ಬೆಂಗಳೂರು : ಕಾರ್ಮಿಕರ ಭವಿಷ್ಯ ನಿಧಿ ವಂಚಿಸಿರುವ ಕಂಪನಿಗೆ ತಾನು ಕೆಲ ವರ್ಷಗಳ ಹಿಂದೆಯೇ ರಾಜೀನಾಮೆ ನೀಡಿದ್ದು, ಕಂಪನಿಗೂ ತನಗೂ ಯಾವುದೇ ಸಂಬಂಧ ಇಲ್ಲ ಎಂದು ಕ್ರಿಕೆಟಿಗ ರಾಬಿನ್ ಉತ್ತಪ್ಪ ತನ್ನ ವಿರುದ್ಧ ಜಾರಿಯಾಗಿರುವ ಅರೆಸ್ಟ್ ವಾರಂಟ್ಗೆ ಸ್ಪಷ್ಟನೆ ನೀಡಿದ್ದಾರೆ.
ಕಂಪನಿಯ ಉದ್ಯೋಗಿಗಳಿಗೆ ಮತ್ತು ಸರ್ಕಾರಕ್ಕೆ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಬಿನ್ ಉತ್ತಪ್ಪ ವಿರುದ್ಧ ಬಂಧನ ವಾರೆಂಟ್ ಜಾರಿ ಮಾಡಲಾಗಿತ್ತು.
2018-19 ರರ ಸ್ಟ್ರಾಬೆರಿ ಲೆನ್ಸೆರಿಯಾ ಪ್ರೈವೇಟ್ ಲಿಮಿಟೆಡ್, ಸೆಂಟಾರಸ್ ಲೈಫ್ ಸ್ಟೈಲ್ ಬ್ರ್ಯಾಂಡ್ಸ್ ಪ್ರೈವೇಟ್ ಲಿಮಿಟೆಡ್, ಬೆರ್ರಿಸ್ ಫ್ಯಾಶನ್ ಹೌಸ್ ಕಂಪನಿಗಳಿಗೆ ಸಾಲದ ರೂಪದಲ್ಲಿ ಹಣ ಹೂಡಿಕೆ ಮಾಡಿದ್ದೆ. ಇದೇ ಕಾರಣಕ್ಕೆ ಆ ಕಂಪನಿಗಳು ನನ್ನನ್ನು ನಿರ್ದೇಶಕನಾಗಿ ನೇಮಕಗೊಳಿಸಿದ್ದವು. ನಾನು ಆ ಕಂಪನಿಗಳಲ್ಲಿ ಯಾವುದೇ ಸಕ್ರಿಯ ಕಾರ್ಯನಿರ್ವಾಹಕ ಪಾತ್ರವನ್ನು ಹೊಂದಿರಲಿಲ್ಲ ಎಂದು ರಾಬಿನ್ ಉತ್ತಪ್ಪ ತಿಳಿಸಿದ್ದಾರೆ.
ವೃತ್ತಿಪರ ಕ್ರಿಕೆಟಿಗನಾಗಿ, ನಿರೂಪಕನಾಗಿ, ವೀಕ್ಷಕ ವಿವರಣೆಗಾರನಾಗಿದ್ದ ನನಗೆ ಆ ಕಂಪನಿಗಳ ಕಾರ್ಯಾಚರಣೆಗಳಲ್ಲಿ ಭಾಗವಹಿಸಲು ಸಮಯವಿರಲಿಲ್ಲ. ಅಲ್ಲದೆ ಆ ಕಂಪನಿಗಳ ದೈನಂದಿನ ವ್ಯವಹಾರಗಳಲ್ಲಿ ನಾನು ಭಾಗಿಯಾಗಿರಲಿಲ್ಲ. ನಾನು ಹಲವು ವರ್ಷಗಳ ಹಿಂದೆಯೇ ನನ್ನ ನಿರ್ದೇಶಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ಆ ಕಂಪನಿಗಳ ವಿರುದ್ಧ ಪ್ರಸ್ತುತ ಕಾನೂನು ಪ್ರಕ್ರಿಯೆಗಳು ನಡೆಯುತ್ತಿವೆ. ಆರೋಪ ಎದುರಿಸುತ್ತಿರುವ ಕಂಪನಿಗಳಲ್ಲಿ ಉದ್ಯೋಗಿಗಳಿಗೆ ಬಾಕಿಯಿರುವ ಪಿಎಫ್ ಹಣ ಪಾವತಿಸುವಂತೆ ಒತ್ತಾಯಿಸಿ ಅಧಿಕಾರಿಗಳು ನೀಡಿರುವ ನೋಟಿಸ್ಗಳಿಗೆ ನನ್ನ ಕಾನೂನು ಸಲಹಾ ತಂಡ ಪ್ರತಿಕ್ರಿಯಿಸಿದೆ ಎಂದು ಉತ್ತಪ್ಪ ತಿಳಿಸಿದ್ದಾರೆ.