ಪೊಲೀಸರ ಕಾರ್ಯವೈಖರಿಯ ಬಗ್ಗೆ ಭಾರಿ ಅಸಮಾಧಾನ
ಮಂಗಳೂರು: ಕರಾವಳಿಯಲ್ಲಿ ಇತ್ತೀಚೆಗೆ ನಡೆದ ಎರಡು ಹತ್ಯೆಗಳ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆಗೆ ಸಂಬಂಧಿಸಿದಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಶನಿವಾರ ಮಂಗಳೂರಿಗೆ ಭೇಟಿ ನೀಡಿದ್ದು, ಸ್ಥಳೀಯ ಅಧಿಕಾರಿಗಳು ಹಾಗೂ ಮುಸ್ಲಿಂ ಮುಖಂಡರೊಂದಿಗೆ ಸರಣಿ ಸಭೆಗಳನ್ನು ನಡೆಸುತ್ತಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮತ್ತು ಸಚಿವ ಪರಮೇಶ್ವರ್ ವಿಮಾನ ನಿಲ್ದಾಣದಿಂದ ಸರ್ಕೀಟ್ ಹೌಸ್‌ಗೆ ಆಗಮಿಸಿದ್ದು, ಸರ್ಕೀಟ್ ಹೌಸ್‌ನಲ್ಲಿ ಮಾತುಕತೆ ನಡೆಸುತ್ತಿದ್ದಾರೆಂದು ವರದಿಗಳು ತಿಳಿಸಿವೆ.
ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ದುಷ್ಕರ್ಮಿಗಳ ತಂಡ ಬಜಪೆಯ ಕಿನ್ನಿಪದವಿನಲ್ಲಿ ತಲವಾರಿನಿಂದ ಕೊಚ್ಚಿ ಗುರುವಾರ ಬರ್ಬರವಾಗಿ ಹತ್ಯೆ ಮಾಡಿತ್ತು. ಇದಕ್ಕೂ ಮೊದಲು ಕಳೆದ ಭಾನುವಾರ ಕುಡುಪು ಸಮೀಪ ಆಶ್ರಫ್ ಎಂಬ ಕೇರಳದ ಯುವಕನನ್ನು ಕ್ರಿಕೆಟ್ ಆಟದ ವೇಳೆ ಸಾಯಿಸಲಾಗಿತ್ತು. ಈ ಎರಡು ಹತ್ಯೆಗಳ ಬಳಿಕ ದಕ್ಷಿಣ ಕನ್ನಡ ಜಿಲ್ಲೆ ಪ್ರಕ್ಷುಬ್ಧಗೊಂಡಿದೆ.
ಬಜಪೆಯ ಸುಹಾಸ್ ಶೆಟ್ಟಿ ವಿರುದ್ಧ ಎರಡು ಕೊಲೆ ಪ್ರಕರಣಗಳೂ ಸೇರಿದಂತೆ ಐದು ಪ್ರಕರಣಗಳು ದಾಖಲಾಗಿದ್ದವು. ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆಯಾದ ಬೆನ್ನಲ್ಲೇ ಸುರತ್ಕಲ್‌ನಲ್ಲಿ 2022ರ ಜುಲೈ 28ರಂದು ನಡೆದಿದ್ದ ಕಾಟಿಪಳ್ಳ ಮಂಗಳಪೇಟೆಯ ಮಹಮ್ಮದ್ ಫಾಝಿಲ್ ಹತ್ಯೆ ಪ್ರಕರಣದಲ್ಲಿ ಸುಹಾಸ್ ಶೆಟ್ಟಿ ಪ್ರಮುಖ ಆರೋಪಿಯಾಗಿದ್ದ. ಕಳೆದ ವರ್ಷ ಜಾಮೀನಿನ ಮೇಲೆ ಹೊರಗೆ ಬಂದಿದ್ದ ಎಂದು ತಿಳಿದುಬಂದಿದೆ. ಸುಹಾಸ್ ಶೆಟ್ಟಿ ಇನ್ನೊವಾ ಕಾರಿನಲ್ಲಿ ಸಹಚರರಾದ ಸಂಜಯ್, ಪ್ರಜ್ವಲ್, ಅನ್ವಿತ್, ಲತೀಶ್ ಹಾಗೂ ಶಶಾಂಕ್ ಜೊತೆ ತೆರಳುತ್ತಿದ್ದಾಗ ಐದಾರು ಮಂದಿ ದುಷ್ಕರ್ಮಿಗಳ ತಂಡ ಸ್ವಿಫ್ಟ್ ಕಾರು ಹಾಗೂ ಪಿಕಪ್ ವಾಹನದಲ್ಲಿ ಹಿಂಬಾಲಿಸಿತ್ತು. ಈ ಹತ್ಯೆ ಘಟನೆ ಬೆನ್ನಲ್ಲೇ ಪೊಲೀಸರ ಕಾರ್ಯವೈಖರಿಯ ಕುರಿತು ಭಾರಿ ಟೀಕೆಗಳು ವ್ಯಕ್ತವಾಗುತ್ತಿವೆ.