ಅನಾರೋಗ್ಯದ ಹಿನ್ನೆಲೆಯಲ್ಲಿ ಹುದ್ದೆ ತೊರೆದ ಜಗದೀಪ್ ಧನ್ಖರ್
ನವದೆಹಲಿ : ದಿಢೀರ್ ಬೆಳವಣಿಗೆಯೊಂದರಲ್ಲಿ ಮುಂಗಾರು ಅಧಿವೇಶನದ ಮೊದಲ ದಿನವೇ ಉಪರಾಷ್ಟ್ರಪತಿ ಜಗದೀಪ್ ಧನ್ಖರ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿ ಅಚ್ಚರಿ ಹುಟ್ಟಿಸಿದ್ದಾರೆ.
ಜಗದೀಪ್ ಧನ್ಖರ್ 2022ರ ಆಗಸ್ಟ್ನಲ್ಲಿ ಭಾರತದ ಉಪರಾಷ್ಟ್ರಪತಿಯಾಗಿ ಅಧಿಕಾರ ವಹಿಸಿಕೊಂಡಿದ್ದರು.
ಕೆಲ ದಿನಗಳ ಹಿಂದೆ ಉತ್ತರಖಂಡದ ನೈನಿತಾಲ್ನ ಕುಮಾವೂನ್ ವಿಶ್ವವಿದ್ಯಾಲಯದ ಸುವರ್ಣ ಮಹೋತ್ಸವದಲ್ಲಿ ಭಾಗವಹಿಸಿದ್ದ ವೇಳೆ ಉಪರಾಷ್ಟ್ರಪತಿ ಜಗದೀಪ್ ಧನ್ಖರ್ ಮೂರ್ಛೆ ಹೋಗಿದ್ದರು. ನಿನ್ನೆ ಬೆಳಗ್ಗೆ ಕೂಡ ತಮ್ಮ ಕಚೇರಿಯಲ್ಲಿ ಕುಸಿದು ಬಿದ್ದಿದ್ದರು ಎನ್ನಲಾಗಿದೆ.
ಹೃದಯ ಸಂಬಂಧಿ ಕಾಯಿಲೆಗಳ ಚಿಕಿತ್ಸೆಗಾಗಿ ಅವರನ್ನು ಕಳೆದ ಮಾರ್ಚ್ನಲ್ಲಿ 4 ದಿನಗಳ ಕಾಲ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆರೋಗ್ಯ ಸಮಸ್ಯೆ ಮತ್ತು ವೈದ್ಯಕೀಯ ಸಲಹೆಯನ್ನು ಪಾಲಿಸುವ ಅಗತ್ಯದ ಹಿನ್ನೆಲೆಯಲ್ಲಿ ತಾನು ಹುದ್ದೆ ತೊರೆಯುತ್ತಿರುವುದಾಗಿ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಕಳುಹಿಸಿದ ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.
ಜಗದೀಪ್ ಧನ್ಖರ್ ಉಪರಾಷ್ಟ್ರಪತಿ ಹುದ್ದೆಗೆ ತಕ್ಷಣದಿಂದ ಜಾರಿಗೆ ಬರುವಂತೆ ರಾಜೀನಾಮೆ ನೀಡಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಬರೆದ ಪತ್ರದಲ್ಲಿ ತಮ್ಮ ರಾಜೀನಾಮೆ ಭಾರತದ ಸಂವಿಧಾನದ 67(ಎ) ವಿಧಿಗೆ ಅನುಗುಣವಾಗಿದೆ ಎಂದು ಹೇಳಿದ್ದಾರೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಬರೆದ ಪತ್ರದಲ್ಲಿ ತಮ್ಮ ಕೃತಜ್ಞತೆಯನ್ನು ವ್ಯಕ್ತಪಡಿಸಿದ ಜಗದೀಪ್ ಧನ್ಖರ್, ರಾಷ್ಟ್ರಪತಿಗಳ ಬೆಂಬಲ ಮತ್ತು ತಮ್ಮ ಅಧಿಕಾರಾವಧಿಯಲ್ಲಿ ಅವರು ಹಂಚಿಕೊಂಡ ಸೌಹಾರ್ದಯುತ ಕಾರ್ಯ ಸಂಬಂಧಕ್ಕಾಗಿ ಧನ್ಯವಾದಗಳನ್ನು ತಿಳಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಸಚಿವ ಸಂಪುಟಕ್ಕೆ ಅವರು ತಮ್ಮ ಕೃತಜ್ಞತೆಯನ್ನು ವ್ಯಕ್ತಪಡಿಸಿದ್ದಾರೆ. ಪ್ರಧಾನಿಯವರ ಸಹಕಾರ ಮತ್ತು ಬೆಂಬಲ ಅಮೂಲ್ಯವಾದುದು. ನನ್ನ ಅಧಿಕಾರದ ಅವಧಿಯಲ್ಲಿ ಬಹಳಷ್ಟು ಕಲಿತಿದ್ದೇನೆ ಎಂದು ಹೇಳಿಕೊಂಡಿದ್ದಾರೆ.
ಎಲ್ಲ ಸಂಸದರಿಂದ ನಾನು ಪಡೆದ ಗೌರವ, ವಿಶ್ವಾಸವನ್ನು ಸದಾ ನೆನಪಿಸಿಕೊಳ್ಳುತ್ತೇನೆ. ನಮ್ಮ ಪ್ರಜಾಪ್ರಭುತ್ವದಲ್ಲಿ ಉಪರಾಷ್ಟ್ರಪತಿಯಾಗಿ ನಾನು ಪಡೆದ ಅನುಭವಗಳು ಮತ್ತು ಒಳನೋಟಗಳಿಗೆ ನಾನು ತುಂಬಾ ಕೃತಜ್ಞನಾಗಿದ್ದೇನೆ ಎಂದು ಅವರು ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ. ರಾಷ್ಟ್ರದ ಇತಿಹಾಸದಲ್ಲಿ ಮಹತ್ವದ ಅವಧಿಯಲ್ಲಿ ಭಾರತದ ಗಮನಾರ್ಹ ಆರ್ಥಿಕ ಪ್ರಗತಿ ಮತ್ತು ಅಭೂತಪೂರ್ವ ಅಭಿವೃದ್ಧಿಗೆ ಸಾಕ್ಷಿಯಾಗುವ ಮತ್ತು ಕೊಡುಗೆ ನೀಡಿದ ತೃಪ್ತಿಯನ್ನು ಅವರು ಉಲ್ಲೇಖಿಸಿದ್ದಾರೆ.
ಖಾಲಿಯಾದ ಉಪರಾಷ್ಟ್ರಪತಿ ಹುದ್ದೆಯನ್ನು ಭರ್ತಿ ಮಾಡಲು 60 ದಿನಗಳ ಒಳಗೆ ಔಪಚಾರಿಕ ಚುನಾವಣೆಯನ್ನು ನಡೆಸಬೇಕು. ಸಂಸತ್ತಿನ ಎರಡೂ ಸದನಗಳ ಎಲ್ಲ ಸದಸ್ಯರು ಮತದಾರರಾಗಿರುತ್ತಾರೆ. ಸಂವಿಧಾನದ ಪ್ರಕಾರ, ಉಪರಾಷ್ಟ್ರಪತಿಗಳ ಹುದ್ದೆ ಖಾಲಿಯಾದರೆ ರಾಜ್ಯಸಭೆಯ ಉಪಸಭಾಪತಿಗಳು ಮೇಲ್ಮನೆಯ ಹಂಗಾಮಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳುತ್ತಾರೆ. ಪ್ರಸ್ತುತ ಆ ಸ್ಥಾನವನ್ನು ಹರಿವಂಶ್ ನಾರಾಯಣ್ ಸಿಂಗ್ ಹೊಂದಿದ್ದಾರೆ. ಅವರು ತಾತ್ಕಾಲಿಕವಾಗಿ ಮೇಲ್ಮನೆಯ ಅಧ್ಯಕ್ಷರಾಗಿ ಅಧಿಕಾರ ನಿರ್ವಹಿಸುತ್ತಾರೆ.
























