ಲಕ್ನೋ: ಉತ್ತರ ಪ್ರದೇಶ ಮತ್ತು ಉತ್ತರಾಖಂಡ ಸರ್ಕಾರಗಳು ಕನ್ವರ್ ಯಾತ್ರಿಗಳ ಅನುಕೂಲಕ್ಕಾಗಿ ಮಾರ್ಗದಲ್ಲಿರುವ ಹೊಟೇಲ್‌ಗಳಿಗೆ ಕ್ಯೂಆರ್ ಕೋಡ್ ಕಡ್ಡಾಯ ಎಂದು ಆದೇಶ ಹೊರಡಿಸಿದ್ದು, ಇದಕ್ಕೆ ತಡೆಯಾಜ್ಞೆ ಹೊರಡಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದ್ದು, ಈ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ಈ ತೀರ್ಪನ್ನು ನೀಡಿರುವುದಾಗಿದೆ.
ಈ ಅರ್ಜಿದಾರರ ಪರ ವಕೀಲರು, ಸರ್ಕಾರದ ಈ ಆದೇಶ ವ್ಯಾಪಾರಿಗಳಲ್ಲಿ ಒತ್ತಡ ಉಂಟು ಮಾಡುತ್ತಿದೆ. ಗೌಪ್ಯತೆಯ ಉಲ್ಲಂಘನೆಗೂ ಕಾರಣವಾಗುತ್ತದೆ ಎಂದು ವಾದ ಮಂಡಿಸಿದ್ದರು. ಆದರೆ ಸರ್ಕಾರದ ಪರ ವಾದ ಮಂಡಿಸಿದ ವಕೀಲರು ಕನ್ವರ್ ಯಾತ್ರಾರ್ಥಿಗಳಿಗೆ ಆಹಾರ ಸುರಕ್ಷತೆ ಒದಗಿಸುವ ದೃಷ್ಟಿಯಿಂದ ಈ ವ್ಯವಸ್ಥೆ ಜಾರಿಗೆ ತರಲಾಗಿದೆ ಎಂದು ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಟ್ಟರು.
ಆದರೆ ಈ ವಿಷಯದ ಬಗ್ಗೆ ವಿಚಾರಣೆಗೆ ಸಮ್ಮತಿ ಸೂಚಿಸಿರುವ ಕೋರ್ಟ್, ಮುಂದಿನ ವಿಚಾರಣೆಯನ್ನು ಶೀಘ್ರದಲ್ಲೇ ನಡೆಸಲಾಗುವುದು ಎಂದು ಹೇಳಿದೆ.
























