ಪುತ್ತೂರು : ಇತಿಹಾಸ ಪ್ರಸಿದ್ಧ ಮಹಾತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯುವ 32ನೇ ವರ್ಷದ ಇತಿಹಾಸ ಪ್ರಸಿದ್ಧ ಜಾನಪದ ಕ್ರೀಡೆಗಳಲ್ಲೊಂದಾದ ಪುತ್ತೂರು ಕೋಟಿ- ಚೆನ್ನಯ ಜೋಡುಕರೆ ಕಂಬಳಕ್ಕೆ ಶನಿವಾರ ಬೆಳಿಗ್ಗೆ ಅದ್ದೂರಿ ಚಾಲನೆ ನೀಡಲಾಯಿತು.
ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ಶುಭಾಶೀರ್ವಾದದೊಂದಿಗೆ ನಡೆಯುವ ಕಂಬಳಕ್ಕೆ ಶ್ರೀಮಹಾಲಿಂಗೇಶ್ವರ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ, ಕಂಬಳ ಸಮಿತಿ ಕೋಶಾಧಿಕಾರಿ ಈಶ್ವರ ಭಟ್ ಪಂಜಿಗುಡ್ಡೆ ಕಂಬಳ ಕರೆಗೆ ಹಾಲು ಎರೆದು, ತೆಂಗಿನಕಾಯಿ ಒಡೆಯುವ ಮೂಲಕ ಚಾಲನೆ ನೀಡಿದರು.
ಬಳಿಕ ನಡೆದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿ, ರೈತ ದೇಶದ ಬೆನ್ನೆಲುಬು. ಗ್ರಾಮೀಣ ಕ್ರೀಡೆಯಾದ ಕಂಬಳ ರೈತರ ಬೆನ್ನೆಲುಬಾಗಿ ನಿಂತಿದೆ ಎಂಬುದಕ್ಕೆ ಕೋಟಿ-ಚೆನ್ನಯ ಕಂಬಳ ಸಾಕ್ಷಿಯಾಗಿದೆ. ಪುತ್ತೂರಿನಲ್ಲಿ ಕಂಬಳ ಕ್ರೀಡೆ ಬಂಗರಸರ ಕಾಲದಿಂದಲೇ ನಡೆಯುತ್ತಿದ್ದು, ಈಗಲೂ ವಿಜೃಂಭಣೆಯಿಂದ ನಡೆಯುತ್ತಿರುವುದಕ್ಕೆ ಕಂಬಳ ಅಭಿಮಾನಿಗಳ, ವೀಕ್ಷಕರ ಬಳಗದಿಂದ, ಓಟ ಕೋಣದ ಯಜಮಾನದ ಪ್ರೋತ್ಸಾಹ ಕಾರಣವಾಗಿದೆ. ಸೂರ್ಯ-ಚಂದ್ರರು ಇರುವವರೆಗೆ ನಿರಂತರವಾಗಿ ಕಂಬಳ ನಡೆಯಲಿ ಎಂದು ಶುಭ ಹಾರೈಸಿದರು.
ಸವಣೂರು ವಿದ್ಯಾರಶ್ಮಿ ಶಿಕ್ಷಣ ಸಂಸ್ಥೆಗಳ ಸಂಚಾಲಕ ಕೆ.ಸೀತಾರಾಮ ರೈ ಸವಣೂರು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ, ಮಾಜಿ ಶಾಸಕಿ ಶಕುಂತಲಾ ಶೆಟ್ಟಿ, ತಹಶೀಲ್ದಾರ್ ಪುರಂದರ ಹೆಗ್ಡೆ, ಕಂಬಳ ಸಮಿತಿ ಸಂಚಾಲಕ ವಸಂತ ಕುಮಾರ್ ರೈ ದುಗ್ಗಳ, ಪ್ರಧಾನ ಕಾರ್ಯದರ್ಶಿ ದಿನೇಶ್ ಕುಲಾಲ್ ಪಿ.ವಿ., ಸುದಾನ ಶಿಕ್ಷಣ ಸಂಸ್ಥೆಯ ಸಂಚಾಲಕ ರೆ.ಫಾ. ವಿಜಯ ಹಾರ್ವಿನ್, ಸಂಪ್ಯ ಅಕ್ಷಯ ಕಾಲೇಜು ಸಂಚಾಲಕ ಜಯಂತ ನಡುಬೈಲು, ಪರ್ಪುಂಜ ರಾಮಜಾಲು ಬ್ರಹ್ಮ ಬೈದರ್ಕಳ ಗರಡಿಯ ಆಡಳಿತ ಮೊಕ್ತೇಸರ ಸಂಜೀವ ಪೂಜಾರಿ ಕೂರೇಲು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣ ಪ್ರಸಾದ್ ಆಳ್ವ, ಕಂಬಳ ಸಮಿತಿ ಉಪಾಧ್ಯಕ್ಷ ಶಿವರಾಮ ಆಳ್ವ ಬಳ್ಳಮಜಲು, ಸುದೇಶ್ ಚಿಕ್ಕಪುತ್ತೂರು, ಉಪ್ಪಿನಂಗಡಿ ವಿಜಯ ವಿಕ್ರಮ ಕಂಬಳ ಸಮಿತಿ ಕೋಶಾಧಿಕಾರಿ ಸೀತಾರಾಮ ಶೆಟ್ಟಿ ಹೆಗ್ಡೆಹಿತ್ಲು, ಕಂಬಳ ಸಮಿತಿ ಸದಸ್ಯರಾದ ಯೋಗೀಶ್ ಸಾಮಾನಿ ಸಂಪಿಗೆದಡಿ ಮತ್ತಿತ್ತರರು ಉಪಸ್ಥಿತರಿದ್ದರು.
ಕೋಟಿ ಚೆನ್ನಯ ಕಂಬಳ ಸಮಿತಿ ಅಧ್ಯಕ್ಷ ಎನ್. ಚಂದ್ರಹಾಸ ಶೆಟ್ಟಿ ಸ್ವಾಗತಿಸಿದರು. ಕಂಬಳ ಸಮಿತಿಯ ನಿರಂಜನ ರೈ ಮಠಂತಬೆಟ್ಟು, ಶಿಕ್ಷಕ ಬಾಲಕೃಷ್ಣ ಪೊರ್ದಾಳ್ ಕಾರ್ಯಕ್ರಮ ನಿರೂಪಿಸಿದರು.