ಕೊಲೆ ಮಾಡಿದವರಲ್ಲಿ ಸ್ಥಳೀಯ ಇಬ್ಬರು ಪರಿಚಯಸ್ಥರು ಎಂದು ಮಾಹಿತಿ
ಬಂಟ್ವಾಳ: ತಾಲೂಕಿನ ಕುರಿಯಾಳ ಗ್ರಾಮದ ಈರಾಕೋಡಿ ಎಂಬಲ್ಲಿ ಕೊಳತ್ತಮಜಲು ಜುಮ್ಮಾ ಮಸೀದಿ ಕಾರ್ಯದರ್ಶಿ ಹಾಗೂ ಪಿಕಪ್ ಚಾಲಕ ಅಬ್ದುಲ್ ರಹಿಮಾನ್ (32) ಹತ್ಯೆ ಮತ್ತು ಕಲಂದರ್ ಶಾಫಿ ಎಂಬವರ ಮೇಲಿನ ಕೊಲೆಯತ್ನ ಪ್ರಕರಣ ಸಂಬಂಧ ಸ್ಥಳೀಯ ಇಬ್ಬರು ಸೇರಿ 15 ಮಂದಿಯ ವಿರುದ್ಧ ಬಂಟ್ವಾಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಬ್ದುಲ್ ರಹಿಮಾನ್ ಅವರ ಕೊಲೆ ಮತ್ತು ಕಲಂದರ್ ಶಾಫಿ ಕೊಲೆಯತ್ನ ಪ್ರಕರಣದಲ್ಲಿ ದೀಪಕ್ ಮತ್ತು ಸುಮಿತ್ ಸೇರಿ ಒಟ್ಟು 15 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ. ದೀಪಕ್ ಮತ್ತು ಸುಮಿತ್ ಕೊಲೆಯಾದ ಅಬ್ದುಲ್ ರಹಿಮಾನ್ ಮತ್ತು ಕಲಂದರ್ ಶಾಫಿ ಅವರಿಗೆ ಪರಿಚಯಸ್ಥರೇ ಆಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಅಬ್ದುಲ್ ರಹಿಮಾನ್ ಮತ್ತು ಕಲಂದರ್ ಶಾಫಿ ಹೊಳೆಯಿಂದ ಪಿಕ್ ಅಪ್ ವಾಹನದಲ್ಲಿ ಮರಳು ಲೋಡ್ ಮಾಡಿ ಕುರಿಯಾಳ ಗ್ರಾಮದ ಈರಾ ಕೋಡಿಯ ರಾಜೀವಿ ಎಂಬವರ ಮನೆ ಬಳಿ ಇಳಿಸುವ ಸಮಯ ಪರಿಚಯಸ್ಥರಾದ ದೀಪಕ್, ಸುಮಿತ್ ಮತ್ತು 15 ಮಂದಿ ಏಕಾಏಕಿ ಚಾಲಕನ ಸೀಟಿನಲ್ಲಿದ್ದ ಅಬ್ದುಲ್ ರಹಿಮಾನ್ ಅವರನ್ನು ಹೊರಗೆ ಎಳೆದು ತಲವಾರು, ಚೂರಿ, ರಾಡ್‌ಗಳಿಂದ ಯದ್ವಾತದ್ವಾ ಕಡಿದಿದ್ದಾರೆ. ಆಗ ಪಕ್ಕದಲ್ಲಿದ್ದ ನಾನು ತಡೆಯಲು ಹೋದಾಗ ಚೂರಿಯಿಂದ, ಎದೆಗೆ, ಬೆನ್ನಿಗೆ, ಕೈಗೆ, ತಿವಿದು ತಲವಾರ್‌ನಿಂದ ಕಡಿದಿದ್ದಾರೆ. ಈ ವೇಳೆ ಅಲ್ಲಿದ್ದವರು ಬೊಬ್ಬೆ ಹಾಕಿದ್ದರಿಂದ ಹಲ್ಲೆ ಮಾಡಿದ ಆರೋಪಿಗಳು ಮಾರಕಾಸ್ತ್ರಗಳೊಂದಿಗೆ ಪರಾರಿಯಾಗಿದ್ದಾರೆ. ಹಲ್ಲೆಗೈದವರ ಪೈಕಿ ಇಬ್ಬರು ಪರಿಚಯಸ್ಥರು ಎಂದು ಹಲ್ಲೆಗೊಳಗಾಗಿ ಆಂಬ್ಯುಲೆನ್ಸ್‌ನಲ್ಲಿ ಆಸ್ಪತ್ರೆಗೆ ಸಾಗಿಸುತ್ತಿದ್ದ ವೇಳೆ ಕಲಂದರ್ ಶಾಫಿ ಮಾಹಿತಿ ನೀಡಿದ್ದಾರೆ ಎಂದು ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದ ಮುಹಮ್ಮದ್ ನಿಸಾರ್ ಎಂಬವರು ಬಂಟ್ಬಾಳ ಗ್ರಾಮೀಣ ಪೊಲೀಸ್ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
ಮೃತ ಅಬ್ದುಲ್ ರಹಿಮಾನ್ ಅವರು ಕೊಳ್ತಮಜಲು ಜುಮ್ಮಾ ಮಸೀದಿಯ ಕಾರ್ಯದರ್ಶಿಯಾಗಿದ್ದು ತೀವ್ರವಾಗಿ ಗಾಯಗೊಂಡ ಕಲಂದರ್ ಶಾಫಿ ಅವರು ಕೂಲಿ ಕೆಲಸ ಮಾಡಿಕೊಂಡಿದ್ದರು. ಊರಿನ ಜನರೊಂದಿಗೆ ಉತ್ತಮ ಅಭಿಪ್ರಾಯ ಹೊಂದಿದ್ದಾರೆ. ದುಷ್ಕರ್ಮಿಗಳ ಗುಂಪು ಕೋಮು ಭಾವನೆಯಿಂದ ಅಥವಾ ಇನ್ನಾವುದೋ ಕಾರಣಕ್ಕೆ ಅಬ್ದುಲ್ ರಹಿಮಾನ್ ಅವರನ್ನು ಕೊಲೆಗೈದು, ಕಲಂದರ್ ಶಾಫಿ ಅವರನ್ನು ತೀವ್ರವಾಗಿ ಗಾಯಗೊಳಿಸಿ ಕೊಲೆ ಪ್ರಯತ್ನ ಮಾಡಿದ್ದಾರೆ. ಈ ಕೃತ್ಯದಲ್ಲಿ ಪರಿಚಯಸ್ಥರಾದ ದೀಪಕ್, ಸುಮಿತ್ ಮತ್ತು ಇತರರು ಭಾಗಿಯಾಗಿದ್ದಾರೆ ಎಂದು ದೂರುದಾರ ನಿಸಾರ್ ನೀಡಿರುವ ದೂರಿನಲ್ಲಿ ತಿಳಿಸಲಾಗಿದೆ.