ಇಂದು ಅಂತಿಮ ದರ್ಶನಕ್ಕೆ ಅವಕಾಶ
ಹೊಸದಿಲ್ಲಿ: ನಿನ್ನೆ ರಾತ್ರಿ ನಿಧನರಾಗಿರುವ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆ ಶನಿವಾರ ನಡೆಯಲಿದೆ ಎಂದು ಕಾಂಗ್ರೆಸ್ ತಿಳಿಸಿದೆ. ಈ ವಿಚಾರವಾಗಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ಶನಿವಾರ ದಿಲ್ಲಿ ರಾಜ್ಘಾಟ್ ಬಳಿ ಸಕಲ ಸರ್ಕಾರಿ ಗೌರವಗಳೊಂದಿಗೆ ಮನಮೋಹನ್ ಸಿಂಗ್ ಅಂತ್ಯಕ್ರಿಯೆ ನಡೆಯಲಿದೆ ಎಂದಿದ್ದಾರೆ.
ಮನಮೋಹನ್ ಸಿಂಗ್ ಅವರ ಪಾರ್ಥಿವ ಶರೀರವನ್ನು ಗುರುವಾರ ರಾತ್ರಿಯೇ ಅವರ ನಿವಾಸಕ್ಕೆ ತರಲಾಗಿದೆ. ಇಂದು ಸಾರ್ವಜನಿಕರ ದರ್ಶನಕ್ಕೆ ಇಡಲಾಗುವುದು ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.
ಮನಮೋಹನ್ ಸಿಂಗ್ ನಿಧನದ ಶೋಕಾರ್ಥ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಧ್ವಜವನ್ನು ಅರ್ಧಕ್ಕೆ ಇಳಿಸಲಾಗಿದೆ. ಕೇಂದ್ರ ಸರಕಾರ ಇಂದಿನ ಎಲ್ಲ ಕಾರ್ಯಕ್ರಮಗಳನ್ನು ರದ್ದುಗೊಳಿಸಿದೆ ಮತ್ತು 7 ದಿನಗಳ ರಾಷ್ಟ್ರೀಯ ಶೋಕಾಚರಣೆಯನ್ನು ಘೋಷಿಸಲಿದೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಗುರುವಾರ ರಾತ್ರಿ ಡಾ. ಸಿಂಗ್ ನಿವಾಸಕ್ಕೆ ಭೇಟಿ ನೀಡಿ ಶ್ರದ್ಧಾಂಜಲಿ ಸಲ್ಲಿಸಿದರು. ಬೆಳಗಾವಿಯಲ್ಲಿ ‘ಗಾಂಧಿ ಭಾರತ’ ಕಾಂಗ್ರೆಸ್ ಅಧಿವೇಶನದಲ್ಲಿದ್ದ ಇಬ್ಬರೂ ನಾಯಕರು ಮನಮೋಹನ್ ನಿಧನದ ಸುದ್ದಿ ತಿಳಿದ ತಕ್ಷಣ ದಿಲ್ಲಿಗೆ ತೆರಳಿದ್ದರು.
ಮನಮೋಹನ್ ಅವರ ಮಗಳು ವಿದೇಶದಿಂದ ಬರಬೇಕಿದ್ದು, ಇಂದು ಸಂಜೆಯೊಳಗೆ ದಿಲ್ಲಿ ತಲುಪಬಹುದು. ಆ ನಂತರವೇ ಎಲ್ಲದರ ಬಗ್ಗೆಯೂ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಕಾಂಗ್ರೆಸ್ ನಾಯಕ ಸಂದೀಪ್ ದೀಕ್ಷಿತ್ ತಿಳಿಸಿದ್ದಾರೆ.
2004ರಿಂದ 2014ರವರೆಗೆ ಭಾರತದ ಪ್ರಧಾನಿಯಾಗಿದ್ದ ಡಾ. ಮನಮೋಹನ್ ಸಿಂಗ್ ದೀರ್ಘಕಾಲದ ಅನಾರೋಗ್ಯದಿಂದಾಗಿ ಗುರುವಾರ ರಾತ್ರಿ ದಿಲ್ಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ ಉಸಿರಾಟದ ತೊಂದರೆ ಇತ್ತು.
ಅಮೆರಿಕ ನುಡಿ ನಮನ
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಅಮೆರಿಕ ಸರ್ಕಾರ ಗೌರವ ಸಲ್ಲಿಸಿದೆ. ಮನಮೋಹನ್ ಸಿಂಗ್ ಅವರು ಆರ್ಥಿಕ ಸುಧಾರಣೆಗಳಿಗಾಗಿ ನೆನಪಿನಲ್ಲಿರುತ್ತಾರೆ ಎಂದು ಅಮೆರಿಕ ಹೇಳಿದೆ. ಅವರು ಭಾರತದ ಆರ್ಥಿಕ ಅಭಿವೃದ್ಧಿಯನ್ನು ಉತ್ತೇಜಿಸಿದರು. ಅಮೆರಿಕ-ಭಾರತದ ಕಾರ್ಯತಂತ್ರದ ಪಾಲುದಾರಿಕೆಯ ಬೆಂಬಲಿಗರಾಗಿದ್ದರು ಎಂದು ನುಡಿನಮನದಲ್ಲಿ ಅಮೆರಿಕ ಸರ್ಕಾರ ಉಲ್ಲೇಖಿಸಿದೆ.
ಇಂದು ಬೆಳಗ್ಗೆ 11 ಗಂಟೆಗೆ ಕೇಂದ್ರ ಸಚಿವ ಸಂಪುಟ ಸಭೆ ನಡೆಯಲಿದ್ದು, ಮನಮೋಹನ್ ಸಿಂಗ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಗುವುದು. ರಾಷ್ಟ್ರೀಯ ಶೋಕಾಚರಣೆಯ ನಿರ್ಧಾರ ತೆಗೆದುಕೊಳ್ಳಲಾಗುವುದು.