ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದವ ಸಿಸಿಬಿ ಪೊಲೀಸರ ಬಲೆಗೆ
ಮಂಗಳೂರು : 24 ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಮಂಜನಾಡಿ ಕಲ್ಕಟ್ಟ ಬದ್ರಿಯ ನಗರದ ಮೊಹಮ್ಮದ್ ಅಬ್ದುಲ್ ಫಯಾನ್(27) ಸೆರೆಯಾದ ಆರೋಪಿ. ಮಂಗಳೂರು ನಗರ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾದ ವಿವಿಧ ಕಳವು, ಕೊಲೆಯತ್ನ, ಕಾರಾಗೃಹದಲ್ಲಿ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿ ಹಲ್ಲೆ ನಡೆಸಿದ ಪ್ರಕರಣಗಳು ಸೇರಿದಂತೆ 24 ಪ್ರಕರಣಗಳಲ್ಲಿ ಭಾಗಿಯಾಗಿರುವ ಈತ ನ್ಯಾಯಾಲಯದಿಂದ ಜಾಮೀನಿನಲ್ಲಿ ಬಿಡುಗಡೆಗೊಂಡ ಬಳಿಕ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ.
ಮಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯ ಕೊಣಾಜೆ, ಉಳ್ಳಾಲ ಪೊಲೀಸ್ ಠಾಣೆ, ಬಂಟ್ವಾಳ ನಗರ, ಬಂಟ್ವಾಳ ಗ್ರಾಮಾಂತರ, ಉಪ್ಪಿನಂಗಡಿ, ಕಡಬ, ಪುತ್ತೂರು ನಗರ ಪೊಲೀಸ್ ಠಾಣೆಗಳಲ್ಲಿನ ಈತನ ವಿರುದ್ಧ ಸರಕಾರಿ ಕಚೇರಿ, ಶಾಲೆ ಹಾಗೂ ಅಂಗಡಿಗಳಲ್ಲಿ ಕಳ್ಳತನ ನಡೆಸಿದ ಪ್ರಕರಣಗಳಿವೆ. ನ್ಯಾಯಾಂಗ ಬಂಧನದಲ್ಲಿದ್ದ ಸಮಯ ಕಾರಾಗೃಹದೊಳಗೆ ಇತರ ಕೈದಿಗಳಿಗೆ ಹಲ್ಲೆ ನಡೆಸಿರುವುದಲ್ಲದೆ ಜೈಲು ಸಿಬ್ಬಂದಿಯ ಕರ್ತವ್ಯಕ್ಕೆ ಅಡ್ಡಿಪಡಿಸಿ ಕೊಲೆಗೆ ಯತ್ನ ನಡೆಸಿದ ಪ್ರಕರಣ ಸೇರಿದಂತೆ ಒಟ್ಟು 24 ಪ್ರಕರಣಗಳಲ್ಲಿ ಭಾಗಿಯಾಗಿದ್ದ. ಈತನ ವಿರುದ್ಧ ವಿವಿಧ ಪೊಲೀಸ್ ಠಾಣೆಗಳ ಪ್ರಕರಣಗಳಲ್ಲಿ ನ್ಯಾಯಾಲಯದ ಒಟ್ಟು 24 ವಾರಂಟ್ ಹೊರಡಿಸಲಾಗಿತ್ತು.
























