ಯಡಿಯೂರಪ್ಪ, ರಾಮುಲು ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ಸಿದ್ಧತೆ
ಬೆಂಗಳೂರು: ಕೋವಿಡ್ ಕಾಲದಲ್ಲಿ ಮಡೆದಿದೆ ಎನ್ನಲಾಗಿರುವ ಅಕ್ರಮ ಕುರಿತಂತೆ ನ್ಯಾಯಾಧೀಶ ಮೈಕಲ್ ಕುನ್ಹಾ ಆಯೋಗದ ಮಧ್ಯಂತರ ವರದಿ ಆಧರಿಸಿ ಬಿಜೆಪಿಯನ್ನು ಇಕ್ಕಟ್ಟಿಗೆ ಸಿಲುಕಿಸಲು ಕಾಂಗ್ರೆಸ್ ಸರಕಾರ ಮುಂದಾಗಿದೆ. ವರದಿಯ ಆಧಾರದಲ್ಲಿ ಆಗ ಮುಖ್ಯಮಂತ್ರಿಯಾಗಿದ್ದ ಬಿ.ಎಸ್ ಯಡಿಯೂರಪ್ಪ ಹಾಗೂ ಆರೋಗ್ಯ ಸಚಿವರಾಗಿದ್ದ ಬಿ. ಶ್ರೀರಾಮುಲು ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಸರ್ಕಾರ ಸಿದ್ಧತೆ ನಡೆಸಿದೆ. ಇದರೊಂದಿಗೆ ಆಡಳಿತಾರೂಢ ಕಾಂಗ್ರೆಸ್ ಮತ್ತು ಪ್ರತಿಪಕ್ಷ ಬಿಜೆಪಿ ನಡುವಿನ ಸಂಘರ್ಷ ಮತ್ತಷ್ಟು ತೀವ್ರಗೊಂಡಿದೆ.
ಕೋವಿಡ್ ಕಾಲದ ಪಿಪಿಇ ಕಿಟ್ ಖರೀದಿಯಲ್ಲಿ ನಡೆದಿರುವ ಭ್ರಷ್ಟಾಚಾರದಲ್ಲಿ ಯಡಿಯೂರಪ್ಪ ಮತ್ತು ಅಂದಿನ ಆರೋಗ್ಯ ಸಚಿವ ಬಿ.ಶ್ರೀರಾಮುಲು ನೇರವಾಗಿ ಭಾಗಿಯಾಗಿದ್ದು, ಭ್ರಷ್ಟಾಚಾರ ನಿಷೇಧ ಕಾಯ್ದೆಯಡಿ ಈ ಇಬ್ಬರ ವಿರುದ್ಧವೂ ಪ್ರಕರಣ ದಾಖಲಿಸಬೇಕೆಂದು ನ್ಯಾ. ಕುನ್ಹಾ ಸಮಿತಿ ಶಿಫಾರಸು ಮಾಡಿದೆ. ಈ ವರದಿ ಆಧಾರದಲ್ಲಿ ಕ್ರಮ ಕೈಗೊಳ್ಳಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಕೋವಿಡ್ ಹಗರಣದ ಕುರಿತು ಮಾಧ್ಯಮಗಳಲ್ಲಿ ಬಂದಿರುವ ವರದಿ ನೀರಿನಲ್ಲಿ ಮುಳುಗಿರುವ ಮಂಜು ಪರ್ವತದ ತುದಿ ಮಾತ್ರ. ಆಳಕ್ಕಿಳಿದರೆ ಇನ್ನಷ್ಟು ಹಗರಣಗಳು ಬಯಲಾಗುತ್ತವೆ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ನ್ಯಾ. ಕುನ್ಹಾ ವರದಿಯಲ್ಲಿ ಯಡಿಯೂರಪ್ಪ ಮತ್ತು ಶ್ರೀರಾಮುಲು ವಿರುದ್ಧ ಪ್ರಾಸಿಕ್ಯೂಷನ್‌ಗೆ ಶಿಫಾರಸು ಮಾಡಲಾಗಿದೆ. ಈ ಕುರಿತು ಸಂಪುಟ ಉಪಸಮಿತಿಯಲ್ಲಿ ಮತ್ತೊಮ್ಮೆ ಚರ್ಚಿಸಿ ಅಂತಿಮ ನಿರ್ಣಯ ಮಾಡಲಾಗುವುದು ಎಂದು ಇದೇ ವೇಳೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಈ ವಿಚಾರದಲ್ಲಿ ಸರ್ಕಾರ ಎಚ್ಚರಿಕೆಯ ಹೆಜ್ಜೆ ಇಡಲಿದೆ. ಆತುರದ ನಿರ್ಧಾರಗಳಿಂದ ತಪ್ಪಿತಸ್ಥರು ಕೋರ್ಟ್ ಮೊರೆ ಹೋಗಿ ತಾಂತ್ರಿಕ ಅಂಶಗಳ ಆಧಾರದಲ್ಲಿ ತಡೆಯಾಜ್ಞೆ ತರುತ್ತಾರೆ. ಕೋವಿಡ್ ಸಂದರ್ಭದಲ್ಲಿ ಅಕ್ರಮ ಎಸಗಿದವರನ್ನು ಕಾನೂನು ಕುಣಿಕೆಯಿಂದ ತಪ್ಪಿಸಿಕೊಳ್ಳಲು ಬಿಡುವುದಿಲ್ಲ ಎಂದು ತಿಳಿಸಿದ್ದಾರೆ.
ಕೋವಿಡ್ ಕಾಲದಲ್ಲಿ ಅಸಹಾಯಕ ಜನರ ನೆರವಿಗೆ ಧಾವಿಸಿ ಅವರಿಗೆ ಸೂಕ್ತ ಚಿಕಿತ್ಸೆ ನೀಡಿ ರಕ್ಷಣೆ ಮಾಡಬೇಕಾದ ಹೊಣೆ ಸರ್ಕಾರದ್ದಾಗಿತ್ತು. ಆದರೆ, ಜನ ಸರಿಯಾಗಿ ಚಿಕಿತ್ಸೆ ಇಲ್ಲದೆ ಸಾಯುತ್ತಿದ್ದ ಸಂದರ್ಭವನ್ನೂ ಬಳಸಿಕೊಂಡು ಬಿಜೆಪಿಯವರು ದುಡ್ಡು ನುಂಗಿದ್ದಾರೆ. ಬೆಡ್, ಪಿಪಿಇ ಕಿಟ್, ವೆಂಟಿಲೇಟರ್, ಆಕ್ಸಿಜನ್ ಸಿಲಿಂಡರ್‌ನಿಂದ ಹಿಡಿದು ಸ್ಯಾನಿಟೈಸರ್‌ವರೆಗೆ ಪ್ರತಿಯೊಂದು ಸಾಮಗ್ರಿ ಖರೀದಿಯಲ್ಲಿ ನಡೆದಿರುವ ಭ್ರಷ್ಟಾಚಾರ ಬಯಲಿಗೆ ಬಂದಿದೆ. ಈ ಕುರಿತಂತೆ ನ್ಯಾ.ಕುನ್ಹಾ ವರದಿ ಆಧರಿಸಿ ಸರ್ಕಾರ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಿದೆ ಎಂದು ಸಿಎಂ ಸ್ಪಷ್ಟಪಡಿಸಿದ್ದಾರೆ.
ಪಿಪಿಇ ಕಿಟ್ ಖರೀದಿಯಲ್ಲಿ ಯಡಿಯೂರಪ್ಪ ಹಾಗೂ ಅಂದಿನ ಆರೋಗ್ಯ ಸಚಿವ ಶ್ರೀರಾಮುಲು ಅವರು ಅಕ್ರಮ ಎಸಗಿದ್ದಾರೆ. ದೇಶದ ಮಾರುಕಟ್ಟೆಯಲ್ಲಿ ಪಿಪಿಇ ಕಿಟ್ ಬೆಲೆ 330 ರೂ. ಇದ್ದರೂ, ಚೀನಾ ಕಂಪನಿಯಿಂದ 2,104 ರೂ. ದುಬಾರಿ ಬೆಲೆಗೆ ಖರೀದಿಸಿದ್ದಾರೆ. ಇದರಿಂದ ಸರ್ಕಾರದ ಬೊಕ್ಕಸಕ್ಕೆ 14 ಕೋಟಿ ರೂ. ನಷ್ಟವಾಗಿದೆ ಎಂದು 1,500 ಪುಟಗಳ ಮಧ್ಯಂತರ ವರದಿಯಲ್ಲಿ ಆಯೋಗ ತಿಳಿಸಿದೆ.
ಹಲವು ಪ್ರಕರಣಗಳಲ್ಲಿ ಕಂಪನಿಗಳಿಂದ ಹಣ ರಿಕವರಿಗೆ ವರದಿಯಲ್ಲಿ ಸೂಚಿಸಲಾಗಿದೆ.