ಹೀಗಿದೆ ರೈಲಿನ ಹೊಸ ವೇಳಾಪಟ್ಟಿ
ಮಂಗಳೂರು: ಮೂರು ದಶಕಗಳ ಬೇಡಿಕೆಯಾಗಿದ್ದ ಮಂಗಳೂರು-ಕಬಕ ಪ್ಯಾಸೆಂಜರ್ ರೈಲು ಸೇವೆಯನ್ನು ಸುಬ್ರಹ್ಮಣ್ಯದ ತನಕ ವಿಸ್ತರಿಸಬೇಕೆಂಬ ಬೇಡಿಕೆ ಕೊನೆಗೂ ಈಡೇರಿದೆ. ರೈಲು ಸೇವೆಯನ್ನು ವಿಸ್ತರಿಸಿ ಕೇಂದ್ರ ರೈಲ್ವೆ ಮಂಡಳಿ ಅನುಮೋದನೆ ನೀಡಿದ್ದು, ಇದಕ್ಕಾಗಿ ಸಂಸದ ಕ್ಯಾ.ಬ್ರಿಜೇಶ್ ಚೌಟ ಬಹಳಷ್ಟು ಪ್ರಯತ್ನಪಟ್ಟಿದ್ದರು. ರೈಲು ವಿಸ್ತರಣೆಯಿಂದ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಬರುವ ಭಕ್ತರಿಗೆ ಮಾತ್ರವಲ್ಲದೆ ನಿತ್ಯ ಮಂಗಳೂರಿಗೆ ಬಂದು ಹೋಗುವವರಿಗೆ ತುಂಬ ಅನುಕೂಲ ಆಗಲಿದೆ. ೀ ಭಾಗದ ಆರ್ಥಿಕ ಅಭಿವೃದ್ಧಿಗೂ ಸಹಕಾರಿಯಾಗಲಿದೆ ಎನ್ನಲಾಗಿದೆ.
ಹೊಸ ವೇಳಾಪಟ್ಟಿ ಪ್ರಕಾರ ಮಂಗಳೂರು ಸೆಂಟ್ರಲ್-ಕಬಕ ಪುತ್ತೂರು-ಸುಬ್ರಹ್ಮಣ್ಯ ರಸ್ತೆ ಪ್ಯಾಸೆಂಜರ್ ರೈಲು(56625) ಮುಂಜಾನೆ 4 ಗಂಟೆಗೆ ಮಂಗಳೂರು ಸೆಂಟ್ರಲ್‌ನಿಂದ ಹೊರಟು ಕಬಕ-ಪುತ್ತೂರಿಗೆ ಮುಂಜಾನೆ 5.18ಕ್ಕೆ ತಲುಪಲಿದೆ. ಅಲ್ಲಿ ಅದು 2 ನಿಮಿಷ ನಿಲುಗಡೆಯಾಗಿ ಬೆಳಗ್ಗೆ 6.30ಕ್ಕೆ ಸುಬ್ರಹ್ಮಣ್ಯ ರಸ್ತೆಗೆ ಬಂದು ತಲುಪಲಿದೆ. ಸುಬ್ರಹ್ಮಣ್ಯ-ಮಂಗಳೂರು (56626) ಪ್ಯಾಸೆಂಜರ್ ರೈಲು ಬೆಳಗ್ಗೆ 7ಕ್ಕೆ ಸುಬ್ರಹ್ಮಣ್ಯ ರಸ್ತೆಯಿಂದ ಹೊರಟು 7.48ಕ್ಕೆ ಕಬಕ-ಪುತ್ತೂರು ತಲುಪಲಿದೆ. ಅಲ್ಲಿ 2 ನಿಮಿಷ ನಿಲುಗಡೆಯಾಗಿ 9.30ಕ್ಕೆ ಮಂಗಳೂರು ಸೆಂಟ್ರಲ್‌ಗೆ ತಲುಪಲಿದೆ.
ಇನ್ನೊಂದೆಡೆ ಮಂಗಳೂರು ಸೆಂಟ್ರಲ್-ಸುಬ್ರಹ್ಮಣ್ಯ ರಸ್ತೆ ಪ್ಯಾಸೆಂಜರ್ ರೈಲು(56627) ಸಂಜೆ 5.45ಕ್ಕೆ ಮಂಗಳೂರು ಸೆಂಟ್ರಲ್‌ನಿಂದ ಹೊರಟು ಸಂಜೆ 7.03ಕ್ಕೆ ಪುತ್ತೂರಿಗೆ ತಲುಪಲಿದೆ. ಬಳಿಕ ಎರಡು ನಿಮಿಷ ನಿಲುಗಡೆಯಾಗಿ ರಾತ್ರಿ 8.10ಕ್ಕೆ ಸುಬ್ರಹ್ಮಣ್ಯ ರಸ್ತೆಗೆ ತಲುಪಲಿದೆ. ಸುಬ್ರಹ್ಮಣ್ಯ ರಸ್ತೆ-ಮಂಗಳೂರು ಪ್ಯಾಸೆಂಜರ್ ರೈಲು(56628) ರಾತ್ರಿ 8.40ಕ್ಕೆ ಸುಬ್ರಹ್ಮಣ್ಯ ರಸ್ತೆ ನಿಲ್ದಾಣದಿಂದ ಹೊರಟು ರಾತ್ರಿ 9.28ಕ್ಕೆ ಕಬಕ-ಪುತ್ತೂರಿಗೆ ತಲುಪಿ ಅಲ್ಲಿ 2 ನಿಲುಗಡೆಯಾಗಿ ರಾತ್ರಿ 11.10ಕ್ಕೆ ಮಂಗಳೂರು ಸೆಂಟ್ರಲ್ ತಲುಪಲಿದೆ. ನೈಋತ್ಯ ರೈಲ್ವೆ ಹಾಗೂ ದಕ್ಷಿಣ ರೈಲ್ವೆಯು ಅನುಕೂಲ ಪರಿಶೀಲಿಸಿ ಆದಷ್ಟು ಬೇಗ ಈ ರೈಲು ವಿಸ್ತರಣೆ ಸೇವೆಯನ್ನು ಆರಂಭಿಸುವಂತೆ ರೈಲ್ವೆ ಮಂಡಳಿಯು ತನ್ನ ಆದೇಶದಲ್ಲಿ ಸೂಚಿಸಿದೆ.
ಈ ರೈಲು ವಿಸ್ತರಣೆಗೆ ಮಂಜೂರಾತಿ ಲಭಿಸಿರುವ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು, ಮಂಗಳೂರು ಸೆಂಟ್ರಲ್-ಕಬಕ ಪುತ್ತೂರು ಪ್ಯಾಸೆಂಜರ್ ರೈಲನ್ನು ಸುಬ್ರಹ್ಮಣ್ಯದವರೆಗೆ ವಿಸ್ತರಿಸಿರುವುದಕ್ಕೆ ರೈಲ್ವೆ ಸಚಿವರಾದ ಅಶ್ವಿನ್ ವೈಷ್ಣವ್ ಹಾಗೂ ರೈಲ್ವೆ ರಾಜ್ಯ ಖ್ಯಾತೆ ಸಚಿವರಾದ ವಿ. ಸೋಮಣ್ಣ ಹಾಗೂ ರೈಲ್ವೆ ಮಂಡಳಿಗೆ ದಕ್ಷಿಣ ಕನ್ನಡ ಜಿಲ್ಲೆಯ ಜನತೆಯ ಪರವಾಗಿ ಕೃತಜ್ಞತೆ ಸಲ್ಲಿಸಿದ್ದಾರೆ.