ಸರಕಾರಿ ಕಟ್ಟಡಗಳಲ್ಲಿ ರಾಷ್ಟ್ರಧ್ವಜ ಅರ್ಧಕ್ಕೆ ಹಾರಿಸಿ ಗೌರವ ಸಲ್ಲಿಕೆ
ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವ ಎಸ್.ಎಂ ಕೃಷ್ಣ ನಿಧನಕ್ಕೆ ಸರ್ಕಾರ ಇಂದಿನಿಂದ ಮೂರು ದಿನ ರಾಜ್ಯದಲ್ಲಿ ಶೋಕಾಚರಣೆ ಘೋಷಣೆ ಮಾಡಿದೆ. ಬುಧವಾರ (ಡಿಸೆಂಬರ್ 11) ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ. ಡಿಸೆಂಬರ್ 10ರಿಂದ ಡಿಸೆಂಬರ್ 12ರವರೆಗೆ ಶೋಕಾಚರಣೆ ಘೋಷಣೆ ಮಾಡಲಾಗಿದೆ. ಮೂರು ದಿನಗಳ ಕಾಲ ರಾಜ್ಯ ಸರ್ಕಾರದ ಎಲ್ಲ ಕಟ್ಟಡಗಳ ಮೇಲೆ ರಾಷ್ಟ್ರಧ್ವಜ ಅರ್ಧಕ್ಕೆ ಹಾರಿಸಿ ಅಗಲಿದ ಹಿರಿಯ ಚೇತನಕ್ಕೆ ಶ್ರದ್ಧಾಂಜಲಿ ಸಲ್ಲಿಸಲಾಗುವುದು ಎಂದು ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ. ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಗುವುದು.
ಎಸ್ಎಂ ಕೃಷ್ಣ ಅಂತ್ಯಕ್ರಿಯೆ ಅವರ ತವರು ಮದ್ದೂರಿನ ಸೋಮನಹಳ್ಳಿಯಲ್ಲಿ ಬುಧವಾರ ಸಂಜೆ ನಡೆಯಲಿದೆ. ಎಸ್ಎಂ ಕೃಷ್ಣಗೆ ಇಷ್ಟವಾದ ಜಾಗದಲ್ಲಿಯೇ, ಅಂದರೆ ಕಾಫಿಡೇ ಆವರಣದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.
ಯಡಿಯೂರಪ್ಪ ಸಂತಾಪ
ಮಾಜಿ ಮುಖ್ಯಮಂತ್ರಿ ಬಿ.ಎಸ್,ಯಡಿಯೂರಪ್ಪ ಸೇರಿದಂತೆ ಅನೇಕ ರಾಜಕೀಯ ಮುಖಂಡರು ಎಸ್ ಎಂ ಕೃಷ್ಣ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ. ಧೀಮಂತ ಮುತ್ಸದ್ಧಿ ರಾಜಕಾರಣಿ, ಕರ್ನಾಟಕದ ಮಾಜಿ ಮುಖ್ಯಮಂತ್ರಿ, ಮಾಜಿ ಕೇಂದ್ರ ವಿದೇಶಾಂಗ ಸಚಿವರು, ಪಕ್ಷದ ಹಿರಿಯ ನಾಯಕ, ಪದ್ಮವಿಭೂಷಣ ಎಸ್.ಎಂ.ಕೃಷ್ಣ ಅವರು ನಮ್ಮನ್ನು ಬಿಟ್ಟು ಅಗಲಿದ ಸುದ್ದಿ ತಿಳಿದು ಅತೀವ ಆಘಾವಾಗಿದೆ. ರಾಷ್ಟ್ರ, ರಾಜ್ಯದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದ್ದ ಎಸ್.ಎಂ.ಕೃಷ್ಣ ಅವರ ನಿಧನದಿಂದ ನಾಡು ಒಬ್ಬ ಶ್ರೇಷ್ಠ ನಾಯಕನನ್ನು ಕಳೆದುಕೊಂಡಿದೆ. ಅವರ ಅಗಲಿಕೆಯಿಂದ ವೈಯಕ್ತಿಕವಾಗಿ ಒಬ್ಬ ಹಿರಿಯಣ್ಣನನ್ನು ಕಳೆದುಕೊಂಡ ನೋವು ನನಗಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಕಂಬನಿ ಮಿಡಿದಿದ್ದಾರೆ.
ಬೊಮ್ಮಾಯಿ ಸಂತಾಪ
ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರದ ಮಾಜಿ ಸಚಿವರಾದ ಎಸ್. ಎಂ. ಕೃಷ್ಣ ಅವರು ನಿಧನರಾಗಿರುವ ಸುದ್ದಿ ಕೇಳಿ ಅತ್ಯಂತ ದುಃಖವಾಗಿದೆ. ಮಿತ ಭಾಷಿ, ಸೌಮ್ಯ ಸ್ವಭಾವದ ಎಸ್. ಎಂ. ಕೃಷ್ಣ ಅವರು ಸುಮಾರು ಆರು ದಶಕಗಳ ಕಾಲ ರಾಜ್ಯ ಮತ್ತು ರಾಷ್ಟ್ರ ರಾಜ್ಯಕಾರಣದಲ್ಲಿ ತಮ್ಮದೇ ಆದ ಛಾಪು ಮೂಡಿಸಿ ಇಂದಿನ ರಾಜಕಾರಣಿಗಳಿಗೆ ಮಾದರಿಯಾಗಿದ್ದಾರೆ ಎಂದು ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಸಂತಾಪ ಸೂಚಿಸಿದ್ದಾರೆ.