12 ಮಂದಿಗೆ ಗಾಯ; ಓರ್ವನಿಗೆ ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ
ಉಪ್ಪಿನಂಗಡಿ: ಬಜತ್ತೂರು ಗ್ರಾಮದ ನೀರಕಟ್ಟೆ ಎಂಬಲ್ಲಿ ಇಂದು ಮುಂಜಾನೆ ಖಾಸಗಿ ಬಸ್ ಪಲ್ಟಿಯಾಗಿ ಮೃತಪಟ್ಟ ವ್ಯಕ್ತಿಯನ್ನು ಬೆಂಗಳೂರಿನ ನಿವಾಸಿ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ 12 ಮಂದಿ ಗಾಯಗೊಂಡಿದ್ದು, ಈ ಪೈಕಿ ಓರ್ವನ ಸ್ಥಿತಿ ಚಿಂತಾಜನಕವಿದೆ ಎನ್ನಲಾಗಿದೆ. ಬೆಂಗಳೂರಿನಿಂದ ಉಡುಪಿಗೆ ಬರುತ್ತಿದ್ದ ಖಾಸಗಿ ಬಸ್ ಬೆಳಗ್ಗೆ 5 ಗಂಟೆಗೆ ವೇಳೆಗೆ ನೀರಕಟ್ಟೆಯ ಕಡಿದಾದ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.
ಮೃತಪಟ್ಟವರನ್ನು ಬೆಂಗಳೂರಿನ ಯಡಿಯೂರು ನಿವಾಸಿ ಹರ್ಷ (24) ಎಂದು ಗುರುತಿಸಲಾಗಿದೆ. ಅವರು ಸ್ನೇಹಿತರೊಂದಿಗೆ ಬೆಂಗಳೂರಿನಿಂದ ಮೂಲ್ಕಿಗೆ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ.
ಗಾಯಗೊಂಡ 12 ಮಂದಿಯಲ್ಲಿ 11 ಜನರು ಉಪ್ಪಿನಂಗಡಿ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಓರ್ವನನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಘಟನಾ ಸ್ಥಳಕ್ಕೆ ಪುತ್ತೂರು ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

