ಟೆಸ್ಟ್ ಪಂದ್ಯಗಳಿಗೆ ವಿದಾಯ ದೃಢಪಡಿಸಿದ ಕಿಂಗ್ ಕೊಹ್ಲಿ
ಮುಂಬಯಿ: ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್ಗೆ ವಿದಾಯ ಹೇಳುತ್ತಿರುವುದು ದೃಢಪಟ್ಟಿದೆ. ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಳ್ಳುವ ಮೂಲಕ ಕೊಹ್ಲಿ ಅಧಿಕೃತವಾಗಿ ನಿವೃತ್ತಿ ಘೋಷಿಸಿದ್ದು, ಕಿಂಗ್ ಕೊಹ್ಲಿಯ 14 ವರ್ಷದ ಟೆಸ್ಟ್ ಕೆರಿಯರ್ ಅಂತ್ಯಗೊಂಡಂತಾಗಿದೆ.
ಕೆಲ ದಿನಗಳ ಹಿಂದೆ ಕೊಹ್ಲಿ ಟೆಸ್ಟ್ ಕ್ರಿಕೆಟ್ಗೆ ವಿದಾಯ ಹೇಳಲಿದ್ದಾರೆ ಎಂಬ ಸುದ್ದಿಗಳು ಹರಿದಾಡಿದ್ದವು. ಹೀಗಾಗಿ ಬಿಸಿಸಿಐ ಅವರ ಮನವೊಲಿಸಲು ಮುಂದಾಗಿತ್ತು. ಆದರೆ ಈ ಮಾತುಕತೆ ಫಲಪ್ರದವಾಗಿಲ್ಲ. ಹೀಗಾಗಿ ಕೊಹ್ಲಿ ಟೆಸ್ಟ್ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿರುವುದನ್ನು ಅಧಿಕೃತಗೊಳಿಸಿದ್ದಾರೆ.
2011ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಕಣಕ್ಕಿಳಿಯುವ ಮೂಲಕ ಟೆಸ್ಟ್ ಕೆರಿಯರ್ ಆರಂಭಿಸಿದ್ದ ವಿರಾಟ್ ಕೊಹ್ಲಿ, 2014ರಲ್ಲಿ ಭಾರತ ಟೆಸ್ಟ್ ತಂಡದ ನಾಯಕರಾಗಿ ಆಯ್ಕೆಯಾಗಿದ್ದರು. ಇದಾದ ಬಳಿಕ ಅವರು ಹಿಂತಿರುಗಿ ನೋಡಿಲ್ಲ.
ಅಲ್ಲದೆ ಟೀಮ್ ಇಂಡಿಯಾ ಪರ 123 ಟೆಸ್ಟ್ ಪಂದ್ಯಗಳಲ್ಲಿ ಕಣಕ್ಕಿಳಿದಿರುವ ಅವರು 210 ಇನ್ನಿಂಗ್ಸ್ಆಡಿದ್ದಾರೆದ್ದಾರೆ. ಟೆಸ್ಟ್ನಲ್ಲಿ 16608 ಎಸೆತಗಳನ್ನು ಎದುರಿಸಿರುವ ಕೊಹ್ಲಿ ಒಟ್ಟು 9230 ರನ್ ಕಲೆ ಹಾಕಿದ್ದಾರೆ. ಇದರ ನಡುವೆ 30 ಶತಕ ಹಾಗೂ 31 ಅರ್ಧ ಶತಕಗಳನ್ನು ಬಾರಿಸಿದ್ದಾರೆ.
ಟೆಸ್ಟ್ ತಂಡವನ್ನು 68 ಪಂದ್ಯಗಳಲ್ಲಿ ಮುನ್ನಡೆಸಿದ್ದಾರೆ. ಕೊಹ್ಲಿ ನಾಯಕತ್ವದಲ್ಲಿ ಟೀಮ್ ಇಂಡಿಯಾ 40 ಪಂದ್ಯಗಳಲ್ಲಿ ಜಯ ಸಾಧಿಸಿದರೆ, ಕೇವಲ 17 ಮ್ಯಾಚ್ಗಳಲ್ಲಿ ಮಾತ್ರ ಸೋಲನುಭವಿಸಿದೆ. 11 ಪಂದ್ಯಗಳಲ್ಲಿ ಭಾರತ ತಂಡ ಡ್ರಾ ಸಾಧಿಸಿದೆ. ಈ ಮೂಲಕ ವಿರಾಟ್ ಕೊಹ್ಲಿ ಭಾರತ ಟೆಸ್ಟ್ ತಂಡದ ಅತ್ಯಂತ ಯಶಸ್ವಿ ನಾಯಕ ಎನಿಸಿಕೊಂಡಿದ್ದಾರೆ.
ಕೊಹ್ಲಿ ಏಕದಿನ ಕ್ರಿಕೆಟ್ನಲ್ಲಿ ಮಾತ್ರ ಮುಂದುವರಿಯುವುದಾಗಿ ತಿಳಿಸಿದ್ದಾರೆ. ಇದಕ್ಕೂ ಮುನ್ನ 2024ರಲ್ಲಿ ನಡೆದ ಟಿ20 ವಿಶ್ವಕಪ್ನ ಫೈನಲ್ ಪಂದ್ಯದ ಬೆನ್ನಲ್ಲೇ ಕೊಹ್ಲಿ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಹೇಳಿದ್ದರು. ಇದೀಗ ದಿಢೀರ್ ಆಗಿ ಟೆಸ್ಟ್ ಕ್ರಿಕೆಟ್ಗೂ ನಿವೃತ್ತಿ ಘೋಷಿಸಿ ಅಚ್ಚರಿ ಮೂಡಿಸಿದ್ದಾರೆ.
ಟೆಸ್ಟ್ ಕ್ರಿಕೆಟ್ನಲ್ಲಿ ಮೊದಲ ಬಾರಿಗೆ ಬ್ಯಾಗಿ ಬ್ಲೂ ಕ್ಯಾಪ್ ಧರಿಸಿ 14 ವರ್ಷಗಳು ಕಳೆದಿವೆ. ಪ್ರಾಮಾಣಿಕವಾಗಿ ಹೇಳಬೇಕೆಂದರೆ, ಈ ಸ್ವರೂಪವು ನನ್ನನ್ನು ಈ ಪ್ರಯಾಣಕ್ಕೆ ಕರೆದೊಯ್ಯುತ್ತದೆ ಎಂದು ನಾನು ಎಂದಿಗೂ ಊಹಿಸಿರಲಿಲ್ಲ. ಇದು ನನ್ನನ್ನು ಪರೀಕ್ಷಿಸಿದೆ, ನನ್ನನ್ನು ರೂಪಿಸಿದೆ ಮತ್ತು ನಾನು ಜೀವನಪರ್ಯಂತ ಸಾಗಿಸುವ ಪಾಠಗಳನ್ನು ಕಲಿಸಿದೆ ಎಂದು ಕೊಹ್ಲಿ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.
ನಾನು ಹೊಂದಿದ್ದ ಎಲ್ಲವನ್ನೂ ಟೆಸ್ಟ್ ಕ್ರಿಕೆಟ್ಗೆ ನೀಡಿದ್ದೇನೆ. ಅಲ್ಲದೆ ನಾನು ನಿರೀಕ್ಷಿಸಿದ್ದಕ್ಕಿಂತ ಹೆಚ್ಚಿನದನ್ನು ಅದರಿಂದ ನನಗೆ ದಕ್ಕಿದೆ. ನನ್ನೊಂದಿಗೆ ಆಡಿದ ಪ್ರತಿಯೊಬ್ಬರಿಗೂ ಕೃತಜ್ಞತೆ ಅರ್ಪಿಸುತ್ತೇನೆ. ಅಲ್ಲದೆ ಯಾವತ್ತಿದ್ದರೂ ನಾನು ನನ್ನ ಟೆಸ್ಟ್ ವೃತ್ತಿಜೀವನವನ್ನು ನಗುವಿನೊಂದಿಗೆ ಹಿಂತಿರುಗಿ ನೋಡುತ್ತೇನೆ ಎಂದು ವಿರಾಟ್ ಕೊಹ್ಲಿ ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಪೋಸ್ಟ್ ಹಂಚಿಕೊಳ್ಳುವ ಮೂಲಕ ನಿವೃತ್ತಿ ಘೋಷಿಸಿದ್ದಾರೆ.