ವಕ್ಫ್‌ ನೋಟಿಸ್‌ ಭೀತಿ : ಇಂದು ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ

ವಕ್ಫ್‌ ದಾಖಲೆ ತಿದ್ದುಪಡಿ ಕುರಿತು ಸಿಬಿಐ, ಇ.ಡಿ. ತನಿಖೆಗೆ ಒತ್ತಾಯ

ಬೆಂಗಳೂರು: ರಾಜ್ಯದ ವಿವಿಧೆಡೆ ರೈತರ ಜಮೀನಿನ ಪಹಣಿಯಲ್ಲಿ ವಕ್ಫ್‌ ಬೋರ್ಡ್‌ ಹೆಸರು ನಮೂದಿಸಿ ನೋಟಿಸ್‌ ನೀಡಿರುವುದನ್ನು ಪ್ರತಿಭಟಿಸಿ ಬಿಜೆಪಿ ಇಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಿದೆ. ವಕ್ಫ್ ಆಸ್ತಿ ಕುರಿತಾದ ಗೆಜೆಟ್ ಅಧಿಸೂಚನೆ ಹಿಂಪಡೆಯಬೇಕು, ಅಧಿಕಾರ ದುರ್ಬಳಕೆ ಕುರಿತು ಸಿಬಿಐ ತನಿಖೆ ನಡೆಸಬೇಕು ಮತ್ತು ವಿವಾದಕ್ಕೆ ಕಾರಣವಾದ ಸಚಿವ ಜಮೀರ್ ಅವರನ್ನು ಸಂಪುಟದಿಂದ ವಜಾಗೊಳಿಸಬೇಕೆಂಬ ಆಗ್ರಹಿಸಿ ಎಲ್ಲ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಹಾಗೂ ತಾಲೂಕು ಕಚೇರಿಗಳ ಎದುರು ಬಿಜೆಪಿ ಪ್ರತಿಭಟನೆ ಹಮ್ಮಿಕೊಂಡಿದೆ. ಈ ಪ್ರತಿಭಟನೆಯಲ್ಲಿ ಪಕ್ಷದ ಎಲ್ಲ ಮುಖಂಡರು ಹಾಗೂ ಕಾರ್ಯಾಕರ್ತರು ಪಾಲ್ಗೊಳ್ಳಲಿದ್ದಾರೆಂದು ಬಿಜೆಪಿ ತಿಳಿಸಿದೆ.

1974ರ ವಕ್ಫ್ ಆಸ್ತಿ ಕುರಿತ ಗೆಜೆಟ್ ಅಧಿಸೂಚನೆ ಹಿಂಪಡೆಯಲು ಆಗ್ರಹಿಸಿ ಮತ್ತು ಅಧಿಕಾರ ದುರ್ಬಳಕೆಯ ಕುರಿತು ಸಿಬಿಐ ತನಿಖೆಗೆ ಆಗ್ರಹಿಸಿ ಸೋಮವಾರ ರಾಜ್ಯದೆಲ್ಲೆಡೆ ಪ್ರತಿಭಟನೆ ನಡೆಸಲಾಗುವುದು ಎಂದು ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ್ ತಿಳಿಸಿದ್ದಾರೆ.
ಕರ್ನಾಟಕದ ವಕ್ಫ್​ನಲ್ಲಿ ನಡೆದಿರುವ ನಕಲಿ ದಾಖಲೆಗಳ ಸೃಷ್ಟಿ, ಆ ಮೂಲಕ ಮಾಡಿಕೊಂಡಿರುವ ಲಾಭದ ಕುರಿತು ಇ.ಡಿ. (ಜಾರಿ ನಿರ್ದೇಶನಾಲಯ) ತನಿಖೆಯಾಗಬೇಕು. 50 ವರ್ಷದ ಹಿಂದಿನ ಗೆಜೆಟ್ ನೆಪವೊಡ್ಡಿ 50 ವರ್ಷ ಯಾವುದೇ ಕ್ರಮ ಕೈಗೊಳ್ಳದೆ ಈಗ ಅಲ್ಪಸಂಖ್ಯಾತರ ಮತಬ್ಯಾಂಕ್ ರಾಜಕಾರಣಕ್ಕಾಗಿ, ಅಲ್ಪಸಂಖ್ಯಾತರ ತುಷ್ಟೀಕರಣಕ್ಕಾಗಿ, ಕರ್ನಾಟಕ ವಕ್ಫ್ ಬೋರ್ಡ್ ಮೂಲಕ ಮಾಡಿರುವ ಬೃಹತ್ ದಾಖಲೆಗಳ ಸೃಷ್ಟಿಯ ಎಲ್ಲ ಅವ್ಯವಹಾರಗಳನ್ನು ಸಿಬಿಐ ತನಿಖೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದ್ದಾರೆ.





































 
 

ರಾಜ್ಯದಲ್ಲಿ ವಕ್ಫ್ ಕಾಯ್ದೆಯ ದುರ್ಬಳಕೆಯ ಕಾರಣಕ್ಕಾಗಿ ರೈತರು, ಮಠಗಳು, ಹಿಂದೂ ದೇವಾಲಯಗಳಿಗೆ ಆತಂಕ ಎದುರಾಗಿದೆ. ಹಿಂದೆ ಕಾಂಗ್ರೆಸ್​ನವರು ರೂಪಿಸಿರುವ ವಕ್ಫ್ ಕಾಯ್ದೆ ಮುಸ್ಲಿಂ ತುಷ್ಟೀಕರಣಕ್ಕಾಗಿ, ಮತಗಳಿಕೆಯ ಆಸೆಯೊಂದಿಗೆ ರಚಿಸಿರುವ ಕಾಯ್ದೆಯಾಗಿದೆ. ರೈತರು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಈಗ ಅಷ್ಟೇ ಅಲ್ಲದೆ ಜಮೀನು ಕಳೆದುಕೊಳ್ಳುವ ಭೀತಿ ನಿರ್ಮಾಣವಾಗಿದೆ. ಈ ಸಂಬಂಧ ಕೇವಲ ನೋಟಿಸ್ ಹಿಂಪಡೆದರೆ ಸಾಲದು, ರೈತರ ಆಸ್ತಿಗಳಲ್ಲಿ ರೈತರ ಹೆಸರನ್ನು ನಮೂದಿಸಬೇಕು. ಅಲ್ಲದೆ, 1974ರ ವಕ್ಫ್ ಆಸ್ತಿ ಕುರಿತ ಗೆಜೆಟ್ ಅಧಿಸೂಚನೆಯನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದ್ದಾರೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top