ರಾಜ್ಯಪಾಲರಾಗಿ, ವಿದೇಶಾಂಗ ಸಚಿವರಾಗಿ ಸೇವೆ ಸಲ್ಲಿಸಿದ್ದ ಮುತ್ಸದ್ದಿ ರಾಜಕಾರಣಿ
ಬೆಂಗಳೂರು : ಕರ್ನಾಟಕ ರಾಜಕಾರಣ ಕಂಡ ಮುತ್ಸದ್ದಿ ರಾಜಕಾರಣಿ, ಮಾಜಿ ವಿದೇಶಾಂಗ ಸಚಿವ, ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಇಂದು (ಡಿಸೆಂಬರ್ 10) ನಸುಕಿನ ಜಾವ 2.30ರ ಸುಮಾರಿಗೆ ನಿಧನರಾದರು. ಅವರಿಗೆ 92 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಎಸ್.ಎಂ ಕೃಷ್ಣರನ್ನು ಆಸ್ಪತ್ರೆಗೆ ಚಿಕಿತ್ಸೆ ಕೊಡಿಸಲಾಗಿತ್ತು. ಶ್ವಾಸಕೋಶದ ಸೋಂಕಿನ ಕಾರಣಕ್ಕೆ ಅವರು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು.
ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿ ಎಂಬ ಗ್ರಾಮದಲ್ಲಿ 1932ರ ಮೇ 1ರಂದು ಒಕ್ಕಲಿಗ ಕುಟುಂಬದಲ್ಲಿ ಜನಿಸಿದ ಎಸ್.ಎಂ ಕೃಷ್ಣ ಪೂರ್ತಿ ಹೆಸರು ಸೋಮನಹಳ್ಳಿ ಮಲ್ಲಯ್ಯ ಕೃಷ್ಣ. ಹುಟ್ಟೂರಿನಲ್ಲಿ ಪ್ರಾಥಮಿಕ ಶಿಕ್ಷಣ ಮುಗಿಸಿದ ಅವರು, ಮೈಸೂರಿನ ಶ್ರೀ ರಾಮಕೃಷ್ಣ ವಿದ್ಯಾಶಾಲೆಯಲ್ಲಿ ಪ್ರೌಢ ಶಿಕ್ಷಣ, ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಬ್ಯಾಚುಲರ್ ಆಫ್ ಆರ್ಟ್ಸ್, ಯೂನಿವರ್ಸಿಟಿ ಕಾನೂನು ಕಾಲೇಜಿನಲ್ಲಿ ಕಾನೂನು ಪದವಿ ಪಡೆದಿದ್ದರು. ಅಮೆರಿಕದ ಟೆಕ್ಸಾಸ್ನ ಡಲ್ಲಾಸ್ನಲ್ಲಿರುವ ಸದರ್ನ್ ಮೆಥೋಡಿಸ್ಟ್ ವಿಶ್ವವಿದ್ಯಾಲಯ ಮತ್ತು ವಾಷಿಂಗ್ಟನ್ ಡಿಸಿಯ ಜಾರ್ಜ್ ವಾಷಿಂಗ್ಟನ್ ವಿಶ್ವವಿದ್ಯಾಲಯದ ಲಾ ಸ್ಕೂಲ್ನಿಂದಲೂ ಪದವಿ ಪಡೆದಿದ್ದರು.
1962ರಲ್ಲಿ ಮದ್ದೂರು ವಿಧಾನಸಭಾ ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಮೂಲಕ ಗೆಲುವು ಸಾಧಿಸಿದ ಕೃಷ್ಣ ಆ ಮೂಲಕ ಚುನಾವಣಾ ರಾಜಕೀಯ ಜೀವನಕ್ಕೆ ಧುಮುಕಿದ್ದರು. ಆ ಬಳಿಕ ಅವರು ‘ಪ್ರಜಾ ಸೋಷಿಯಲಿಸ್ಟ್ ಪಕ್ಷ’ಕ್ಕೆ ಸೇರಿದ್ದರು. 1967ರ ಚುನಾವಣೆಯಲ್ಲಿ ಮದ್ದೂರಿನಿಂದ ಕಾಂಗ್ರೆಸ್ನ ಎಂ.ಎಂ ಗೌಡ ವಿರುದ್ಧ ಸೋಲನುಭವಿಸಿದ್ದರು. 1968ರಲ್ಲಿ ಹಾಲಿ ಸಂಸದರು ನಿಧನರಾದಾಗ ಅವರು ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಸೋಲಿಸುವ ಮೂಲಕ ರಾಷ್ಟ್ರ ರಾಜಕೀಯಕ್ಕೆ ಅಡಿಯಿಟ್ಟರು.
1968ರ ಉಪಚುನಾವಣೆಯ ನಂತರ ಮಂಡ್ಯ ಕ್ಷೇತ್ರದಿಂದ ಮೂರು ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು. 1971 ಮತ್ತು 1980ರಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಚುನಾವಣೆಗಳನ್ನು ಗೆದ್ದಿದ್ದರು. ಆಗ ಮಂಡ್ಯವನ್ನು ಕಾಂಗ್ರೆಸ್ ಭದ್ರಕೋಟೆಯಾಗಿ ಉಳಿಸುವಲ್ಲಿ ಎಸ್.ಎಂ ಕೃಷ್ಣ ಪಾತ್ರ ಪ್ರಮುಖವಾದದ್ದಾಗಿತ್ತು.
1999ರಲ್ಲಿ ಕೆಪಿಸಿಸಿ ಅಧ್ಯಕ್ಷರಾಗಿದ್ದ ಅವರು ಅದೇ ವರ್ಷ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಗೆಲುವಿನತ್ತ ಮುನ್ನಡೆಸಿದರು. ಆ ಸಂದರ್ಭದಲ್ಲಿ ಎಸ್.ಎಂ ಕೃಷ್ಣ ನಡೆಸಿದ್ದ ಪಾಂಚಜನ್ಯ ಯಾತ್ರೆ ಕರ್ನಾಟಕ ರಾಜಕಾರಣದಲ್ಲಿ ಕಾಂಗ್ರೆಸ್ಗೆ ಶಕ್ತಿ ತುಂಬಿತ್ತು.
2004ರ ಡಿಸೆಂಬರ್ನಲ್ಲಿ ಮಹಾರಾಷ್ಟ್ರದ ರಾಜ್ಯಪಾಲರಾಗಿ ನೇಮಕಗೊಂಡ ಕೃಷ್ಣ 2008ರ ಮಾರ್ಚ್ 5ರಂದು ರಾಜ್ಯಪಾಲ ಹುದ್ದೆಗೆ ರಾಜೀನಾಮೆ ನೀಡಿದರು. ನಂತರ ರಾಜ್ಯಸಭೆಗೆ ಆಯ್ಕೆಯಾದ ಅವರು 2009ರ ಮೇ 22ರಂದು ಅಂದಿನ ಪ್ರಧಾನ ಮಂತ್ರಿ ಮನಮೋಹನ್ ಸಿಂಗ್ ಅವರ ಸಂಪುಟದಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವರಾದರು.
ಇಳಿವಯಸ್ಸಿನಲ್ಲಿ ಬಿಜೆಪಿ ಸೇರ್ಪಡೆ
ರಾಜಕೀಯ ಜೀವನದುದ್ದಕ್ಕೂ ಕಾಂಗ್ರೆಸ್ನಲ್ಲೇ ಪ್ರಬಲ ನಾಯಕರಾಗಿದ್ದ ಎಸ್,ಎಂ ಕೃಷ್ಣ ರಾಜಕೀಯ ಜೀವನದ ಕೊನೆಗಾಲದಲ್ಲಿ 2017ರ ಜನವರಿ 29ರಂದು ಕಾಂಗ್ರೆಸ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ 2017ರ ಮಾರ್ಚ್ನಲ್ಲಿ ಬಿಜೆಪಿಗೆ ಸೇರ್ಪಡೆಯಾದರು.
ವಯೋಸಹಜ ಅನಾರೋಗ್ಯ ಮತ್ತು ಇತರ ಕಾರಣಗಳಿಂದಾಗಿ 2023ರ ಜನವರಿ 7ರಂದು ರಾಜಕೀಯದಿಂದ ನಿವೃತ್ತಿ ಘೋಷಣೆ ಮಾಡಿದರು. ಪ್ರೇಮಾ ಅವರನ್ನು ವಿವಾಹವಾಗಿದ್ದ ಎಸ್.ಎಂ ಕೃಷ್ಣಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ.
ಕನ್ನಡದ ಮೇರು ನಟ ಡಾ. ರಾಜ್ಕುಮಾರ್ ಅವರನ್ನು ಕಾಡುಗಳ್ಳ ವೀರಪ್ಪನ್ ಅಪಹರಿಸಿದ್ದು ಎಸ್.ಎಂ ಕೃಷ್ಣ ಮುಖ್ಯಮಂತ್ರಿಯಾಗಿದ್ದಾಗ. ಖ್ಯಾತ ನಾಮರೊಬ್ಬರನ್ನು ಅಷ್ಟು ಸುಲಭದಲ್ಲಿ ಅಪಹರಣ ಮಾಡಿಕೊಂಡು ಹೋದರು ಎಂಬ ವಿಚಾರ ರಾಜ್ಯ ಸರ್ಕಾರಕ್ಕೆ ತೀವ್ರವಾಗಿ ಮುಜುಗರ ತಂದಿತ್ತು. ಅವರು ಮರಳದಿದ್ದರೆ ಮುಂದೇನು ಎನ್ನುವ ಭಯ ಎಸ್ಎಂ ಕೃಷ್ಣ ಅವರನ್ನು ಬಹುವಾಗಿ ಕಾಡಿತ್ತು. 108 ದಿನ ಅವರು ಸರಿಯಾಗಿ ನಿದ್ದೆ ಮಾಡದೆ ಒದ್ದಾಡಿದ್ದರು. ರಾಜ್ಕುಮಾರ್ ಮರಳಿದ ಬಳಿಕ ಕೃಷ್ಣ ನಿಟ್ಟುಸಿರು ಬಿಟ್ಟಿದ್ದರು.