ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಆಶ್ರಯದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಸಹಕಾರದೊಂದಿಗೆ ವಿದ್ಯಾಭಾರತಿ ಶಿಕ್ಷಣ ಸಂಸ್ಥಾನಂಗೆ ಸಂಯೋಜನೆಗೊಂಡಿರುವ ವಿದ್ಯಾಭಾರತಿ ಸಂಯೋಜಿತ ಶಾಲೆಗಳ ರಾಷ್ಟ್ರೀಯ ಮಟ್ಟದ ವಾಲಿಬಾಲ್ ಪಂದ್ಯಾಟ ಅ.16 ರಿಂದ 19 ರ ವರೆಗೆ ತೆಂಕಿಲ ವಿವೇಕಾನಂದ ವಿದ್ಯಾಸಂಸ್ಥೆಗಳ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ.ಕೆ.ಎಂ.ಕೃಷ್ಣ ಭಟ್ ತಿಳಿಸಿದ್ದಾರೆ.
ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಮೂರು ವಿಭಾಗಗಳಲ್ಲಿ ಕ್ರೀಡಾಕೂಟ ನಡೆಯಲಿದ್ದು, 6 ರಿಂದ 8 ನೇ ತರಗತಿ ಬಾಲವರ್ಗ, 9 ರಿಂದ 10 ಕಿಶೋರ ವರ್ಗ ಹಾಗೂ ಪ್ರಥಮ, ದ್ವಿತೀಯ ಪಿಯುಸಿ ತರುಣ ವರ್ಗ ಈ ಮೂರು ವಿಭಾಗಗಳಲ್ಲಿ ಪಂದ್ಯಾಟ ನಡೆಯಲಿದೆ. ಇದಕ್ಕಾಗಿ ಈಗಾಗಲೇ 6 ಕ್ರೀಡಾಂಗಣ ವ್ಯವಸ್ಥೆ ಮಾಡಲಾಗಿದ್ದು, ಈ ಪೈಕಿ 2 ಕ್ರೀಡಾಂಗಣಕ್ಕೆ ಹೊನಲು ಬೆಳಕಿನ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.
ಕ್ಷೇತ್ರ ಮಟ್ಟದಲ್ಲಿ ಗೆಲುವು ಸಾಧಿಸಿದ ವಿದ್ಯಾರ್ಥಿಗಳು ಈ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಲಿದ್ದಾರೆ. ಅ.16 ರಂದು ಸಂಜೆ ದೇಶದ ವಿವಿಧ ಭಾಗಗಳಿಂದ ಆಗಮಿಸುವ ಕ್ರೀಡಾಪಟುಗಳನ್ನು ಸ್ವಾಗತಿಸುವ ನಿಟ್ಟಿನಲ್ಲಿ ದರ್ಬೆ ವೃತ್ತದಿಂದ ಪಂದ್ಯಾಟ ನಡೆಯುವ ಶಾಲಾ ಕ್ರೀಡಾಂಗಣದ ತನಕ ಜಾಥಾ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಅ.16 ಗುರುವಾರ ಸಂಜೆ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಪ್ರಭಾಕರ ಭಟ್ ಪಂದ್ಯಾಟವನ್ನು ಉದ್ಘಾಟಿಸಲಿದ್ದು, ಸಮಾರಂಭದ ಅಧ್ಯಕ್ಷತೆಯನ್ನು ವಿದ್ಯಾಭಾರತಿ ಕರ್ನಾಟಕದ ಅಧ್ಯಕ್ಷ ಪರಮೇಶ್ವರ ಹೆಗ್ಗಡೆ ವಹಿಸಲಿದ್ದಾರೆ ಎಂದು ಅವರು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ದಕ್ಷಿಣ ಮಧ್ಯ ಕ್ಷೇತ್ರ ಶಿಕ್ಷಣ ಪ್ರಮುಖ್ ಮಂಕುಡೆ ವೆಂಕಟ್ರಮಣ ಭಟ್, ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಡಾ.ಶಿವಪ್ರಕಾಶ್, ಕರುಣಾಕರ, ಶಾಲಾ ಮುಖ್ಯ ಶಿಕ್ಷಕ ಸತೀಶ್ ರೈ ಉಪಸ್ಥಿತರಿದ್ದರು.