ಗದಗ: ಲಾರಿ ಮತ್ತು ಕಾರು ನಡುವೆ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಮಕ್ಕಳು ಗಾಯಗೊಂಡಿರುವ ದಾರುಣ ಘಟನೆ ಗದಗ ಜಿಲ್ಲೆ ನರಗುಂದ ತಾಲೂಕಿನ ಭೈರನಹಟ್ಟಿ ಗ್ರಾಮದ ಬಳಿ ನಡೆದಿದೆ. ಕಾರಿನಲ್ಲಿದ್ದವರು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿಯಿತ್ತು ವಾಪಸಾಗುತ್ತಿದ್ದಾಗ ಈ ಭೀಕರ ಅಪಘಾತ ಸಂಭವಿಸಿದೆ.
ಬಾಗಲಕೋಟೆ ಮೂಲದ ಸಿದ್ದರಾಮ ಹಾಗೂ ಹೇಮಾ ಮೃತ ದಂಪತಿ. ಮಕ್ಕಳಾದ ಮಲ್ಲಿಕಾರ್ಜುನ ಹಾಗೂ ಸಹನಾ ಗಾಯಗೊಂಡು ನರಗುಂದ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕುಟುಂಬಸ್ಥರು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಿಂದ ಪೂಜೆ ಮುಗಿಸಿಕೊಂಡು ಮರಳಿ ಊರಿಗೆ ಬರುತ್ತಿದ್ದಾಗ ದಾರಿ ಮಧ್ಯೆ ಈ ದುರ್ಘಟನೆ ನಡೆದಿದೆ. ಲಾರಿ ಹುಬ್ಬಳ್ಳಿ ಕಡೆಗೆ ಹೊರಟಿತ್ತು, ಕಾರು ಬಾಗಲಕೋಟೆಗೆ ಹೊರಟಿತ್ತು. ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ನರಗುಂದ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಗದಗ ಜಿಲ್ಲೆಯ ನರಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಪಘಾತ : ಸುಬ್ರಹ್ಮಣ್ಯದಿಂದ ವಾಪಸಾಗುತ್ತಿದ್ದ ದಂಪತಿ ಸಾವು
