ಡ್ಯಾಮೇಜ್ ಕಂಟ್ರೋಲ್ ಮಾಡಲು ರಂಗಕ್ಕಿಳಿದ ಸಚಿವರು
ಬೆಂಗಳೂರು: ಪದೇ ಪದೆ ಭ್ರಷ್ಟಾಚಾರ ಮತ್ತು ಅಕ್ರಮಗಳ ಆರೋಪಗಳನ್ನು ಎದುರಿಸುತ್ತಿರುವ ಕಾಂಗ್ರೆಸ್ ಸರ್ಕಾರಕ್ಕೆ ಈಗ ವಸತಿ ಇಲಾಖೆಯಲ್ಲಿ ಕೇಳಿಬಂದಿರುವ ಭಾರಿ ಭ್ರಷ್ಟಾಚಾರದ ಆರೋಪ ಮತ್ತಷ್ಟು ಮುಜುಗರವನ್ನುಂಟುಮಾಡಿದೆ. ದಿನೇಶ್ ಗುಂಡೂರಾವ್, ಈಶ್ವರ ಖಂಡ್ರೆ ಸೇರಿದಂತೆ ಹಲವು ಸಚಿವರು ಈಗ ಡ್ಯಾಮೇಜ್ ಕಂಟ್ರೋಲ್ ಪ್ರಯತ್ನಕ್ಕೆ ಮುಂದಾಗಿದ್ದಾರೆ.
ದೇಶದ ಎಲ್ಲ ಕಡೆ ಭ್ರಷ್ಟಾಚಾರ ಇದೆ. ಎಲ್ಲಿ ಭ್ರಷ್ಟಾಚಾರ ಇಲ್ಲ ಎಂದು ಎನ್ನುವುದಕ್ಕಾಗಲ್ಲ. ಇ.ಡಿ., ಐಟಿ ದಾಳಿಯಲ್ಲೂ ಭ್ರಷ್ಟಾಚಾರ ಇರುತ್ತದೆ. ಹಣ ತೆಗೆದುಕೊಂಡು ಬಿಟ್ಟುಬಿಡುತ್ತಾರೆ. ವಸತಿ ಯೋಜನೆಯ ಮನೆ ಹಂಚಿಕೆಯಲ್ಲಿ ಭ್ರಷ್ಟಾಚಾರ ಆಗಿದ್ದರೆ ತನಿಖೆ ಮಾಡಲು ಸರ್ಕಾರ ತಯಾರಿದೆ ಎಂದು ದಿನೇಶ್ ಗುಂಡೂರಾವ್ ಸಮರ್ಥಿಸಿಕೊಂಡಿದ್ದಾರೆ. ನಮ್ಮ ಸರ್ಕಾರ ಭ್ರಷ್ಟಾಚಾರ ಸಹಿಸುವುದಿಲ್ಲ. ಭ್ರಷ್ಟಾಚಾರ ನಡೆದಿದ್ದರೆ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ.
ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಹಾಗೂ ಕಾಂಗ್ರೆಸ್ ಶಾಸಕ ಬಿ.ಆರ್. ಪಾಟೀಲ್ ವಸತಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿರುವ ಆಡಿಯೋ ಕ್ಲಿಪ್ ಜೂ.20ರಂದು ಎಲ್ಲೆಡೆ ವೈರಲ್ ಆಗಿದೆ. ಈ ಆಡಿಯೋ ಕ್ಲಿಪ್‌ನಲ್ಲಿ, ಶಾಸಕ ಪಾಟೀಲ್ ತಮ್ಮಲ್ಲಿರುವ ಮಾಹಿತಿಯನ್ನು ಬಹಿರಂಗಪಡಿಸಿದರೆ ಕಾಂಗ್ರೆಸ್ ನೇತೃತ್ವದ ಸರ್ಕಾರದ ಅಡಿಪಾಯವೇ ಅಲುಗಾಡುತ್ತದೆ ಎಂದು ಹೇಳಿರುವುದು ಸ್ಪಷ್ಟವಾಗಿ ಕೇಳಿಸುತ್ತಿದೆ.
ಆಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಬಿಜೆಪಿ, ಆರೋಪಗಳ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕೆಂದು ಒತ್ತಾಯಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ, ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರ ರಾಜೀನಾಮೆ ಪಡೆಯಬೇಕು ಎಂದು ಆಗ್ರಹಿಸಿದೆ.
ಕಲಬುರಗಿ ಜಿಲ್ಲೆಯ ಆಳಂದ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುವ ಶಾಸಕ ಪಾಟೀಲ್, ಸಚಿವ ಜಮೀರ್ ಅವರ ಆಪ್ತ ಕಾರ್ಯದರ್ಶಿ ಸರ್ಫರಾಜ್ ಖಾನ್ ಅವರೊಂದಿಗೆ ಮಾತನಾಡುತ್ತಿರುವುದು ದೂರವಾಣಿ ಸಂಭಾಷಣೆಯ ಆಡಿಯೋ ಕ್ಲಿಪ್‌ನಲ್ಲಿ ಕೇಳಿಬರುತ್ತಿದೆ. ಪಾಟೀಲ್ ತಮ್ಮ ಕ್ಷೇತ್ರದೊಳಗಿನ ಹಳ್ಳಿಗಳಲ್ಲಿ ಮನೆ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಲಂಚದ ಬಗ್ಗೆ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದು ಕಾರ್ಯದರ್ಶಿಯನ್ನು ಪ್ರಶ್ನಿಸಿದ್ದಾರೆ.
ಲಂಚ ನೀಡಿದವರಿಗೆ ಮಾತ್ರ ಮನೆಗಳನ್ನು ಹಂಚಿಕೆ ಮಾಡಲಾಗುತ್ತಿದೆ. ನನ್ನ ಸ್ವಂತ ಸರ್ಕಾರದ ವಿರುದ್ಧ ಈ ದೂರು ನೀಡಲು ನನಗೆ ಬೇಸರವಾಗಿದೆ. ವಿವಿಧ ಗ್ರಾಮಗಳಲ್ಲಿ ಒಟ್ಟು 950 ಮನೆಗಳನ್ನು ಫಲಾನುಭವಿಗಳಿಂದ ಹಣ ಪಡೆದು ಹಂಚಿಕೆ ಮಾಡಲಾಗಿದೆ. ನನ್ನ ಶಿಫಾರಸು ಪತ್ರಗಳನ್ನು ನಿರ್ಲಕ್ಷಿಸಲಾಗುತ್ತಿದೆ. ಬದಲಾಗಿ, ಗ್ರಾಮ ಪಂಚಾಯತ್ ಅಧ್ಯಕ್ಷರು ಸಲ್ಲಿಸಿದ ಪಟ್ಟಿಗೆ ಆದ್ಯತೆ ನೀಡಲಾಗಿದೆ ಎಂದು ಶಾಸಕ ಪಾಟೀಲ್ ಹೇಳಿದ್ದಾರೆ.
ಆಡಿಯೋದಲ್ಲಿ ಕಾರ್ಯದರ್ಶಿ ಸರ್ಫರಾಜ್ ಖಾನ್, ಪಾಟೀಲ್ ಅವರನ್ನು ಸಮಾಧಾನಪಡಿಸಲು ಪ್ರಯತ್ನಿಸುತ್ತಿರುವುದು ಸ್ಪಷ್ಟವಾಗಿದೆ. ತಮ್ಮ ಫಲಾನುಭವಿಗಳ ಪಟ್ಟಿಯನ್ನು ಸಲ್ಲಿಸುವಂತೆ ಕೇಳುತ್ತಿದ್ದಾರೆ ಮತ್ತು ಅವರಿಗೂ ಮನೆಗಳನ್ನು ಹಂಚಿಕೆ ಮಾಡಲಾಗುವುದು ಎಂದು ಭರವಸೆ ನೀಡುತ್ತಿದ್ದಾರೆ.
























