ಪುತ್ತೂರು: ಭಜನಾ ಸೇವೆ ಹಾಗೂ ಭಜನಾ ಸೇವೆಯಲ್ಲಿ ಪಾಲ್ಗೊಳ್ಳುವ ಮಹಿಳೆಯರ ಕುರಿತು ಅವಹೇಳನಕಾರಿಯಾಗಿ ಮಾತನಾಡಿ ಸಮಾಜದ ಸ್ವಾಸ್ಥ್ಯ ಕೆಡಿಸುತ್ತಿರುವವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಬೃಹತ್ ಭಜಕರ ಸಮಾವೇಶವನ್ನು ನ.24 ರಂದು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಭಜನಾ ಪರಿಷತ್ ಪುತ್ತೂರು ತಾಲೂಕು ಅಧ್ಯಕ್ಷ ಲೋಕೇಶ್ ಬೆತ್ತೋಡಿ ತಿಳಿಸಿದ್ದಾರೆ.
ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಭಜನಾ ಪರಿಷತ್ ಪುತ್ತೂರು ತಾಲೂಕು, ವಿವಿಧ ಹಿಂದೂಪರ ಸಂಘಟನೆಗಳು ಹಾಗೂ ಭಜಕರ ನೇತೃತ್ವದಲ್ಲಿ ಸಮಾವೇಶ ಹಮ್ಮಿಕೊಳ್ಳಲಾಗಿದ್ದು, ಸಮಾವೇಶದ ಅಂಗವಾಗಿ ಬೆಳಿಗ್ಗೆ ದರ್ಬೆ ವೃತ್ತದಿಂದ ಭಜಕರ ಭಜನಾ ಸಂಕೀರ್ತನೆ ಮೂಲಕ ಮೆರವಣಿಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ತನಕ ನಡೆಯಲಿದೆ. ಮೆರವಣಿಗೆ ಬಳಿಕ 10.30 ಕ್ಕೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ ನಡೆಯಲಿದೆ. ಕಾರ್ಯಕ್ರಮದಲ್ಲಿ 50 ಭಜನಾ ಮಂಡಳಿಗಳ ಸುಮಾರು ಒಂದು ಸಾವಿರ ಮಂದಿ ಪಾಲ್ಗೊಳ್ಳುವ ನಿರೀಕ್ಷೆಯಿದೆ ಎಂದು ತಿಳಿಸಿದರು.
11 ಗಂಟೆಗೆ ನಡೆಯುವ ಸಮಾವೇಶದಲ್ಲಿ ಶ್ರೀ ಧಾಮ ಮಾಣಿಲದ ಶ್ರೀ ಮೋಹನದಾಸ ಸ್ವಾಮೀಜಿ ಸಮಾವೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಉಜಿರೆ ಎಸ್ ಡಿಎಂ ಕಾಲೇಜಿನ ಪ್ರಾಧ್ಯಾಪಕಿ ಹರಿಣಿ ಪುತ್ತೂರಾಯ ಉಪಸ್ಥಿತರಿರುವರು ಎಂದು ಹೇಳಿದರು.
ಸಮಾವೇಶದಲ್ಲಿ ಪಾಲ್ಗೊಂಡ ಭಜಕರ ಸಹಿ ಸಂಗ್ರಹಿಸಿ ಭಜನೆ ಹಾಗೂ ಭಜನಾ ಸೇವೆಯಲ್ಲಿ ಪಾಲ್ಗೊಳ್ಳುವ ಮಹಿಳೆಯರ ಕುರಿತು ಅವಹೇಳಕಾರಿಯಾಗಿ ಮಾತನಾಡುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಪುತ್ತೂರು ತಹಶೀಲ್ದಾರ್ ಮೂಲಕ ರಾಜ್ಯದ ರಾಜ್ಯಪಾಲರಿಗೆ ಮನವಿಯನ್ನು ನ.25 ರಂದು ಸಲ್ಲಿಸಲಾಗುವುದು ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಭಜನಾ ಪರಿಷತ್ ಕಾರ್ಯದರ್ಶಿ ಡಾ.ಗೋಪಾಲಕೃಷ್ಣ, ಉಪಾಧ್ಯಕ್ಷ ದಿನೇಶ್ ಸಾಲಿಯಾನ್, ಕೋಶಾಧಿಕಾರಿ ಸುಧಾಕರ ಕುಲಾಲ್, ಮಾಜಿ ಅಧ್ಯಕ್ಷ ಸುಬ್ಬಯ್ಯ ರೈ ಉಪಸ್ಥಿತರಿದ್ದರು.