ಎರಡು ದಿನ ವಿಚಾರಣೆಗೆ ಹಾಜರಾಗಲು ಸೂಚನೆ
ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣಕ್ಕೆ ಸಂಬಂಧಿಸಿದಂತೆ ಸೋಮವಾರ ಮತ್ತು ಮಂಗಳವಾರ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿ ಮತ್ತು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಅವರಿಗೆ ನೋಟಿಸ್ ಜಾರಿ ಮಾಡಿದೆ. ಇ.ಡಿ ನೋಟಿಸ್ ನೀಡುತ್ತಿದ್ದಂತೆ ಪಾರ್ವತಿ ಸಿದ್ದರಾಮಯ್ಯ ಮತ್ತು ಭೈರತಿ ಸುರೇಶ್ ಕರ್ನಾಟಕ ಹೈಕೋರ್ಟ್ನ ಧಾರವಾಡ ಏಕಸದಸ್ಯ ಪೀಠಕ್ಕೆ ಎರಡು ಪ್ರತ್ಯೇಕ ಅರ್ಜಿ ಸಲ್ಲಿಸಿದ್ದಾರೆ.
ಈ ಸಂಬಂಧ ತುರ್ತು ವಿಚಾರಣೆ ನಡೆಸುವಂತೆ ಹಿರಿಯ ವಕೀಲ ವಿಕ್ರಮ್ ಹುಯಿಲಗೋಳ ಪೀಠಕ್ಕೆ ಮನವಿ ಮಾಡಿದರು. ಸೋಮವಾರ ಕಲಾಪದ ಕೊನೆಗೆ ವಿಚಾರಣೆ ನಡೆಸುವುದಾಗಿ ನ್ಯಾ.ಎಂ.ನಾಗಪ್ರಸನ್ನ ಒಪ್ಪಿಗೆ ಸೂಚಿಸಿದರು.
ಹಗರಣಕ್ಕೆ ಸಂಬಂಧಿಸಿದಂತೆ ಇಡಿ ಈಗಾಗಲೆ ಸುಮಾರು 300 ಕೋಟಿ ರೂ. ಮೌಲ್ಯದ 142 ಸ್ಥಿರಾಸ್ತಿ ಮುಟ್ಟುಗೋಲು ಹಾಕಿಕೊಂಡಿದೆ. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ಅಡಿಯಲ್ಲಿ ರಿಯಲ್ ಎಸ್ಟೇಟ್ ಉದ್ಯಮಿಗಳು, ಏಜೆಂಟರು ಸೇರಿದಂತೆ ವಿವಿಧ ವ್ಯಕ್ತಿಗಳ ಹೆಸರಿನಲ್ಲಿದ್ದ ಆಸ್ತಿ, ನಿವೇಶನ, ಜಮೀನು ಸೇರಿದಂತೆ ಇನ್ನಿತರ ಆಸ್ತಿ ಒಳಗೊಂಡಂತೆ ಅಂದಾಜು 300 ಕೋಟಿ ರೂ. ಮೌಲ್ಯದ 142 ಸ್ಥಿರ ಆಸ್ತಿಗಳನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿತ್ತು.