ಚುನಾವಣೆ ಅಕ್ರಮದ ವಿರುದ್ಧ ಪ್ರತಿಭಟನೆ
ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಗಸ್ಟ್ 4ರಂದು ಬೆಂಗಳೂರಿನ ಮಹದೇವಪುರ ವಿಧಾನಸಭಾ ಕ್ಷೇತ್ರದಿಂದ ಮುಖ್ಯ ಚುನಾವಣಾಧಿಕಾರಿ ಕಚೇರಿಯವರೆಗೆ ಪಾದಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿದು ಬಂದಿದೆ. ರಾಹುಲ್ ಗಾಂಧಿಯವರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿ ಕೈ ನಾಯಕರು ಸಾಥ್ ನೀಡಲಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರಿನ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಅಕ್ರಮ ನಡೆದಿದೆ. ಮಹದೇವಪುರ ವಿಧಾನಸಭೆ ಕ್ಷೇತ್ರದಲ್ಲಿ ಕೆಲ ಹೆಸರುಗಳನ್ನು ತೆಗೆದುಹಾಕಲಾಗಿದೆ ಎಂಬ ಆರೋಪ ಕೇಳಿ ಬಂದಿತ್ತು. ಈ ಬಗ್ಗೆ ದಾಖಲೆ ಇದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಮಹದೇವಪುರದಿಂದ ಚುನಾವಣಾ ಆಯೋಗದ ಕಚೇರಿವರೆಗೂ ಪಾದಯಾತ್ರೆ ನಡೆಯಲಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೇರಿದಂತೆ ಘಟಾನುಘಟಿ ನಾಯಕರು ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ಮತ್ತು ಪಾದಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ.
ರಾಹುಲ್ ಗಾಂಧಿ ರಾಜ್ಯಕ್ಕೆ ಬರುವ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಡಿ.ಕೆ ಶಿವಕುಮಾರ್ 4ನೇ ತಾರೀಕಿಗೆ ಬರ್ತಾರೆ ಅನ್ನೋದಿದೆ. ಅಧಿಕಾರಿಗಳ ಬಳಿ ಮಾತಾಡಬೇಕು. ಸಿಎಂ ಬಳಿ ಮಾತಾಡ್ತೇನೆ ಎಂದರು.
























