ವೈಕುಂಠ ಏಕಾದಶಿ ಟೋಕನ್ ಪಡೆಯಲು ನೂಕುನುಗ್ಗಲು ಉಂಟಾಗಿ ದುರಂತ
ತಿರುಮಲ : ತಿರುಪತಿ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಬುಧವಾರ ತಡರಾತ್ರಿ ಸಂಭವಿಸಿದ ಭೀಕರ ಕಾಲ್ತುಳಿತದಲ್ಲಿ ಮೃತಪಟ್ಟವರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ. 25ಕ್ಕೂ ಹೆಚ್ಚುಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಏರ್‌ಲಿಫ್ಟ್ ಮಾಡಲು ಆಂಧ್ರ ಪ್ರದೇಶ ಸರಕಾರ ಆದೇಶಿಸಿದೆ.
ವೈಕುಂಠ ಏಕಾದಶಿ ಪ್ರಯುಕ್ತ ತಿರುಪತಿಯ ವಿಷ್ಣು ನಿವಾಸಂನಲ್ಲಿ ಶುಕ್ರವಾರದಿಂದ 10 ದಿನಗಳ ಕಾಲ ವೈಕುಂಠ ದ್ವಾರ ಸರ್ವದರ್ಶನಕ್ಕಾಗಿ ಟೋಕನ್ ವಿತರಣೆಯ ಸಂದರ್ಭದಲ್ಲಿ ಕಾಲ್ತುಳಿತ ಸಂಭವಿಸಿದೆ. ಭಾರಿ ಸಂಖ್ಯೆಯಲ್ಲಿ ಭಕ್ತರು ಟೋಕನ್ ಪಡೆಯಲು ಯತ್ನಿಸಿದ ಪರಿಣಾಮ ನೂಕುನುಗ್ಗಲು ಉಂಟಾಯಿತು. ಘಟನೆಯಲ್ಲಿ 25 ಮಂದಿ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗುರುವಾರದಿಂದ ತಿರುಪತಿಯ 9 ಕೇಂದ್ರಗಳಲ್ಲಿ 94 ಕೌಂಟರ್‌ಗಳ ಮೂಲಕ ವೈಕುಂಠ ದರ್ಶನ ಟೋಕನ್‌ಗಳನ್ನು ವಿತರಿಸಲು ಟಿಟಿಡಿ ವ್ಯವಸ್ಥೆ ಮಾಡಿದೆ. ಆದರೆ, ಬುಧವಾರ ಸಂಜೆ ಟೋಕನ್‌ಗಾಗಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು. ಇದೇ ವೇಳೆ ಭಕ್ತರೊಬ್ಬರು ಅಸ್ವಸ್ಥರಾದರು. ಅವರನ್ನು ಆಸ್ಪತ್ರೆಗೆ ಕರೆದೊಯ್ಯಲು ಮುಖ್ಯ ಗೇಟ್ ತೆರೆಯಲಾಗಿತ್ತು. ಆಗ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆ ಗೇಟ್ ಮೂಲಕ ಧಾವಿಸಿದರು. ಇದರಿಂದ ಘಟನೆ ನಡೆದಿದೆ ಎಂದು ವರದಿಯಾಗಿದೆ. ಕಾಲ್ತುಳಿತದಲ್ಲಿ ಸಾವಿನ ಸಂಖ್ಯೆ ಹೆಚ್ಚಾಗಬಹುದು ಎನ್ನಲಾಗಿದೆ.
ಜನವರಿ 10, 11 ಮತ್ತು 12 ರಂದು ಮೊದಲ ಮೂರು ದಿನಗಳ ವೈಕುಂಠ ದ್ವಾರ ದರ್ಶನಕ್ಕಾಗಿ ಗುರುವಾರ ಬೆಳಿಗ್ಗೆ 1.20 ಲಕ್ಷ ಟೋಕನ್‌ಗಳನ್ನು ನೀಡಲು ಟಿಟಿಡಿ ನಿರ್ಧರಿಸಿದೆ. ಉಳಿದ ದಿನಗಳಲ್ಲಿ ತಿರುಪತಿಯ ವಿಷ್ಣುನಿವಾಸಂ, ಶ್ರೀನಿವಾಸಂ ಮತ್ತು ಭೂದೇವಿ ಕಾಂಪ್ಲೆಕ್ಸ್‌ಗಳಲ್ಲಿ ಆಯಾ ದಿನಾಂಕದಂದು ಟಿಕೆಟ್ ನೀಡಲು ಟಿಟಿಡಿ ವ್ಯವಸ್ಥೆ ಮಾಡಿದೆ.
ಪ್ರಧಾನಿ ಮೋದಿ, ಸಿಎಂ ಚಂದ್ರಬಾಬು ನಾಯ್ಡು ಸಂತಾಪ
ತಿರುಪತಿಯ ವಿಷ್ಣು ನಿವಾಸದ ಬಳಿ ಸಂಭವಿಸಿದ ಕಾಲ್ತುಳಿತದಲ್ಲಿ 7 ಭಕ್ತರು ಸಾವನ್ನಪ್ಪಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಮತ್ತು ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ. ಟೋಕನ್ ಪಡೆಯಲು ಬಂದಿದ್ದ ಭಕ್ತರು ಪ್ರಾಣ ಕಳೆದುಕೊಂಡಿರುವುದು ತೀವ್ರ ಬೇಸರ ತಂದಿದೆ. ಅಗಲಿದವರ ಕುಟುಂಬಗಳ ನೋವಿನಲ್ಲಿ ತಾನು ಸಹಭಾಗಿಯಾಗಿರುವುದಾಗಿ ಮೋದಿ ಹೇಳಿದ್ದಾರೆ.
ಘಟನೆಯಲ್ಲಿ ಗಾಯಗೊಂಡವರಿಗೆ ನೀಡುತ್ತಿರುವ ಚಿಕಿತ್ಸೆ ಕುರಿತು ನಾಯ್ಡು ದೂರವಾಣಿ ಮೂಲಕ ಅಧಿಕಾರಿಗಳೊಂದಿಗೆ ಮಾತನಾಡಿದ್ದಾರೆ. ಜಿಲ್ಲಾ ಮತ್ತು ಟಿಟಿಡಿ ಅಧಿಕಾರಿಗಳೊಂದಿಗೆ ಸಿಎಂ ಕಾಲಕಾಲಕ್ಕೆ ಪರಿಶೀಲನೆ ನಡೆಸುತ್ತಿದ್ದಾರೆ. ಹಿರಿಯ ಅಧಿಕಾರಿಗಳು ಘಟನಾ ಸ್ಥಳಕ್ಕೆ ತೆರಳಿ ಪರಿಹಾರ ಕ್ರಮಗಳನ್ನು ಕೈಗೊಂಡು ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ದೊರೆಯುವಂತೆ ನೋಡಿಕೊಳ್ಳಬೇಕು ಎಂದು ಸಿಎಂ ಚಂದ್ರಬಾಬು ಆದೇಶಿಸಿದ್ದಾರೆ. ಮುನ್ನೆಚ್ಚರಿಕೆ ವಹಿಸಿಕೊಳ್ಳಲು ಸೂಚಿಸಿದ್ದರು ನಿರ್ಲಕ್ಷ್ಯ ಮಾಡಿರುವ ಪೊಲೀಸರು ಮತ್ತು ಟಿಟಿಡಿ ಅಧಿಕಾರಿಗಳ ಮೇಲೆ ಕೆಂಡಾಮಂಡಲವಾಗಿರುವ ಅವರು ಯಾವುದೇ ಲೋಪವಾಗದಂತೆ ವ್ಯವಸ್ಥೆ ಮಾಡಲು ಸೂಚಿಸಿದ್ದಾರೆ. ಇಂದು ಖುದ್ದು ಭೇಟಿ ನೀಡಿ ವ್ಯವಸ್ಥೆಗಳನ್ನು ಪರಿಶೀಲಿಸಲಿದ್ದಾರೆ.
ಪವನ್ ಕಲ್ಯಾಣ್ ಆಘಾತ
ದರ್ಶನಕ್ಕೆ ಬಂದಿದ್ದ ಭಕ್ತರು ಸಾವನ್ನಪ್ಪಿರುವುದು ದುರದೃಷ್ಟಕರ. ಘಟನೆಯಿಂದ ತೀವ್ರ ಬೇಸರವಾಗಿದೆ ಎಂದು ಆಂದ್ರ ಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಹೇಳಿದ್ದಾರೆ. ಘಟನೆ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿರುವ ಅವರು, ಮೃತರ ಮತ್ತು ಗಾಯಗೊಂಡವರ ಕುಟುಂಬಗಳಿಗೆ ಮಾಹಿತಿ ನೀಡಿ ನೆರವು ನೀಡುವಂತೆ ಟಿಟಿಡಿ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.
ಸಿಎಂ ಚಂದ್ರಬಾಬು ನಾಯ್ಡು ತಿರುಪತಿಗೆ ಭೇಟಿ ನೀಡಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಕೂಡ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿದ್ದು, ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.