ನೆಲ್ಯಾಡಿ: ಖಾಸಗಿ ಬಸ್ ಹಿಟಾಚಿ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟು, 18 ಕ್ಕೂ ಹಚ್ಚು ಮಂದಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 75ರ ಲಾವತಡ್ಕದಲ್ಲಿ ಇಂದು ಮುಂಜಾನೆ ಸಂಭವಿಸಿದೆ.
ಅಪಘಾತದಲ್ಲಿ ಗಂಭೀರ ಗಾಯಗೊಂಡ ಕಾರ್ಕಳ ಪಡುಮನೆ ನಿವಾಸಿ ಶಂಕರನಾರಾಯಣ ಭಟ್ (41) ಅವರನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ ದಾರಿ ಮಧ್ಯೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಕಾರ್ಕಳದಿಂದ ಧರ್ಮಸ್ಥಳ ಮೂಲಕ ಬೆಂಗಳೂರಿಗೆ ಹೊರಟಿದ್ದ ಖಾಸಗಿ ಬಸ್ಸು, ಲಾವತಡ್ಕ ಬಳಿ ಹೆದ್ದಾರಿ ಬದಿಯಲ್ಲಿ ನಿಂತಿದ್ದ ಹಿಟಾಚಿ ಯಂತ್ರವನ್ನು ಸಾಗಿಸುತ್ತಿದ್ದ ಲಾರಿಗೆ ಹಿಂಬದಿಂದ ಡಿಕ್ಕಿ ಹೊಡೆದಿದೆ. ಬಸ್ಸಿನಲ್ಲಿ ಸುಮಾರು 30 ಪ್ರಯಾಣಿಕರಿದ್ದರು ಎಂದು ತಿಳಿದುಬಂದಿದೆ.
ಈ ಪೈಕಿ ಐವರು ಗಂಭೀರ ಗಾಯಗೊಂಡಿದ್ದು, ತಕ್ಷಣ 5 ಮಂದಿ ಮಂಗಳೂರಿನ ಎಜೆ ಆಸ್ಪತ್ರೆ ಹಾಗೂ 4 ಮಂದಿ ಇಂಡಿಯನ್ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ. ಕೆಲವರನ್ನು ಪುತ್ತೂರಿನ ಆಸ್ಪತ್ರೆಗೆ ಆಂಬುಲೆನ್ಸ್ ಮೂಲಕ ಕಳುಹಿಸಲಾಗಿದೆ. ಸ್ಥಳಕ್ಕೆ ನೆಲ್ಯಾಡಿ ಹೊರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷೆಯಲ್ಲಿದೆ.