38 ತಿಂಗಳ ಅರಿಯರ್ಸ್ ಬಿಡುಗಡೆ, ವೇತನ ಹೆಚ್ಚಳ ಬೇಡಿಕೆ
ಬೆಂಗಳೂರು: 38 ತಿಂಗಳಿಂದ ಬಾಕಿಯಿರುವ ಅರಿಯರ್ಸ್ ಬಿಡುಗಡೆ, ವೇತನ ಏರಿಕೆ ಮುಂತಾದ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಮುಷ್ಕರ ಹೂಡಲು ಕೆಸ್‌ಆರ್‌ಟಿಸಿ ನೌಕರರು ಸಿದ್ಧತೆ ಮಾಡುತ್ತಿದ್ದಾರೆ. ಡಿಸೆಂಬರ್ 31ರಿಂದ ಸಾರಿಗೆ ಮುಷ್ಕರಕ್ಕೆ ಸಾರಿಗೆ ನೌಕರರ ಹಿರಿಯ ಮುಖಂಡ ಅನಂತ ಸುಬ್ಬರಾವ್ ಕರೆ ನೀಡಿದ್ದಾರೆ. ಡಿಸೆಂಬರ್ 9ರಂದು ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ಬೆಳಗಾವಿ ಚಲೋ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮುಷ್ಕರದ ನೋಟಿಸ್ ನೀಡಲಾಗುತ್ತದೆ.
ಕೈಗಾರಿಕಾ ವಿವಾದ ಕಾಯ್ದೆ ಸೆಕ್ಷನ್-22ರ ಪ್ರಕಾರ ಮುಷ್ಕರಕ್ಕೆ 21 ದಿನಗಳ ಮುಂಚಿತವಾಗಿ ನೋಟಿಸ್ ನೀಡಬೇಕು. ಈ ಹಿನ್ನೆಲೆಯಲ್ಲಿ ಡಿಸೆಂಬರ್ 9ರಂದು ನೋಟಿಸ್ ಕೊಟ್ಟು ಡಿಸೆಂಬರ್ 31ರಿಂದ ಸಾರಿಗೆ ಮುಷ್ಕರ ಮಾಡಲು ಯೋಜನೆ ಹಾಕಿಕೊಳ್ಳಲಾಗಿದೆ. ಆರು ಸಾರಿಗೆ ನೌಕರರ ಸಂಘಟನೆಗಳ ಒಕ್ಕೂಟ ಸೇರಿ ಜಂಟಿ ಕ್ರಿಯಾ ಸಮಿತಿ ರಚಿಸಿಕೊಂಡಿದ್ದು, ಈ ಸಮಿತಿಯ ನೇತೃತ್ವದಲ್ಲಿ ಮುಷ್ಕರ ನಡೆಯಲಿದೆ. ಎಲ್ಲವೂ ಅಂದುಕೊಂಡಂತೆ ಆದರೆ ಹೊಸ ವರ್ಷದ ಮೊದಲ ದಿನವೇ ಜನರಿಗೆ ಸಾರಿಗೆ ಮುಷ್ಕರದ ಬಿಸಿ ತಟ್ಟಲಿದೆ.
ಬೇಡಿಕೆಗಳನ್ನು ಈಡೇರಿಸಿದರೆ ಮಾತ್ರ ಮುಷ್ಕರ ನಿರ್ಧಾರ ಹಿಂಪಡೆಯುತ್ತೇವೆ. ಜಂಟಿ ಕ್ರಿಯಾ ಸಮಿತಿಯ ಎಲ್ಲಾ ಸಂಘಟನೆಗಳು ಮುಷ್ಕರಕ್ಕೆ ಒಪ್ಪಿಗೆ ಸೂಚಿಸಿವೆ. ಎಲ್ಲ ನೌಕರರು ಮುಷ್ಕರಕ್ಕೆ ಸಿದ್ಧರಾಗಲು ಸಮಾವೇಶ ಮಾಡುತ್ತೇವೆ. ಎಲ್ಲರಲ್ಲೂ ತಿಳಿವಳಿಕೆ ಮೂಡಿಸುತ್ತೇವೆ. ಬಹಳ ಯಶಸ್ವಿಯಾಗಿ ಮುಷ್ಕರ ಆಗಲಿದೆ. ನಮ್ಮ ತಾಳ್ಮೆ ಪರೀಕ್ಷಿಸಬೇಡಿ ಎಂದು ಸರ್ಕಾರಕ್ಕೆ ಸಾರಿಗೆ ಮುಖಂಡರು ಎಚ್ಚರಿಕೆ ನೀಡಿದ್ದಾರೆ.
ಸರ್ಕಾರ ಕೆಎಸ್ಆರ್ಟಿಸಿ, ಬಿಎಂಟಿಸಿ, ಸೇರಿದಂತೆ ನಾಲ್ಕು ನಿಗಮದ ನೌಕರರಿಗೆ 38 ತಿಂಗಳ ಅರಿಯರ್ಸ್ ಹಣ ಬಿಡುಗಡೆ ಮಾಡಿಲ್ಲ. 2024 ಜನವರಿಯಿಂದ ನೌಕರರಿಗೆ ಸಂಬಳ ಹೆಚ್ಚಳ ಮಾಡಬೇಕಿತ್ತು. ಆದರೆ ನವೆಂಬರ್ ತಿಂಗಳು ಬಂದರೂ ಇನ್ನೂ ಈ ಬಗ್ಗೆ ಸರ್ಕಾರ ತೀರ್ಮಾನ ಕೈಗೊಂಡಿಲ್ಲ. ನಿವೃತ್ತಿ ಹೊಂದಿದ ನೌಕರರಿಗೆ ಗ್ರಾಚ್ಯುಟಿ ಹಣ ಬಿಡುಗಡೆ ಮಾಡಿಲ್ಲ. ಅರಿಯರ್ಸ್ ಹಣವೇ 1,750 ಕೋಟಿ ರೂ. ರುಪಾಯಿ ನೀಡಬೇಕಿದೆ. ಗ್ರಾಚ್ಯುಟಿ ಹಣ ಸುಮಾರು 399.29 ಕೋಟಿರೂ. ನೀಡಬೇಕಿದೆ. ಈ ಎರಡು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಸಾರಿಗೆ ನೌಕರರು ಮುಷ್ಕರಕ್ಕೆ ಮುಂದಾಗಿದ್ದಾರೆ.