ಯಾದಗಿರಿ: ಕಾಂಗ್ರೆಸಿಗರು ಮಾತೆತ್ತಿದರೆ ಜೆಡಿಎಸ್ ಕಥೆ ಮುಗಿದಿದೆ ಎಂದು ಹೇಳುತ್ತಾರೆ. ಆದರೆ ಅವರ ಪಕ್ಷ ಎಷ್ಟು ರಾಜ್ಯಗಳಲ್ಲಿ ಅಧಿಕಾರದಲ್ಲಿದೆ ಎಂದು ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ಜೆಡಿಎಸ್ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವನ್ನು ತರಾಟೆಗೆ ತೆಗೆದು ಕೊಂಡಿದ್ದಾರೆ.
ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಕರ್ನಾಟಕ ಆರ್ಥಿಕವಾಗಿ ದಿವಾಳಿಯಾಗಿದೆ. ಕಾಂಗ್ರೆಸ್ ಪಕ್ಷ ಕರ್ನಾಟಕ, ಹಿಮಾಚಲ ಪ್ರದೇಶ, ತೆಲಂಗಾಣದಲ್ಲಿ ಮಾತ್ರವೇ ಅಧಿಕಾರದಲ್ಲಿದೆ. ಕರ್ನಾಟಕ ರಾಜ್ಯದಲ್ಲಂತೂ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ನಾಶವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹಾಗೆಯೇ ಇಂದು ಬೇರೆ ಬೇರೆ ಪಕ್ಷಗಳಲ್ಲಿ ಇದ್ದು ಅಧಿಕಾರ ಅನುಭವಿಸುತ್ತಿರುವವರಲ್ಲಿ ಹಲವರು ನಮ್ಮ JDS ನಿಂದಲೇ ಹೋದ ಪಳೆಯುಳಿಕೆಗಳಾಗಿದ್ದಾರೆ. ನಮ್ಮ ಪಕ್ಷದಲ್ಲಿ ಬಿ ಫಾರಂ ಪಡೆದು, ಕಾರ್ಯಕರ್ತರ ಶ್ರಮದೊಂದಿಗೆ ಅಧಿಕಾರ ಅನುಭವಿಸಿ ಈಗ ಬೇರೆ ಪಕ್ಷಕ್ಕೆ ಹೋಗಿದ್ದಾರೆ ಎಂದು ಅವರು ವ್ಯಂಗ್ಯವಾಡಿದ್ದಾರೆ.
























