ಮೈಸೂರಿನಿಂದ ಮುಡಾ ಕಡತಗಳನ್ನು ಹೆಲಿಕಾಪ್ಟರ್‌ನಲ್ಲಿ ಹೊತ್ತೊಯ್ದಿದ್ದ ಸಚಿವ
ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ಕಡತ ನಾಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಭೈರತಿ ಸುರೇಶ್ ಮತ್ತು ಹಿಂದಿನ ಲೋಕಾಯುಕ್ತ ಎಸ್‌ಪಿ ಸಜಿತ್ ವಿರುದ್ಧ ಆರ್ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ದೂರು ನೀಡಿದ್ದಾರೆ. ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ನಡೆಸುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಅವರಿಗೆ ಲಿಖಿತ ದೂರಿನಲ್ಲಿ ಒತ್ತಾಯಿಸಿದ್ದಾರೆ.
ಲೋಕಾಯುಕ್ತ ನೀಡಿದ್ದ ಸರ್ಚ್ ವಾರಂಟ್ ಆಧರಿಸಿ ಜು.26ರಂದು ಮುಡಾ ಕಚೇರಿ ಮೇಲೆ ದಾಳಿ ನಡೆಸಲು ನಿರ್ಧರಿಸಲಾಗಿತ್ತು. ಆದರೆ ದಾಳಿಯ ಕುರಿತು ಮೈಸೂರು ಲೋಕಾಯುಕ್ತದ ಅಂದಿನ ಅಧೀಕ್ಷಕ ಸಜಿತ್ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಅವರಿಗೆ ಮಾಹಿತಿ ನೀಡಿದ್ದರು.
ಭೈರತಿ ಸುರೇಶ್ ಕೂಡಲೇ ಮೈಸೂರಿಗೆ ಹೆಲಿಕಾಪ್ಟರ್‌ನಲ್ಲಿ ಬಂದು ಮುಡಾದ ಕೆಲವು ಪ್ರಮುಖ ಕಡತಗಳನ್ನು ತೆಗೆದುಕೊಂಡು ಹೋಗಿದ್ದರು. ಈ ಕಡತಗಳಲ್ಲಿದ್ದ ದಾಖಲೆಗಳನ್ನು ಇಟ್ಟುಕೊಂಡೇ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರಿಕಾಗೋಷ್ಠಿ ನಡೆಸಿದ್ದರು. ಈ ರೀತಿ ಸಹಾಯ ಮಾಡಿದ ಕಾರಣಕ್ಕಾಗಿ ಮೈಸೂರು ಲೋಕಾಯುಕ್ತದಲ್ಲಿ ಪೊಲೀಸ್ ಅಧೀಕ್ಷಕರಾಗಿದ್ದ ಸಜಿತ್ ಅವರನ್ನು ಬೆಂಗಳೂರಿನ ಆಯಾಕಟ್ಟಿನ ಜಾಗಕ್ಕೆ ವರ್ಗಾವಣೆ ಮಾಡಲಾಗಿದೆ. ಹೀಗಾಗಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಿ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ದೂರಿನಲ್ಲಿ ಉಲ್ಲೇಖಿಸಲಾಗಿದೆ.