ಎಚ್‌ಎಂಪಿವಿ ಆತಂಕ : ಮಾರ್ಗಸೂಚಿ ಬಿಡುಗಡೆಗೊಳಿಸಿದ ಸರಕಾರ

ಜ್ವರ, ಶೀತ ಇದ್ದರೆ ಮುನ್ನೆಚ್ಚರಿಕೆ ವಹಿಸಲು ಸೂಚನೆ

ಬೆಂಗಳೂರು: ಚೀನದಲ್ಲಿ ಹ್ಯೂಮನ್ ಮೆಟಾ ನ್ಯೂಮೊ ವೈರಸ್ (ಎಚ್‌ಎಂಪಿವಿ) ಹಾವಳಿ ತೀವ್ರಗೊಂಡು ಆತಂಕ ಸೃಷ್ಟಿಸಿಯಾಗಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ರಾಜ್ಯ ಸರಕಾರ ಮಾರ್ಗಸೂಚಿ ಬಿಡುಗಡೆ ಮಾಡಿದೆ.

ಚೀನದಲ್ಲಿ ಕಾಣಿಸಿಕೊಂಡಿರುವ ಎಚ್‌ಎಂಪಿವಿ ವೈರಸ್ ಬಗ್ಗೆ ಎಚ್ಚರಿಕೆಯಿಂದಿರುವಂತೆ ಕೇಂದ್ರ ಸರ್ಕಾರ ರಾಜ್ಯಗಳಿಗೆ ಸೂಚನೆ ನೀಡಿರುವ ಬೆನ್ನಲ್ಲೆ ರಾಜ್ಯ ಆರೋಗ್ಯ ಇಲಾಖೆ ವೈರಸ್‌ ನಿಯಂತ್ರಿಸಲು ಕೆಲವು ಮಾರ್ಗಸೂಚಿಗಳನ್ನು ಪಾಲಿಸುವಂತೆ ಜನತೆ ಬಳಿ ಮನವಿ ಮಾಡಿಕೊಂಡಿದೆ. ಕರ್ನಾಟಕದಲ್ಲಿ ಇಲ್ಲಿಯವರೆಗೆ ಯಾವುದೇ ಪ್ರಕರಣಗಳು ವರದಿಯಾಗಿಲ್ಲದ ಕಾರಣ ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದೆ.































 
 

*ಜ್ವರ ಇದ್ದರೆ ಜನನಿಬಿಡ ಪ್ರದೇಶಕ್ಕೆ ಹೋಗದಂತೆ ಹಾಗೂ ಅನಗತ್ಯ ಓಡಾಟ ತಪ್ಪಿಸಿ
*ಆಗಾಗ ಕೈಗಳನ್ನು ಸಾಬೂನು ಹಾಗೂ ಸ್ಯಾನಿಟೈಸರ್‌ಗಳಿಂದ ಸ್ವಚ್ಛಗೊಳಿಸಿ
*ಜ್ವರ, ಕೆಮ್ಮು, ನೆಗಡಿ ಇರುವವರು ಆದಷ್ಟು ಹೊರಗೆ ಓಡಾಡದೆ ಮನೆಯಲ್ಲೇ ಇದ್ದು, ಚಿಕಿತ್ಸೆ ಪಡೆಯಿರಿ.
*ಜ್ವರವಿದ್ದವರು ಬಳಸಿದ ಟವಲ್ ಮತ್ತು ಬಟ್ಟೆಗಳನ್ನು ಬೇರೆಯವರು ಬಳಸದಿರಿ.
*ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದನ್ನು ತಪ್ಪಿಸಿ ಸ್ವಯಂ ಔಷಧಗಳನ್ನು ಸೇವಿಸದೆ ನೆಗಡಿ, ಕೆಮ್ಮು ಕಾಣಿಸಿಕೊಂಡರೆ ವೈದ್ಯರನ್ನು ಭೇಟಿ ಮಾಡಿ, ಚಿಕಿತ್ಸೆ ಪಡೆಯಿರಿ.
*ಮನೆ ಮತ್ತು ಸುತ್ತಲಿನ ಪ್ರದೇಶಗಳಲ್ಲಿ, ಕಚೇರಿಗಳಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಿ.
*ಪೌಷ್ಟಿಕಾಂಶವಿರುವ ಆಹಾರ ಸೇವಿಸಿ,
*ಮಕ್ಕಳು ಹಾಗೂ ಹಿರಿಯರ ಬಗ್ಗೆ ಹೆಚ್ಚಿನ ಜಾಗೃತೆ ವಹಿಸಿ.

ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷದ ಡಿಸೆಂಬರ್‌ನಲ್ಲಿ ಸಾಮಾನ್ಯ ಶೀತ, ಐಎಲ್‌ಯ ಮತ್ತು ಸಾರಿ ಪ್ರಕರಣಗಳಲ್ಲಿ ಯಾವುದೇ ಗಮನಾರ್ಹ ಏರಿಕೆ ಇಲ್ಲ ಎಂದು ಆರೋಗ್ಯ ಅಧಿಕಾರಿಗಳು ಹೇಳಿದ್ದಾರೆ. ಎಚ್‌ಎಂಪಿವಿ ಒಂದು ಉಸಿರಾಟದ ಕಾಯಿಲೆಯಾಗಿದ್ದು, ಚಳಿಗಾಲದಲ್ಲಿ ಶೀತ ಮತ್ತು ಜ್ವರದ ತರಹದ ಲಕ್ಷಣಗಳನ್ನು ಉಂಟು ಮಾಡುತ್ತದೆ. ನಿರ್ದಿಷ್ಟವಾಗಿ ಮಕ್ಕಳು ಮತ್ತು ವಯಸ್ಸಾದ ವ್ಯಕ್ತಿಗಳ ಮೇಲೆ ಪರಿಣಾಮ ಬೀರುತ್ತದೆ. ಯಾವುದೇ ಪರಿಸ್ಥಿತಿ ಎದುರಾದರೂ ಅದನ್ನು ನಿಭಾಯಿಸಲು ರಾಜ್ಯ ಸನ್ನದ್ಧವಾಗಿದೆ ಎಂದು ರಾಜ್ಯದ ಸಮಗ್ರ ರೋಗ ಕಣ್ಗಾವಲು ಕಾರ್ಯಕ್ರಮದ ಯೋಜನಾ ನಿರ್ದೇಶಕ ಡಾ. ಅನ್ಸಾರ್ ಅಹ್ಮದ್ ಹೇಳಿದ್ದಾರೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top