ಪುತ್ತೂರು: ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಕಾಲೇಜಿನ ವತಿಯಿಂದ ಕಾಲೇಜಿನ ಸಂಶೋಧನಾ ಅಧ್ಯಯನ ಕೇಂದ್ರ ಹಾಗೂ ಐಕ್ಯೂಎಸಿ ಸಹಯೋಗದಲ್ಲಿ ರಾಜ್ಯಮಟ್ಟದ ವಿಚಾರ ಸಂಕಿರಣ, ಪ್ರಬಂಧ ಮಂಡನೆ ಹಾಗೂ ಭಿತ್ತಿಪತ್ರ ವಿನ್ಯಾಸ ಸ್ಪರ್ಧೆ ‘ಎನ್ವೋ-ಟೆಕ್-2024’ ನ.8 ರಂದು ಕಾಲೇಜಿನ ಸುವರ್ಣ ಮಹೋತ್ಸವ ಸಭಾಭವನದಲ್ಲಿ ನಡೆಯಲಿದೆ ಎಂದು ಕಾಲೇಜಿನ ಪ್ರಾಂಶುಪಾಲ ಪ್ರೊ.ವಿಷ್ಣು ಗಣಪತಿ ಭಟ್ ತಿಳಿಸಿದ್ದಾರೆ.
ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಪ್ರಸ್ತುತ ನಮ್ಮ ಸುತ್ತಮುತ್ತಲಿನ ಪರಿಸರದ ಸ್ವಾಸ್ಥ್ಯ ದಿನದಿಂದ ದಿನಕ್ಕೆ ಹದಗೆಡುತ್ತಿದ್ದು, ಈ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಒಳಿತಿಗಾಗಿ ಸುಸ್ಥಿರ ಪರಿಹಾತ ಎಂಬ ಧ್ಯೇಯದೊಂದಿಗೆ ಯುವಜನತೆಯ ಮನಸ್ಸಿನಲ್ಲಿ ಮೂಡಬಹುದಾದ ಸೃಜನಾತ್ಮಕ ಪರಿಹಾರಗಳಿಗೆ ಸೂಕ್ತ ವೇದಿಕೆ ಒದಗಿಸುವುದು ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ತಿಳಿಸಿದರು.
ಈಗಾಗಲೇ ರಾಜ್ಯದ ವಿವಿಧ ಕಾಲೇಜಿನ 156 ವಿದ್ಯಾರ್ಥಿ ಸ್ಪರ್ಧಾಳುಗಳು ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದಾರೆ. ಸುಮಾರು 300 ಮಂದಿ ಪಾಲ್ಗೊಳ್ಳುವ ನಿರೀಕ್ಷೆಯಿದೆ ಎಂದು ತಿಳಿಸಿದರು.
ಬೆಳಿಗ್ಗೆ 9.30 ಕ್ಕೆ ಮಣಿಪಾಲದ ಎಂಐಟಿಯ ಜಿಯೋಲಾಜಿ ವಿಭಾಗದ ಪ್ರಾಧ್ಯಾಪಕ ಡಾ.ಕೆ.ಬಾಲಕೃಷ್ಣ ಕಾರ್ಯಕ್ರಮ ಉದ್ಘಾಟಿಸಿ, ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ.ಕೆ.ಎಂ.ಕೃಷ್ಣ ಭಟ್ ವಹಿಸಲಿದ್ದಾರೆ. ಪರಿಸರ ತಜ್ಞ, ಅಂಕಣಕಾರ ಶಿವಾನಂದ ಕಳವೆ ಶಿರಸಿ ಹಾಗೂ ಮಣಿಪಾಲ ಎಂಐಟಿಯ ಜಿಯೋಲಾಜಿ ಮುಖ್ಯಸ್ಥ ಡಾ.ಕೆ.ಬಾಲಕೃಷ್ಣ ವಿವಿಧ ವಿಷಯಗಳ ಕುರಿತು ಗೋಷ್ಠಿಗಳನ್ನು ನಡೆಸಿಕೊಡಲಿದ್ದಾರೆ ಎಂದು ತಿಳಿಸಿದರು.
ಸಂಜೆ 3.15 ಕ್ಕೆ ನಡೆಯುವ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ವಿವೇಕಾನಂದ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಡಾ.ಶ್ರೀಪತಿ ಕಲ್ಲೂರಾಯ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಸಂಚಾಲಕ ಮುರಳಿಕೃಷ್ಣ ಕೆ.ಎನ್. ಪಾಲ್ಗೊಳ್ಳಲಿದ್ದಾರೆ ಎಂದು ಅವರು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಕಾಲೇಜಿನ ಸ್ನಾತಕೋತ್ತರ ವಿಭಾಗದ ಡೀನ್ ಡಾ.ವಿಜಯ ಸರಸ್ವತಿ ಬಿ., ಸೈನ್ಸ್ ವಿಭಾಗದ ಪ್ರೊ.ಡೀನ್ ಶವಪ್ರಸಾದ್ ಕೆ.ಎಸ್., ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥೆ ಭವ್ಯಾ ಉಪಸ್ಥಿತರಿದ್ದರು.