ಸಚಿವ ದಿನೇಶ್ ಗುಂಡೂರಾವ್ ಮನೆಯಲ್ಲಿ ಅರ್ಧ ಪಾಕಿಸ್ಥಾನ ಹೇಳಿಕೆ
ಬೆಂಗಳೂರು: ಸಚಿವ ದಿನೇಶ್ ಗುಂಡೂರಾವ್ ಅವರ ಪತ್ನಿ ತಬಸ್ಸುಮ್ ಅವರು ದಾಖಲಿಸಿರುವ ಮಾನನಷ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ಗೆ ಕೋರ್ಟ್ ನಿನ್ನೆ ಜಾಮೀನು ರಹಿತ ವಾರಂಟ್ ಜಾರಿ ಮಾಡಿದೆ.
ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂದು ತಬಸ್ಸುಮ್ ದಾಖಲಿಸಿದ್ದ ಖಾಸಗಿ ದೂರಿನ ಸಂಬಂಧ ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ಜಡ್ಜ್ ಕೆ.ಎನ್.ಶಿವಕುಮಾರ್ ಯತ್ನಾಳ್ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿ ಮಾಡಿದ್ದಾರೆ.
ತಬಸುಮ್ ಸಲ್ಲಿಸಿದ್ದ ಖಾಸಗಿ ದೂರನ್ನು ಆಗಸ್ಟ್ 29ರಂದು ಮಾನ್ಯ ಮಾಡಿದ್ದ ನ್ಯಾಯಾಲಯ ಅಕ್ಟೋಬರ್ 16ರಂದು ವಿಚಾರಣೆಗೆ ಖುದ್ದು ಹಾಜರಾಗುವಂತೆ ಯತ್ನಾಳ್ಗೆ ಸಮನ್ಸ್ ಜಾರಿಗೊಳಿಸಿತ್ತು. ಆದರೆ ಯತ್ನಾಳ್ ವಿಚಾರಣೆಗೆ ಗೈರಾದ ಹಿನ್ನೆಲೆಯಲ್ಲಿ ನ್ಯಾಯಾಲಯ ಜಾಮೀನು ರಹಿತ ವಾರಂಟ್ ಜಾರಿಗೊಳಿಸಿ ಮುಂದಿನ ವಿಚಾರಣೆಯನ್ನು ಅಕ್ಟೋಬರ್ 28ಕ್ಕೆ ಮುಂದೂಡಿದೆ.
ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ ಸಂಬಂಧ ಎನ್‌ಐಎ ಅಧಿಕಾರಿಗಳು ಬಿಜೆಪಿ ಕಾರ್ಯಕರ್ತನ ವಿಚಾರಣೆ ನಡೆಸಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ವಿಜಯಪುರದಲ್ಲಿ ಏಪ್ರಿಲ್ 6ರಂದು ಸುದ್ದಿಗಾರರ ಜತೆ ಮಾತನಾಡಿದ್ದ ಯತ್ನಾಳ್, ಸಚಿವ ದಿನೇಶ್ ಗುಂಡೂರಾವ್ ಅವರ ಮನೆಯಲ್ಲಿ ಅರ್ಧ ಪಾಕಿಸ್ತಾನ ಇದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಕುರಿತು ತಬಸುಮ್ ಬೆಂಗಳೂರಿನ ಸಂಜಯ್ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಜತೆಗೆ, ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.
ಈ ಹಿಂದೆ ಜನಪ್ರತಿನಿಧಿಗಳ ನ್ಯಾಯಾಲಯದ ತೀರ್ಪನ್ನು ರದ್ದು ಮಾಡುವಂತೆ ಕೋರಿ ಶಾಸಕ ಯತ್ನಾಳ್ ಪರ ವಕೀಲರು ಹೈಕೋರ್ಟ್ ಮೊರೆ ಹೋಗಿದ್ದರು. ಆಗ ಪ್ರಕರಣದ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಮೂರ್ತಿ ನಾಗಪ್ರಸನ್ನ ಅವರ ಪೀಠ ಹೇಳಿಕೆಯನ್ನು ಕೀಳು ಅಭಿರುಚಿ ಎಂದಿದ್ದರು. ಆ ಬಳಿಕ ಹೇಳಿಕೆ ನೀಡಿದ್ದಾರೋ ಇಲ್ವೋ ಎಂದು ಪ್ರಶ್ನೆ ಮಾಡಿದರು. ಯತ್ನಾಳ್ ಪರ ವಕೀಲರು ಹೌದು ಹೇಳಿಕೆ ನೀಡಿದ್ದಾರೆ ಎಂದು ಒಪ್ಪಿಕೊಂಡಿದ್ದರು. ಈ ರೀತಿಯ ಪದ ಬಯಕೆ ಸಮಾಜಕ್ಕೆ ಯಾವ ರೀತಿಯ ಸಂದೇಶ ನೀಡುತ್ತದೆ? ವೈಯಕ್ತಿಕ ತೇಜೋವಧೆಗೆ ಏಕೆ ಇಳಿಯುತ್ತೀರಾ ಎಂದು ನ್ಯಾಯಮೂರ್ತಿಗಳು ತರಾಟೆಗೆ ತೆಗೆದುಕೊಂಡಿದ್ದರು.