ಚಿಕ್ಕಮಗಳೂರಿನ ಕಡೂರಿನಲ್ಲಿ ಸಂಭವಿಸಿದ ಕೃತ್ಯಕ್ಕೆ ಭಾರಿ ಆಕ್ರೋಶ
ಚಿಕ್ಕಮಗಳೂರು : ಬೆಂಗಳೂರು ಮಾದರಿಯಲ್ಲೇ ಚಿಕ್ಕಮಗಳೂರು ಜಿಲ್ಲೆಯ ಕಡೂರಿನಲ್ಲಿ ದನದ ಕೆಚ್ಚಲು ಕೊಯ್ದು ಕ್ರೌರ್ಯ ಮೆರೆದ ಘಟನೆ ಬೆಳಕಿಗೆ ಬಂದಿದ್ದು, ವಿಪರೀತ ರಕ್ತ ಸೋರಿಕೆಯಾಗಿ ದನ ಮೃತಪಟ್ಟಿದೆ.
ಚಿಕ್ಕಮಗಳೂರಿನ ಬೀರೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೃತ್ಯ ಎಸಗಲಾಗಿದ್ದು, ತೀವ್ರ ರಕ್ತಸ್ರಾವದಿಂದಾಗಿ ಹಸು ಮೃತಪಟ್ಟಿದೆ.
ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ತಮ್ಮಿಹಳ್ಳಿಯಲ್ಲಿ ಶೇಖರಪ್ಪ ಎಂಬವರಿಗೆ ಸೇರಿದ ಹಸುವನ್ನು ರಾತ್ರೋರಾತ್ರಿ ಕಳವು ಮಾಡಲು ದುಷ್ಕರ್ಮಿಗಳು ಯತ್ನಿಸಿದ್ದಾರೆ. ಆದರೆ ಕಳ್ಳತನ ಯತ್ನ ವಿಫಲವಾದಾಗ ರೋಷದಿಂದ ಹಸುವಿನ ಕೆಚ್ಚಲು ಕತ್ತರಿಸಿ ಪರಾರಿಯಾಗಿದ್ದಾರೆ. ಪರಿಣಾಮವಾಗಿ ಹಸು ತೀವ್ರ ರಕ್ತಸ್ರಾವದಿಂದ ಮೃತಪಟ್ಟಿದೆ.
ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ ವ್ಯಕ್ತವಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಕಡೂರಿನಲ್ಲಿ ನಿರಂತರವಾಗಿ ಜಾನುವಾರುಗಳ ಕಳ್ಳತನ ಮಾಡಲಾಗುತ್ತಿದೆ. ಆದರೂ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಚಾಮರಾಜಪೇಟೆಯ ವಿನಾಯಕನಗರದಲ್ಲಿ ಮೂರು ಹಸುಗಳ ಕೆಚ್ಚಲು ಕತ್ತರಿಸಿ ಕ್ರೌರ್ಯ ಮೆರೆದ ಘಟನೆ ಜನವರಿಯಲ್ಲಿ ನಡೆದಿತ್ತು. ಘಟನೆ ಸಂಬಂಧ ಪೊಲೀಸ್ ದೂರು ಸಹ ದಾಖಲಾಗಿ, ಆರೋಪಿಯನ್ನು ಪೊಲೀಸರು ಬಂಧಿಸಿದ್ದರು. ಪ್ರಾಣಿಗಳ ಮೇಲಿನ ಈ ರೀತಿಯ ಹಿಂಸೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಬೆಂಗಳೂರಿನ ಘಟನೆ ದೇಶದಾದ್ಯಂತ ಸುದ್ದಿಯಾಗಿತ್ತು.
ಅದಾದ ಕೆಲವೇ ದಿನಗಳಲ್ಲಿ ಮೈಸೂರಿನಲ್ಲೂ ಸಹ ಮಚ್ಚಿನಿಂದ ಹಸುವಿನ ಬಾಲ ಕತ್ತರಿಸಿ ವಿಕೃತಿ ಮೆರೆಯಲಾಗಿತ್ತು. ಆ ನಂತರ ಉತ್ತರ ಕನ್ನಡ ಜಿಲ್ಲೆಯಲ್ಲಿ ಅಂಥದ್ದೇ ಘಟನೆ ವರದಿಯಾಗಿತ್ತು. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಸಾಲ್ಕೋಡು ಗ್ರಾಮದಲ್ಲಿ ಕೃಷ್ಣ ಆಚಾರಿ ಎಂಬವರಿಗೆ ಸೇರಿದ ಹಸುವಿನ ತಲೆ ಕಡಿದು ಬಳಿಕ ಅದರ ದೇಹವನ್ನು ಕೊಂಡೊಯ್ಯಲಾಗಿತ್ತು. ಗರ್ಭ ಧರಿಸಿದ್ದ ಹಸುವಿನ ತಲೆ ಕಡಿದ ಪ್ರಕರಣ ಕೂಡ ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿತ್ತು.