ಆಸ್ಪತ್ರೆಯಲ್ಲಿ ಬೆಂಕಿ ಅವಘಡ : 10 ನವಜಾತ ಶಿಶುಗಳು ಜೀವಂತ ದಹನ

ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ ಹತ್ತಿಕೊಂಡು ಸಂಭವಿಸಿದ ಭೀಕರ ದುರಂತ

ಲಖನೌ : ಉತ್ತರ ಪ್ರದೇಶದ ಝಾನ್ಸಿ ಜಿಲ್ಲೆಯ ಸ್ಥಳೀಯ ವೈದ್ಯಕೀಯ ಕಾಲೇಜಿನ ಮಕ್ಕಳ ವಾರ್ಡ್‌ನಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿ 10 ನವಜಾತ ಶಿಶುಗಳು ಸಜೀವ ದಹನವಾಗಿರುವ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ. ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹತ್ತಿಕೊಂಡಿದ್ದು, ನಂತರ ಬೆಂಕಿಯ ಕೆನ್ನಾಲಿಗೆ ನವಜಾತ ಶಿಶುಗಳ ತೀವ್ರ ನಿಗಾ ಘಟಕಕ್ಕೆ ಹರಡಿದೆ. ಬೆಂಕಿ ಹೊತ್ತಿಕೊಂಡಾಗ ಕಂಗೆಟ್ಟ ಮಕ್ಕಳ ಪೋಷಕರು ಜೋರಾಗಿ ಕಿರುಚಾಡತೊಡಗಿದ್ದಾರೆ. ಆಸ್ಪತ್ರೆಯ ಸಿಬ್ಬಂದಿ ಕೂಡ ಆಘಾತಗೊಂಡಿದ್ದು, ವೈದ್ಯರು ಮತ್ತು ಇತರ ಸಿಬ್ಬಂದಿ ವಾರ್ಡ್‌ನ ಕಿಟಕಿ ಗಾಜುಗಳನ್ನು ಒಡೆದು ಅವುಗಳ ಮೂಲಕ ರೋಗಿಗಳನ್ನು ಹೊರಕ್ಕೆ ಕಳುಹಿಸಿದ್ದಾರೆ.
ಆದರೆ ಅಷ್ಟರಲ್ಲಾಗಲೇ 10 ಶಿಶುಗಳು ಸಜೀವ ದಹನವಾಗಿವೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ತಲುಪುವ ವೇಳೆಗಾಗಲೇ ಎನ್‌ಐಸಿಯು ವಾರ್ಡ್ ದಟ್ಟ ಹೊಗೆಯಿಂದ ತುಂಬಿಕೊಂಡಿತ್ತು. ದುರ್ಘಟನೆಯಲ್ಲಿ ಸುಮಾರು 10 ನವಜಾತ ಶಿಶುಗಳು ಸುಟ್ಟು ಕರಕಲಾಗಿವೆ. ಈ ನಡುವೆ ವಾರ್ಡ್‌ನ ಕಿಟಕಿ ಒಡೆದು ಹಲವು ಕಂದಮ್ಮಗಳನ್ನು ರಕ್ಷಿಸಲಾಗಿದೆ. ಸ್ಥಳದಲ್ಲಿ ರಕ್ಷಣಾ ಕಾರ್ಯ ಇನ್ನೂ ನಡೆಯುತ್ತಿದೆ.
ಘಟನೆಯಲ್ಲಿ ಹಲವು ಮಕ್ಕಳಿಗೆ ಗಂಭೀರ ಗಾಯಗಳಾಗಿದ್ದು, 16 ಶಿಶುಗಳು ಚಿಂತಾಜನಕ ಸ್ಥಿತಿಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿವೆ ಎಂದು ತಿಳಿದುಬಂದಿದೆ. ವಾರ್ಡ್‌ನಲ್ಲಿ 54 ಮಕ್ಕಳು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದವು ಎಂದು ತಿಳಿದುಬಂದಿದೆ.
ಮಕ್ಕಳ ವಾರ್ಡ್‌ನ ಎರಡು ಘಟಕಗಳ ಪೈಕಿ ಒಂದರಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿದ್ದು, ಎನ್‌ಐಸಿಯುದ ಹೊರಭಾಗದಲ್ಲಿದ್ದ ಮಕ್ಕಳನ್ನು ರಕ್ಷಿಸಲಾಗಿದೆ. ಒಳ ಭಾಗದಲ್ಲಿದ್ದ ಕೆಲವು ಮಕ್ಕಳ ಜೀವ ಉಳಿದಿದೆ ಎಂದು ತಿಳಿದುಬಂದಿದೆ.
ದುರ್ಘಟನೆ ಸಂಬಂಧ ಉತ್ತರಪ್ರದೇಶ ಸರ್ಕಾರ ತನಿಖೆಗೆ ಆದೇಶಿಸಿದ್ದು, ಉನ್ನತ ಮಟ್ಟದ ಸಮಿತಿಯೊಂದನ್ನು ರಚಿಸಿದೆ. ಸ್ಥಳಕ್ಕೆ ಆರು ಅಗ್ನಿಶಾಮಕ ವಾಹನಗಳ ಜತೆಯಲ್ಲಿ ಭಾರಿ ಸಂಖ್ಯೆಯಲ್ಲಿ ಪೊಲೀಸ್ ಸಿಬ್ಬಂದಿ ದೌಡಾಯಿಸಿ, ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದು, ಆಸ್ಪತ್ರೆಯ ಹೊರಗೆ ಮೃತಪಟ್ಟ ಮಕ್ಕಳ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.
ಘಟನೆ ಸಂಬಂಧ ಪ್ರತಿಕ್ರಿಯೆ ನೀಡಿರುವ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಘಟನೆ ಬಗ್ಗೆ ಮಾಹಿತಿ ಪಡೆದು ಉಪಮುಖ್ಯಮಂತ್ರಿ ಬ್ರಜೇಶ್ ಪಾಠಕ್ ಮತ್ತು ಪ್ರಧಾನ ಕಾರ್ಯದರ್ಶಿಯನ್ನು ಝಾನ್ಸಿಗೆ ಕಳುಹಿಸಲಾಗಿದೆ. ಇದರೊಂದಿಗೆ ಝಾನ್ಸಿ ಕಮಿಷನರ್ ಮತ್ತು ಡಿಐಜಿಗೆ ಅಪಘಾತದ ತನಿಖೆಗೆ ಆದೇಶಿಸಲಾಗಿದೆ. ಎಲ್ಲ ಮಕ್ಕಳು ಕೂಡಲೇ ಗುಣಮುಖರಾಗಲಿ ಎಂದು ದೇವರ ಬಳಿ ಪ್ರಾರ್ಥಿಸಿದ್ದೇನೆ ಎಂದು ತಿಳಿಸಿದ್ದಾರೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top