ ಕೈಗೊಂಡಿರುವ ತೀರ್ಮಾನ. ಈ ಹಂತದಲ್ಲಿ ಇಂತಹ ನಿರ್ಧಾರಕ್ಕೆ ಏಕೆ ಬಂದಿರಿ ಎಂದು ಯಾರಾದರೂ ಕೇಳಬಹುದು. ಆರೋಪ ಕೇಳಿ ಬಂದ ದಿನವೇ ನಾನು ಈ ನಿರ್ಧಾರ ಮಾಡಿದ್ದೆ. ಆದರೆ, ಈ ಮುಡಾ ನಿವೇಶನ ಹಂಚಿಕೆಯ ಆರೋಪವನ್ನು ರಾಜಕೀಯ ದುರುದ್ದೇಶದಿಂದ ಮಾಡಲಾಗಿದ್ದು, ಈ ಅನ್ಯಾಯದ ವಿರುದ್ಧ ಹೋರಾಡಬೇಕು. ಅವರ ಸಂಚಿಗೆ ನಾವು ಬಲಿಯಾಗಬಾರದು ಎಂದು ಕೆಲವು ಹಿತೈಷಿಗಳು ಹೇಳಿದ ಕಾರಣಕ್ಕೆ ನಿವೇಶನ ವಾಪಸು ಮಾಡಬೇಕೆಂಬ ನಿರ್ಧಾರವನ್ನು ಕೈ ಬಿಟ್ಟಿದ್ದೆ.

ನನ್ನ ಈ ನಿರ್ಧಾರ ಅಚಲವಾಗಿದ್ದು, ಈ ನಿವೇಶನಗಳನ್ನು ವಾಪಸು ನೀಡುವುದರ ಜೊತೆಗೆ ಮುಡಾಕ್ಕೆ ಸಂಬಂಧಿಸಿದ ಎಲ್ಲ ಆರೋಪಗಳ ಬಗ್ಗೆ ಸಮಗ್ರ ತನಿಖೆ ಮಾಡಬೇಕೆಂದು ಆಗ್ರಹಿಸುತ್ತೇನೆ. ಕೊನೆಯದಾಗಿ, ಎಲ್ಲ ರಾಜಕೀಯ ಪಕ್ಷದ ನಾಯಕರು ಮತ್ತು ಮಾಧ್ಯಮ ಕ್ಷೇತ್ರದ ಬಂಧುಗಳಲ್ಲಿ ನನ್ನ ವಿನಮ್ರ ವಿನಂತಿ. ದಯವಿಟ್ಟು ರಾಜಕೀಯ ಕ್ಷೇತ್ರದಿಂದ ದೂರವಿದ್ದು, ತಮ್ಮ ಪಾಡಿಗೆ ತಾವಿರುವ ರಾಜಕೀಯ ಕುಟುಂಬದ ಹೆಣ್ಣು ಮಕ್ಕಳನ್ನು ರಾಜಕೀಯ ದ್ವೇಷ ಸಾಧನೆಗಾಗಿ ವಿವಾದದ ಕಣಕ್ಕೆ ಎಳೆದು ತಂದು ಅವರ ಘನತೆ, ಗೌರವಗಳಿಗೆ ಹಾನಿ ಮಾಡಬೇಡಿ ಎಂದು ಮನವಿ ಮಾಡಿದ್ದಾರೆ.

ಸಿದ್ದರಾಮಯ್ಯನವರಿಗೆ ವಿಷಯವೇ ಗೊತ್ತಿಲ್ಲ!

ಸೈಟ್ ವಾಪಸ್ ನೀಡುವ ಬಗ್ಗೆ ಪತ್ನಿ ಕೈಗೊಂಡ ನಿರ್ಧಾರದ ಬಗ್ಗೆ ಟ್ವೀಟ್ ಮೂಲಕ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ ಜಮೀನಿಗೆ ಪರಿಹಾರ ರೂಪದಲ್ಲಿ ನೀಡಿದ್ದ ನಿವೇಶನಗಳನ್ನು ನನ್ನ ಪತ್ನಿ ಪಾರ್ವತಿ ಹಿಂದಿರುಗಿಸಿದ್ದಾರೆ. ನನ್ನ ವಿರುದ್ದ ರಾಜಕೀಯ ದ್ವೇಷ ಸಾಧನೆಗಾಗಿ ವಿರೋಧ ಪಕ್ಷಗಳು ಸುಳ್ಳು ದೂರನ್ನು ಸೃಷ್ಟಿಸಿ ನನ್ನ ಕುಟುಂಬವನ್ನು ವಿವಾದಕ್ಕೆ ಎಳೆದು ತಂದಿರುವುದು ರಾಜ್ಯದ ಜನತೆಗೂ ತಿಳಿದಿದೆ. ಈ ಅನ್ಯಾಯಕ್ಕೆ ತಲೆಬಾಗದೆ ಹೋರಾಟ ಮಾಡಬೇಕೆಂಬುದು ನನ್ನ ನಿಲುವಾಗಿತ್ತು. ಆದರೆ ನನ್ನ ವಿರುದ್ಧ ನಡೆಯುತ್ತಿರುವ ರಾಜಕೀಯ ಷಡ್ಯಂತ್ರದಿಂದ ನೊಂದಿರುವ ನನ್ನ ಪತ್ನಿ ಈ ನಿವೇಶನಗಳನ್ನು ಹಿಂದಿರುಗಿಸುವ ನಿರ್ಧಾರ ಕೈಗೊಂಡು, ನನಗೂ ಆಶ್ಚರ್ಯ ಉಂಟು ಮಾಡಿದ್ದಾರೆ ಎಂದು ಹೇಳಿದ್ದಾರೆ.
ನನ್ನ ನಾಲ್ಕು ದಶಕಗಳ ಸುದೀರ್ಘ ರಾಜಕಾರಣದಲ್ಲಿ ಎಂದೂ ಕೂಡಾ ಮಧ್ಯೆಪ್ರವೇಶಿಸದೆ ಕುಟುಂಬಕ್ಕಷ್ಟೆ ಸೀಮಿತವಾಗಿದ್ದ ನನ್ನ ಪತ್ನಿ ನನ್ನ ವಿರುದ್ಧದ ದ್ವೇಷದ ರಾಜಕಾರಣಕ್ಕೆ ಬಲಿಯಾಗಿ ಮಾನಸಿಕವಾಗಿ ಹಿಂಸೆ ಅನುಭವಿಸುವಂತಾಗಿರುವುದಕ್ಕೆ ನನಗೆ ವಿಷಾದ ಇದೆ. ಹೀಗಿದ್ದರೂ ನಿವೇಶನಗಳನ್ನು ಹಿಂದಿರುಗಿಸಿದ ನನ್ನ ಪತ್ನಿಯ ನಿರ್ಧಾರವನ್ನು ನಾನು ಗೌರವಿಸುತ್ತೇನೆ ಎಂದಿದ್ದಾರೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top