ಉಪಮುಖ್ಯಮಂತ್ರಿ ಡಿಕೆಶಿ ಹೇಳಿಕೆಯಲ್ಲಿದೆ ಶಕ್ತಿ ಯೋಜನೆ ರದ್ದಾಗುವ ಸುಳಿವು
ಬೆಂಗಳೂರು : ಮಹಿಳೆಯರಿಗೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಮಾಡಿಕೊಟ್ಟಿರುವ ಸರಕಾರದ ಪಂಚ ಗ್ಯಾರಂಟಿಗಳ ಪೈಕಿ ಒಂದಾದ ಶಕ್ತಿ ಯೋಜನೆ ರದ್ದಾಗುವ ಸಾಧ್ಯತೆ ಇದೆ ಎನ್ನಲಾಗುತ್ತದೆ. ಶಕ್ತಿ ಯೋಜನೆ ರದ್ದಾಗುವ ಕುರಿತು ಸ್ವತಹ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೇ ಸುಳಿವು ನೀಡಿದ್ದಾರೆ. ಶಕ್ತಿ ಯೋಜನೆ ಮುಂದುವರಿಸುವ ವಿಚಾರವಾಗಿ ಮರುಪರಿಶೀಲನೆ ನಡೆಸುತ್ತೇವೆ ಎಂದು ಡಿ.ಕೆ ಶಿವಕುಮಾರ್ ನಿನ್ನೆ ಹೇಳಿದ ಬಳಿಕ ಈ ಯೋಜನೆ ರದ್ದಾಗಲಿದೆಯೇ ಎಂಬ ಚರ್ಚೆ ಶುರುವಾಗಿದೆ.
ಬೆಂಗಳೂರಿನಲ್ಲಿ ವೋಲ್ವೊ ಬಸ್ಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಡಿಕೆಶಿ, ಶಕ್ತಿ ಯೋಜನೆ ಬಗ್ಗೆ ಮರುಚಿಂತನೆ ನಡೆಸುವಂತೆ ಸ್ತ್ರೀಯರಿಂದಲೇ ಒತ್ತಡವಿದೆ. ಅನೇಕ ಹೆಣ್ಣುಮಕ್ಕಳು ನಮಗೆ ಟಿಕೆಟ್ ತೆಗೆದುಕೊಳ್ಳುವ ಶಕ್ತಿಯಿದೆ. ಸಾರಿಗೆ ಸಂಸ್ಥೆ ಬಸ್ಗಳಲ್ಲಿ ನಮಗೆ ಉಚಿತ ಪ್ರಯಾಣ ಬೇಡವೆಂದಿದ್ದಾರೆ. ಟ್ವೀಟ್, ಇ-ಮೇಲ್ ಮೂಲಕ ಅನೇಕ ಮಹಿಳೆಯರು ಉಚಿತ ಪ್ರಯಾಣದ ಬಗ್ಗೆ ಆಕ್ಷೇಪ ಎತ್ತುತ್ತಿದ್ದಾರೆ. ನಾವು ಹಣ ನೀಡಿ ಟಿಕೆಟ್ ಪಡೆಯಲು ಮುಂದಾದರೂ ತೆಗೆದುಕೊಳ್ಳುತ್ತಿಲ್ಲ. ಸಾರಿಗೆ ಸಂಸ್ಥೆ ಬಸ್ಗಳಲ್ಲಿ ನಿರ್ವಾಹಕರು ಹಣ ಪಡೆದು ಟಿಕೆಟ್ ನೀಡುತ್ತಿಲ್ಲ ಅಂತ ಮಹಿಳೆಯರು ನಮಗೆ ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಶಕ್ತಿ ಯೋಜನೆ ಮರುಪರಿಶೀಲನೆ ಬಗ್ಗೆ ಚರ್ಚೆ ಮಾಡುತ್ತೇವೆ. ಶೀಘ್ರದಲ್ಲೇ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಜೊತೆ ಯೋಜನೆ ಬಗ್ಗೆ ಚರ್ಚೆ ನಡೆಸುತ್ತೇವೆ ಎಂದಿದ್ದಾರೆ.
2023ರ ಜೂನ್ 11ರಂದು ಶಕ್ತಿ ಯೋಜನೆ ಜಾರಿಗೆ ಬಂದಿದೆ. ಈ ಯೋಜನೆ ಅಡಿ ಮಹಿಳೆಯರು ಸರ್ಕಾರಿ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸುತ್ತಿದ್ದಾರೆ. ಆರಂಭದಿಂದಲೂ ಈ ಯೋಜನೆಗೆ ಮಹಿಳಾ ಪ್ರಯಾಣಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮಹಿಳಾ ಪ್ರಯಾಣಿಕರು ಬಸ್ ಪ್ರಯಾಣಕ್ಕಾಗಿ ‘ಶೂನ್ಯ ಟಿಕೆಟ್’ (ಉಚಿತ ಟಿಕೆಟ್) ಪಡೆಯಲು ಕೇಂದ್ರ ಅಥವಾ ರಾಜ್ಯ ಸರ್ಕಾರ ನೀಡಿದ ಗುರುತಿನ ಚೀಟಿಯನ್ನು ತೋರಿಸುತ್ತಿದ್ದಾರೆ. ಶಕ್ತಿ ಯೋಜನೆ ಜಾರಿಗೆ ಬಂದ ಬಳಿಕ ಸರ್ಕಾರದ ನಾಲ್ಕೂ ನಿಗಮಗಳಾದ ಕೆಎಸ್ಆರ್ಟಿಸಿ, ಎನ್ಡಬ್ಲೂಕೆಆರ್ಟಿಸಿ, ಕೆಕೆಆರ್ಟಿಸಿ ಮತ್ತು ಬಿಎಂಟಿಸಿ ಬಸ್ಗಳಲ್ಲಿ ಮಹಿಳಾ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದೆ. ಬಸ್ಗಳಲ್ಲಿ ನಿಗದಿತ ಸಂಖ್ಯೆ ಪ್ರಯಾಣಿಕರಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸಂಚರಿಸುತ್ತಿದ್ದಾರೆ ಎಂದು ವರದಿಯಾಗಿತ್ತು. ಪ್ರಯಾಣಿಕರ ಸಂಖ್ಯೆ ಹೆಚ್ಚಳವಾದ ಹಿನ್ನೆಲೆಯಲ್ಲಿ ನಿತ್ಯ ಶಾಲಾ-ಕಾಲೇಜು, ಕಚೇರಿಗಳಿಗೆ ತೆರಳುವವರಿಗೆ ಸಾಕಷ್ಟು ಸಮಸ್ಯೆಯಾಗುತ್ತಿದೆ ಎಂಬ ಆರೋಪ ಇದೆ. ಆದರೆ ಸರಕಾರ ಆರಂಬದಿಂದಲೂ ಶಕ್ತಿ ಯೋಜನೆಯನ್ನು ಬಲವಾಗಿ ಸಮರ್ಥಿಸುತ್ತಿದೆ.
ಶಕ್ತಿ ಯೋಜನೆಯಿಂದ ಮಹಿಳೆಯರಿಗೆ ಬಹಳಷ್ಟು ಅನುಕೂಲವಾಗಿದೆ, ದೇವಸ್ಥಾನಗಳಿಗೆ ಹೋಗುವವರ ಸಂಖ್ಯೆ ಹೆಚ್ಚಾಗಿ ಕಾಣಿಕೆ ಸಂಗ್ರಹ ಹೆಚ್ಚಳವಾಗಿದೆ ಎಂದೆಲ್ಲ ಸ್ವತಹ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿಕೊಂಡಿದ್ದರು. ಆದರೆ ಈಗ ಸರಕಾರ ಯೋಜನೆಯನ್ನು ರದ್ದುಗೊಳಿಸುವ ಬಗ್ಗೆ ಮಾತನಾಡುತ್ತಿದೆ.