ನಾಲ್ವರು ವಿದ್ಯಾರ್ಥಿನಿಯರು ಸಮುದ್ರದಲ್ಲಿ ಮುಳುಗಿ ಸಾವನ್ನಪ್ಪಿದ ಪ್ರಕರಣ
ಕಾರವಾರ: ಮುರುಡೇಶ್ವರ ಸಮುದ್ರದಲ್ಲಿ ಮುಳುಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿ ಶಾಲೆಯ 7 ಶಿಕ್ಷಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕೋಲಾರದಿಂದ ಮುರುಡೇಶ್ವರಕ್ಕೆ ಪ್ರವಾಸ ತೆರಳಿದ್ದವರ ಪೈಕಿ ನಾಲ್ಕು ವಿದ್ಯಾರ್ಥಿನಿಯರು ಸಮುದ್ರದಲ್ಲಿ ಆಟವಾಡುವಾಗ ನೀರು ಪಾಲಾಗಿ ಸಾವನ್ನಪ್ಪಿದ್ದು, ಬಳಿಕ ಉತ್ತರ ಕನ್ನಡ ಜಿಲ್ಲಾಡಳಿತ ಎಚ್ಚೆತ್ತುಕೊಂಡು ಬೀಚ್ ಪ್ರವೇಶಕ್ಕೆ ನಿರ್ಬಂಧ ಹೇರಿದೆ. ಶಿಕ್ಷಕರ ವಿರುದ್ಧ ನಾಲ್ವರು ವಿದ್ಯಾರ್ಥಿನಿಯರ ಸಾವಿಗೆ ಕಾರಣ, ನಿರ್ಲಕ್ಷ್ಯದ ಆರೋಪ ಹೊರಿಸಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಮುರುಡೇಶ್ವರದಲ್ಲಿ ಪ್ರವಾಸಿಗರು ಸಮುದ್ರ ದಡಕ್ಕೆ ಹೋಗದಂತೆ ಜಿಲ್ಲಾಡಳಿತ ಹೇರಿದೆ.
ಮರಣೋತ್ತರ ಪರೀಕ್ಷೆಯ ಬಳಿಕ ಮಕ್ಕಳ ಶವಗಳನ್ನು ಸಂಬಂಧಪಟ್ಟವರಿಗೆ ಬಿಟ್ಟುಕೊಡಲಾಗಿದೆ. ಇಂದು ಕೋಲಾರ ಜಿಲ್ಲಾಧಿಕಾರಿಗಳ ಕಚೇರಿ ಆವರಣಕ್ಕೆ ತಲುಪಿ ಜಿಲ್ಲಾಡಳಿತದ ವತಿಯಿಂದ ಅಂತಿಮ ನಮನ ಸಲ್ಲಿಸಿ, ನಂತರ ಅವರವರ ಕುಟುಂಬಗಳಿಗೆ ಮೃತದೇಹಗಳನ್ನು ಹಸ್ತಾಂತರಿಸಲಾಗುತ್ತದೆ.
ಕೋಲಾರದ ಮುಳಬಾಗಿಲು ತಾಲೂಕಿನ ಕೊತ್ತೂರು ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳು ಪ್ರವಾಸಕ್ಕೆ ತೆರಳಿದ್ದು, ಮುರುಡೇಶ್ವರ ಕಡಲ ತೀರದಲ್ಲಿ ಆಟ ಆಡುವಾಗ ಅಲೆಯ ಬಿರುಸಿಗೆ ಸಿಲುಕಿ ಶಾಲೆಯ 7 ವಿದ್ಯಾರ್ಥಿನಿಯರು ನೀರು ಪಾಲಾಗಿದ್ದರು. ಮೂವರನ್ನು ರಕ್ಷಿಸಲು ಸಾಧ್ಯವಾಗಿತ್ತು. 4 ವಿದ್ಯಾರ್ಥಿನಿಯರು ಸಾವನ್ನಪ್ಪಿದ್ದರು.
























