ಕಡಬ: ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನ ಕಡಬ ತಾಲೂಕು ಘಟಕದ ವತಿಯಿಂದ ನಾಲ್ಕನೇ ಕನ್ನಡ ಸಾಹಿತ್ಯ ಸಮ್ಮೇಳನ ನ.30 ಶನಿವಾರ ಕುಂತೂರು ಪದವು ಸೈಂಟ್ ಜಾರ್ಜ್ ಕನ್ನಡ ಮಾಧ್ಯಮ ಪ್ರೌಢ ಶಾಲಾ ಆವರಣದಲ್ಲಿ ನಡೆಯಲಿದೆ ಎಂದು ಕನ್ನಡ ಸಾಹಿತ್ಯ ಪರಿಷತ್‌ನ ಕಡಬ ತಾಲೂಕು ಘಟಕದ ಅಧ್ಯಕ್ಷ ಸೇಸಪ್ಪ ರೈ ರಾಮಕುಂಜ ಹೇಳಿದರು.
ಅವರು ಕಡಬದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸಮ್ಮೇಳನದ ಸರ್ವಾಧ್ಯಕ್ಷ ಕರುಣಾಕರ ಗೋಗಟೆ ಅವರ ಅಧ್ಯಕ್ಷತೆಯಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಸ್ವಾಗತ ಸಮಿತಿಯ ನೇತೃತ್ವದಲ್ಲಿ ಎಲ್ಲಾ ಕಾರ್ಯಗಳು ನಡೆಯಲಿದೆ ಎಂದರು.
ಪದವು ಸೈಂಟ್ ಜಾರ್ಜ್ ಆರ್ಥೋಡಕ್ಸ್ ಚರ್ಚ್ ಬಳಿಯಿಂದ ಹೊರಡುವ ಕನ್ನಡ ಭುವನೇಶ್ವರಿ ರಥದ ಮೆರವಣಿಗೆಯನ್ನು ಪೆರಾಬೆ ಗ್ರಾಮ ಪಂಚಾಯಿತಿ ಸದಸ್ಯ ಪಿ.ಜಿ.ರಾಜು ಉದ್ಘಾಟಿಸಲಿದ್ದಾರೆ. ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಆಶಾ ತಿಮ್ಮಪ್ಪ ಗೌಡ ಪುಷ್ಪಾರ್ಚನೆ ನೆರವೇರಿಸಲಿದ್ದಾರೆ. ಧ್ವಜಾರೋಣ ಕಾರ್ಯಕ್ರಮದ ಬಳಿಕ ನಡೆಯುವ ಸಮ್ಮೇಳನವನ್ನು ಮಂಗಳೂರು ಆಕಾಶವಾಣಿಯ ನಿವೃತ್ತ ನಿರ್ದೇಶಕ ಡಾ.ವಸಂತ್ ಕುಮಾರ್ ಪೆರ್ಲ ಉದ್ಘಾಟಿಸಲಿದ್ದಾರೆ. ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ದೀಪ ಪ್ರಜ್ವಲನೆ ಮಾಡಿಲಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್‌ನ ದ.ಕ. ಜಿಲ್ಲಾಧ್ಯಕ್ಷ ಡಾ.ಎಂ.ಪಿ.ಶ್ರೀನಾಥ್ ಆಶಯ ನುಡಿಯನ್ನಾಡಲಿದ್ದಾರೆ. ಸೈಂಟ್ ಜಾರ್ಜ್ ಶಾಲಾ ಆಡಳಿತ ಮಂಡಳಿ ಅಧ್ಯಕ್ಷ,, ಧರ್ಮಗುರು ಫಾ.ನಿತಿನ್ ಮ್ಯಾಥ್ಯೂ ಆಶೀರ್ವಚನ ನೀಡಲಿದ್ದಾರೆ. ಪುತ್ತೂರು ಸಹಾಯಕ ಆಯುಕ್ತ ಜುಬಿನ್ ಮೊಹಪಾತ್ರ, ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಸಂಚಾಲಕ ಕೆ.ಸೀತಾರಾಮ ರೈ ಸವಣೂರು, ಕಡಬ ತಹಸೀಲ್ದಾರ್ ಪ್ರಭಾಕರ ಖಜೂರೆ, ಕಡಬ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ನವೀನ್ ಕುಮಾರ್ ಭಂಡಾರಿ, ಕ್ಷೇತ್ರ ಶಿಕ್ಷಣಾಕಾರಿ ಲೋಕೇಶ್ ಎಸ್.ಆರ್. ಹಾಗೂ ವಿವಿಧ ಗ್ರಾಮ ಪಂಚಾಯಿತಿಗಳ ಅಧ್ಯಕ್ಷರುಗಳು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಸಮಾರೋಪ ಸಮಾರಂಭದಲ್ಲಿ ಪುತ್ತೂರು ವಿವೇಕಾನಂದ ಕಾಲೇಜಿನ ಪರೀಕ್ಷಾಂಗ ಕುಲಸಚಿವ ಎಚ್.ಜಿ.ಶ್ರೀಧರ್ ಸಮಾರೋಪ ಭಾಷಣ ಮಾಡಲಿದ್ದಾರೆ. ಆಲಂಕಾರು ಸಿ.ಎ.ಬ್ಯಾಂಕ್ ಅಧ್ಯಕ್ಷ ಧರ್ಮಪಾಲ ರಾವ್, ಎಸ್‌ಆರ್‌ಕೆ ಲ್ಯಾಡರ್ಸ್ ನ ಕೇಶವ ಅಮೈ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ವಿಚಾರಗೋಷ್ಠಿ, ಕವಿಗೋಷ್ಠಿ, ಕೃತಿ ಬಿಡುಗಡೆ, ಸಮ್ಮೇಳನಾಧ್ಯಕ್ಷರೊಂದಿಗೆ ಸಂವಾದ, ಸಾಧಕರಿಗೆ ಸನ್ಮಾನ, ಜಿಲ್ಲಾ ಪ್ರಶಸ್ತಿ ಪುರಸ್ಕೃತ ಶಿಕ್ಷಕರಿಗೆ ಅಭಿನಂದನೆ, ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದು ಸೇಸಪ್ಪ ರೈ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಸ್ವಾಗತ ಸಮಿತಿಯ ಅಧ್ಯಕ್ಷ ಗುರುರಾಜ್ ರೈ ಕೇವಳ, ಕಾರ್ಯದರ್ಶಿ ಹರಿಶ್ಚಂದ್ರ ಕೆ., ಕನ್ನಡ ಸಾಹಿತ್ಯ ಪರಿಷತ್‌ನ ಕಡಬ ಹೋಬಳಿ ಅಧ್ಯಕ್ಷ ಪದ್ಮಪ್ಪ ಗೌಡ, ತಾಲೂಕು ಘಟಕದ ಕೋಶಾಧ್ಯಕ್ಷ ಬಾಲಚಂದ್ರ ಮುಚ್ಚಿಂತಾಯ, ಆರ್ಥಿಕ ಸಮಿತಿಯ ಸಂಚಾಲಕ ವಿ.ಐ.ಅಬ್ರಹಾಂ, ತಾಲೂಕು ಘಟಕದ ಸದಸ್ಯೆ ಪ್ರೇಮಾ ಬಿ. ರಾಮಕುಂಜ ಉಪಸ್ಥಿತರಿದ್ದರು.