ಈಗಾಗಲೇ ರದ್ದಾಗಿರುವ ಕಾರ್ಡ್‌ಗಳನ್ನು ಸರಿಮಾಡಿಕೊಡಲು ಸೂಚನೆ
ಬೆಂಗಳೂರು : ಬಿಪಿಎಲ್ ಕಾರ್ಡ್ ರದ್ದಾಗುತ್ತಿರುವ ವಿಚಾರ ತೀವ್ರ ಆಕ್ರೋಶಕ್ಕೆ ಗುರಿಯಾಗುತ್ತಿದ್ದಂತೆ ಎಚ್ಚೆತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವುದೇ ಬಿಪಿಎಲ್ ಕಾರ್ಡ್ ರದ್ದು ಮಾಡಬಾರದು ಎಂದು ಆದೇಶ ಹೊರಡಿಸಿದ್ದಾರೆ.
ಸುಮಾರು 11 ಲಕ್ಷ ಬಿಪಿಎಲ್ ಕಾರ್ಡ್‌ಗಳನ್ನು ರದ್ದು ಮಾಡಿರುವ ಸರಕಾರದ ಕ್ರಮದ ವಿರುದ್ಧ ಸಾರ್ವಜನಿಕರು ಸಿಡಿದೆದ್ದಿದ್ದಾರೆ. ಎಲ್ಲೆಡೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿರುವುದರಿಂದ ಎಚ್ಚೆತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರಿ ನೌಕರರು ಮತ್ತು ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ ಯಾರೊಬ್ಬರ ಬಿಪಿಎಲ್ ಕಾರ್ಡ್ ರದ್ದು ಮಾಡದಂತೆ ಆಹಾರ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಸಿಎಂ, ಸರ್ಕಾರಿ ನೌಕರರು ಮತ್ತು ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ ಯಾರೊಬ್ಬರ ಪಡಿತರ ಚೀಟಿ ರದ್ದು ಮಾಡಬಾರದು. ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿದಾರರನ್ನು ಹೊರತುಪಡಿಸಿದಂತೆ ಉಳಿದ ಯಾವುದೇ ಕುಟುಂಬದವರ ಪಡಿತರ ಚೀಟಿ ರದ್ದಾಗಿದ್ದರೆ ತಕ್ಷಣ ವಾಪಸ್ ನೀಡುವಂತೆ ಆದೇಶ ಹೊರಡಿ ಬಡ ಕುಟುಂಗಳ ಪಡಿತರ ಚೀಟಿಗಳನ್ನು ವಿನಾಕಾರಣ ರದ್ದು ಮಾಡಿದರೆ ಆಹಾರ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸುವುದಾಗಿ ಎಚ್ವರಿಕೆ ನೀಡಿದ್ದಾರೆ.
ಕಳೆದ ಆಗಸ್ಟ್ ತಿಂಗಳಿನಲ್ಲೇ ಆಹಾರ ಇಲಾಖೆಗೆ ಇ-ಗವರ್ನೆನ್ಸ್ ಇಲಾಖೆ ಮಾಹಿತಿ ಕೊಟ್ಟಿದೆ. ಈ ಮಾಹಿತಿ ಇಟ್ಟುಕೊಂಡು 22 ಲಕ್ಷ ಅನರ್ಹ ಬಿಪಿಎಲ್ ಕಾರ್ಡ್‌ಗಳನ್ನು ರದ್ದು ಮಾಡಲು ಮುಂದಾಗಿದೆ. ಆದರೆ ಇದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಸರ್ಕಾರಿ ನೌಕರರು ಅಲ್ಲದ ಹಾಗೂ ತೆರಿಗೆ ಕಟ್ಟದ ಕುಟುಂಬಗಳ ಬಿಪಿಎಲ್ ಕಾರ್ಡ್ಗಳು ಸಹ ತಿರಸ್ಕೃತಗೊಂಡಿವೆ. ಇದರಿಂದ ನೊಂದ ಜನರು ಸಾಮಾಜಿಕ ಜಾಲತಾಣ, ಮಾಧ್ಯಮಗಳ ಮೂಲಕ ಸರ್ಕಾರವನ್ನ ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.
ರೇಶನ್ ಕಾರ್ಡ್ ರದ್ದಾಗಿರುವುದು ಬಿಜೆಪಿ-ಜೆಡಿಎಸ್‌ಗೆ ಹೋರಾಟ ಮಾಡಲು ಇನ್ನೊಂದು ಪ್ರಬಲ ಅಸ್ತ್ರ ಸಿಕ್ಕಿದಂತಾಗಿತ್ತು. ಚುನಾವಣೆ ಗೆಲ್ಲಲು ಗ್ಯಾರಂಟಿಗಳನ್ನು ಘೋಷಿಸಿ ಈಗ ಅದನ್ನು ನೀಡಲು ಸಾಧ್ಯವಾಗದೆ ಕಾಂಗ್ರೆಸ್ ಸರಕಾರ ಈಗ ಬಿಪಿಎಲ್ ಕಾರ್ಡ್‌ಗಳನ್ನೇ ರದ್ದು ಮಾಡುತ್ತಿದೆ ಎಂದು ವಿಪಕ್ಷದವರು ಆರೋಪಿಸುತ್ತಿದ್ದಾರೆ. ಸದ್ಯದಲ್ಲೇ ನಡೆಯಲಿರುವ ವಿಧಾನಮಂಡಲದ ಚಳಿಗಾಲದ ಅಧಿವೇಶನದಲ್ಲೂ ಈ ವಿಚಾರ ಗದ್ದಲಕ್ಕೆ ಕಾರಣವಾಗಲಿರುವುದರಿಂದ ಸಿದ್ದರಾಮಯ್ಯ ಡ್ಯಾಮೇಜ್ ಕಂಟ್ರೋಲ್ ಮಾಡುವ ಸಲುವಾಗಿ ಬಿಪಿಎಲ್ ಕಾರ್ಡ್ ರದ್ದು ಮಾಡದಂತೆ ಆದೇಶ ಹೊರಡಿಸಿ ಈಗಾಗಲೇ ರದ್ದಾಗಿರುವ ಬಿಪಿಎಲ್ ಕಾರ್ಡ್‌ಗಳನ್ನು ಸಂಬಂಧಪಟ್ಟವರಿಗೆ ಸರಿ ಮಾಡಿ ವಾಪಸ್ ನೀಡುವಂತೆ ಖಡಕ್ ಸೂಚನೆ ನೀಡಿದ್ದಾರೆ.