ಸಿದ್ದರಾಮಯ್ಯ ಸುತ್ತ ಬಿಗಿಯಾದ ತನಿಖೆಯ ಉರುಳು
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಕಚೇರಿ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ಮಾಡಿದ್ದಾರೆ. ನಿವೇಶನ ಹಂಚಿಕೆ ವಿಚಾರವಾಗಿ ಮುಡಾದಲ್ಲಿ ಹಗರಣ ನಡೆದಿದೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ. ಆರ್ಐಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ನೀಡಿದ ದೂರಿನ ಆಧಾರದ ಮೇಲೆ ಇಡಿ ಅಧಿಕಾರಿಗಳು ಮುಡಾ ಕಚೇರಿ ಮೇಲೆ ದಾಳಿ ಮಾಡಿದ್ದಾರೆ. ಇಡಿಯ 20ಕ್ಕೂ ಹೆಚ್ಚು ಅಧಿಕಾರಿಗಳು ಕಚೇರಿಯಲ್ಲಿ ದಾಖಲೆ ಪರಿಶೀಲಿಸುತ್ತಿದ್ದಾರೆ.
ಮುಡಾ ಹಗರಣ ಸಂಬಂಧ ಇಡಿ ಸ್ನೇಹಮಯಿ ಕೃಷ್ಣ ಅವರಿಗೆ ಸಮನ್ಸ್ ನೀಡಿ ವಿಚಾರಣೆಗೆ ಹಾಜರಾಗುವಂತೆ ಹೇಳಿತ್ತು. ಅದರಂತೆ ಸ್ನೇಹಮಯಿ ಕೃಷ್ಣ ಶಾಂತಿನಗರದ ಇಡಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಿದ್ದರು. ಅಲ್ಲದೇ ಹಗರಣ ಸಂಬಂಧ 500 ಪುಟಗಳ ದಾಖಲೆಯನ್ನು ಇ.ಡಿಗೆ ನೀಡಿದ್ದರು.
ದಾಖಲೆಗಳ ಆಧಾರದ ಮೇಲೆ ಇ.ಡಿ ಇಸಿಐಆರ್ ದಾಖಲಿಸಿ ತನಿಖೆ ನಡೆಸುತ್ತಿದೆ. ಮುಡಾ ಕಚೇರಿ ಮತ್ತು ಭೂ ಮಾಲೀಕ ದೇವರಾಜು ಮನೆ ಮೇಲೆ ದಾಳಿ ಮಾಡಿದೆ. ಹಗರಣದಲ್ಲಿ ದೇವರಾಜು ನಾಲ್ಕನೇ ಆರೋಪಿ ಆಗಿದ್ದಾರೆ. ಬೆಂಗಳೂರಿನ ಕೆಂಗೇರಿಯಲ್ಲಿರುವ ದೇವರಾಜು ನಿವಾಸದಲ್ಲಿ ಇ.ಡಿ ಅಧಿಕಾರಿಗಳು ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ.
ಒಂದೆಡೆ ಹಗರಣದಲ್ಲಿ ತನ್ನ ಪಾತ್ರ ಏನೂ ಇಲ್ಲ ಎಂದು ಹೇಳುತ್ತಲೇ ಸಿದ್ದರಾಮಯ್ಯ ತನಿಖೆಯ ಉರುಳಿನಿಂದ ಪಾರಾಗಲು ನಾನಾ ತಂತ್ರಗಳನ್ನು ಮಾಡುತ್ತಿದ್ದಾರೆ, ಇನ್ನೊಂದೆಡೆ ಇ.ಡಿ ತನ್ನ ಪಟ್ಟನ್ನು ಬಿಗಿಗೊಳಿಸುತ್ತಾ ಹೋಗುತ್ತಿದೆ. ಅಂತಿಮವಾಗಿ ಸಿದ್ದರಾಮಯ್ಯನವರನ್ನು ಇ.ಡಿ.ವಿಚಾರಣೆಗೆ ಕರೆಯುವ ಸಾಧ್ಯೆತೆಯೂ ಇದೆ ಎನ್ನಲಾಗುತ್ತಿದೆ.