ಸಂಸತ್ ಆವರಣದಲ್ಲಿ ಪ್ರತಿಭಟನೆ ವೇಳೆ ಹೈಡ್ರಾಮಾ
ಹೊಸದಿಲ್ಲಿ: ಅಂಬೇಡ್ಕರ್ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನೀಡಿದ ಹೇಳಿಕೆ ಬಿಜೆಪಿ-ಕಾಂಗ್ರೆಸ್ ನಡುವೆ ಕಿಚ್ಚು ಹೊತ್ತಿಸಿದೆ. ಇಂದು ಉಭಯ ಪಕ್ಷಗಳು ಸಂಸತ್ ಆವರಣದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಭಾರಿ ಹೈಡ್ರಾಮಾ ನಡೆದಿದೆ. ಬಿಜೆಪಿ ಸಂಸದ ಪ್ರತಾಪ್ ಸಾರಂಗಿ ಕುಸಿದು ಬಿದ್ದಿದ್ದು, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರನ್ನು ತಳ್ಳಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಕಾಂಗ್ರೆಸ್ ಪ್ರತಿಭಟನೆ ವಿರೋಧಿಸಿ ಬಿಜೆಪಿ ಸದಸ್ಯರು ಪ್ರತಿಭಟಿಸುತ್ತಿದ್ದ ವೇಳೆ ಪ್ರತಾಪ್ ಸಾರಂಗಿ ಅವರನ್ನು ರಾಹುಲ್ ಗಾಂಧಿ ತಳ್ಳಿದ್ದು, ಸಾರಂಗಿ ಕುಸಿದು ಬಿದ್ದಿದ್ದಾರೆ ಎನ್ನಲಾಗಿದೆ. ಗಾಯಗೊಂಡ ಬಿಜೆಪಿ ಸಂಸದ ಪ್ರತಾಪ್ ಸಾರಂಗಿ ಅವರಿಗೆ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಾ. ಸಿ.ಎನ್ ಮಂಜುನಾಥ್ ಅವರು ಸ್ಥಳದಲ್ಲೇ ಚಿಕಿತ್ಸೆ ನೀಡಿದ್ದಾರೆ. ಬಳಿಕ ಅವರನ್ನ ದಿಲ್ಲಿಯ ಆರ್‌ಎಂಎಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಚಳಿಗಾಲದ ಅಧಿವೇಶನದಲ್ಲಿ ಸಂವಿಧಾನ ಕುರಿತ ಚರ್ಚೆ ವೇಳೆ ರಾಜ್ಯಸಭೆಯಲ್ಲಿ ಅಮಿತ್ ಶಾ ಅವರು ಮಾತನಾಡುತ್ತಾ, ಅಂಬೇಡ್ಕರ್ ಅಂಬೇಡ್ಕರ್ ಅಂಬೇಡ್ಕರ್ ಎನ್ನುವುದೊಂದ ಫ್ಯಾಷನ್ ಆಗಿಬಿಟ್ಟಿದೆ. ಇಷ್ಟು ಬಾರಿ ದೇವರ ಹೆಸರು ಹೇಳಿದ್ದರೆ ಅವರಿಗೆ ಸ್ವರ್ಗದಲ್ಲಿ ಸ್ಥಾನವಾದರೂ ಸಿಗುತ್ತಿತ್ತು ಎಂದು ಹೇಳಿದ್ದರು. ಈ ಕುರಿತ ವೀಡಿಯೋಗಳನ್ನು ವಿಪಕ್ಷ ನಾಯಕರು ತಮ್ಮ ಸೋಷಿಯಲ್ ಮೀಡಿಯಾ ಖಾತೆಗಳಲ್ಲಿ ಹಂಚಿಕೊಂಡಿದ್ದಾರೆ. ಅಲ್ಲದೇ ಕೇಂದ್ರ ಗೃಹ ಸಚಿವರು ರಾಜೀನಾಮೆ ನೀಡಬೇಕು, ಅಂಬೇಡ್ಕರ್ ವಿರುದ್ಧದ ಟೀಕೆಗೆ ಕ್ಷಮೆಯಾಚಿಸಬೇಕು ಎಂದು ಪಟ್ಟು ಹಿಡಿದಿದ್ದಾರೆ. ಕಾಂಗ್ರೆಸ್ ದೇಶಾದ್ಯಂತ ಪ್ರತಿಭಟನೆಗೆ ಕರೆ ನೀಡಿದೆ.
ಮತ್ತೊಂದೆಡೆ ಕಾಂಗ್ರೆಸ್‌ನಿಂದ ಅಂಬೇಡ್ಕರ್‌ಗೆ ಅನ್ಯಾಯವಾಗಿದೆ ಎನ್ನುವ ಪ್ಲೆ ಕಾರ್ಡ್ ಹಿಡಿದು ಬಿಜೆಪಿ ಸದಸ್ಯರು ಪ್ರತಿಭಟನೆಗಿಳಿದಿದ್ದಾರೆ. ಇತ್ತ ಬಿಜೆಪಿ ಸಂಸದರೂ ಸಂಸತ್ ಆವರಣದಲ್ಲಿ ಕಾಂಗ್ರೆಸ್‌ನಿಂದ ಅಂಬೇಡ್ಕರ್‌ಗೆ ಅನ್ಯಾಯವಾಗಿದೆ ಪ್ಲೆ ಕಾರ್ಡ್ ಹಿಡಿದು ಪ್ರತಿಭಟನೆಗಿಳಿದಿದ್ದಾರೆ. ಪ್ರತಿಭಟನೆಯಲ್ಲಿ ಕರ್ನಾಟಕದ ಬಿಜೆಪಿ ಸಂಸದರಾದ ಬಸವರಾಜ ಬೊಮ್ಮಾಯಿ, ಗೋವಿಂದ ಕಾರಜೋಳ, ಜಗ್ಗೇಶ್ ಭಾಗಿಯಾಗಿದ್ದಾರೆ.
ಇನ್ನೂ ಅಮಿತ್ ಶಾ ಅವರ ಹೇಳಿಕೆಗೆ ಬೆಂಬಲ ವ್ಯಕ್ತಪಡಿಸಿ ಮಾತನಾಡಿದ್ದ ಪ್ರಧಾನಿ ಮೋದಿ, ಕಾಂಗ್ರೆಸ್ ಅಂಬೇಡ್ಕರ್‌ಗೆ ಏನು ಕೊಟ್ಟಿದೆ? ಚುನಾವಣೆಯಲ್ಲಿ ಸೋಲಿಸಿದ್ದು ಕಾಂಗ್ರೆಸ್ ಎಂದು ಹೇಳಿದ್ದರು. ಅಮಿತ್ ಶಾ ಅವರು ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್‌ರನ್ನು ಕನಸಿನಲ್ಲಿಯೂ ಅವಮಾನಿಸಲು ಸಾಧ್ಯವಿಲ್ಲದ ಪಕ್ಷದಿಂದ ಬಂದವರು. ಕಾಂಗ್ರೆಸ್ ಅವರ ಹೇಳಿಕೆಯನ್ನು ತಿರುಚಿದೆ ಎಂದು ಹೇಳಿದ್ದಾರೆ.