ಪುತ್ತೂರು : ಪುತ್ತೂರು ಬಿರುಮಲೆ ಬೆಟ್ಟವನ್ನು ಸುಮಾರು 10 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುವುದು. ಈಗಾಗಲೇ 2 ಕೋಟಿ ರೂ. ಅನುದಾನ ಬಿಡುಗಡೆಗೊಂಡಿದೆ ಎಂದು ಶಾಸಕ ಅಶೋಕ್ ರೈ ಹೇಳಿದರು.
ಅವರು ಮಂಗಳವಾರ ಮಾಣಿ-ಸಂಪಾಜೆ ರಾಷ್ಟ್ರೀಯ ಹೆದ್ದಾರಿ 275 ರ ಆರ್ಯಾಪು ಗ್ರಾಪಂ ವ್ಯಾಪ್ತಿಯ ಸಂಪ್ಯದಲ್ಲಿ ನೂತನವಾಗಿ ನಿರ್ಮಾಣಗೊಂಡ ರಿಕ್ಷಾ ತಂಗುದಾಣವನ್ನು ಉದ್ಘಾಟಿಸಿ ಮಾತನಾಡಿದರು.
ಮಕ್ಕಳಿಗೆ ಶಿಕ್ಷಣ, ಉದ್ಯೋಗ ನೀಡುವ ದೃಷ್ಟಿಕೋನವನ್ನಿಟ್ಟುಕೊಂಡು ಪಕ್ಷಾತೀತವಾಗಿ ಕೆಲಸ ಮಾಡುತ್ತಿದ್ದೇನೆ. ಒಟ್ಟಾರೆಯಾಗಿ ಅಭಿವೃದ್ಧಿ ಕೆಲಸಗಳು ನಡೆಯುತ್ತಿದೆ ಎಂದ ಅವರು, ಈಗಾಗಲೇ ನೂತನವಾಗಿ ನಿರ್ಮಾಣಗೊಂಡ ರಿಕ್ಷಾ ತಂಗುದಾಣ ಒಳ್ಳೆಯ ರೀತಿಯಲ್ಲಿ ಬಳಕೆಯಾಗಲಿ ಎಂದರು.
ವೇದಿಕೆಯಲ್ಲಿ ಕೆಪಿಸಿಸಿ ಸಂಯೋಜಕ ಕಾವು ಹೇಮನಾಥ ಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ, ಉದ್ಯಮಿ ಶಿವರಾಮ ಆಳ್ವ, ಕಟ್ಟಡ ಕಾರ್ಮಿಕ ಸಂಘದ ಅಧ್ಯಕ್ಷ ಜಯರಾಮ ಕುಲಾಲ್ ಮತ್ತಿತರರು ಉಪಸ್ಥಿತರಿದ್ದರು.