ಹೈಕೋರ್ಟ್ ತೀರ್ಪು ಟೀಕಿಸಿದ ಜಮೀರ್ ವಿರುದ್ಧ ಕ್ರಮಕ್ಕೆ ಸೂಚನೆ
ಬೆಂಗಳೂರು: ಮುಡಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಆದೇಶದ ಬಗ್ಗೆ ವಿವಾದಾತ್ಮಕವಾಗಿ ಮಾತನಾಡಿದ್ದ ಸಚಿವ ಜಮೀರ್ ಅಹಮ್ಮದ್ ಖಾನ್ ಇದೀಗ ಸಂಕಷ್ಟ ಎದುರಾಗಿದೆ.
ಮುಡಾ ಅಕ್ರಮಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಹೈಕೋರ್ಟ್ ನೀಡಿದ ತೀರ್ಪಿನ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿರುವ ವಕ್ಫ್ ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ಕ್ರಮ ಕೈಗೊಳ್ಳಲು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅನುಮತಿ ನೀಡಿದ್ದಾರೆ.
ಮುಡಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಆದೇಶದ ಬಗ್ಗೆ ವಿವಾದಾತ್ಮಕವಾಗಿ ಮಾತನಾಡಿದ್ದ ಸಚಿವ ಜಮೀರ್ ಅಹಮ್ಮದ್ ಖಾನ್ ನ್ಯಾಯಾಂಗ ನಿಂದನೆ ಆರೋಪ ಎದುರಿಸುತ್ತಿದ್ದಾರೆ. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸರ್ಕಾರದ ಅಡ್ವೋಕೇಟ್ ಜನರಲ್ಗೆ ಸೂಚನೆ ನೀಡಿದ್ದಾರೆ.
ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಾಹಂ ನೀಡಿದ ದೂರಿನ ಮೇರೆಗೆ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿಕೆ ಸಂಬಂಧ ಅಡ್ವೋಕೇಟ್ ಜನರಲ್ಗೆ ರಾಜ್ಯಪಾಲರು ಪತ್ರ ಬರೆದು ಮುಂದಿನ ಕಾನೂನು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.
ರಾಜ್ಯಪಾಲರು ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣದ ತನಿಖೆಗೆ ಅನುಮತಿ ನೀಡಿದಾಗ ಇದನ್ನು ಪ್ರಶ್ನಿಸಿ ಸಿದ್ದರಾಮಯ್ಯ ಹೈಕೋರ್ಟ್ ಮೆಟ್ಟಿಲೇರಿದ್ದರು. ಹೈಕೋರ್ಟ್ ಸಿಎಂ ವಿರುದ್ಧದ ತನಿಖೆಗೆ ಆದೇಶಿಸಿತ್ತು. ಈ ತೀರ್ಪನ್ನು ಜಮೀರ್ ಅಹಮ್ಮದ್ ಖಾನ್ ರಾಜಕೀಯ ಪ್ರೇರಿತವಾಗಿದ್ದು, ಅದೊಂದು ರಾಜಕೀಯ ತೀರ್ಪು ಎಂದು ಟೀಕಿಸಿದ್ದರು. ಆ ಹಿನ್ನೆಲೆಯಲ್ಲಿ ಟಿ.ಜೆ. ಅಬ್ರಹಾಂ ಅವರು ಜಮೀರ್ ವಿರುದ್ಧ ನ್ಯಾಯಾಂಗ ನಿಂದನೆ ಕೇಸ್ ದಾಖಲಿಸಿದ್ದಾರೆ.
ಜಮೀರ್ ಅಹಮ್ಮದ್ ಖಾನ್ ನ್ಯಾಯಾಂಗ ನಿಂದನೆ ಮಾಡಿದ್ದಾರೆ ಎಂದು ಅಬ್ರಾಹಂ ರಾಜ್ಯಪಾಲರಿಗೆ ದೂರು ನೀಡಿದ್ದರು. ಈ ದೂರಿನ ಮೇರೆಗೆ ರಾಜ್ಯಪಾಲರು ಜಮೀರ್ ವಿರುದ್ಧ ಕ್ರಮಕ್ಕೆ ಸೂಚಿಸಿದ್ದಾರೆ.

