ಪತ್ರಕರ್ತ ವಸಂತ ಗಿಳಿಯಾರ್ ವಿರುದ್ಧ ಎಫ್‌ಐಆರ್
ಬೆಳ್ತಂಗಡಿ: ಧರ್ಮಸ್ಥಳದ ಪಾಂಗಳ ಕ್ರಾಸ್ ಬಳಿ ಎರಡು ಗುಂಪುಗಳ ನಡುವೆ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಪೊಲೀಸರು 6 ಜನರನ್ನು ಶನಿವಾರ ಬಂಧಿಸಿದ್ದಾರೆ. ನ್ಯಾಯಾಲಯ ಎಲ್ಲರನ್ನು ಷರತ್ತುಬದ್ಧ ಜಾಮೀನಿನಲ್ಲಿ ಬಿಡುಗಡೆಗೊಳಿಸಿದೆ.
ಪದ್ಮಪ್ರಸಾದ್, ಸುಹಾಸ್, ಗುರುಪ್ರಸಾದ್, ಶಶಿಕುಮಾರ್, ಕಲಂದರ್, ಚೇತನ್ ಬಂಧಿತ ಆರೋಪಿಗಳು. ಯೂಟ್ಯೂಬರ್‌ಗಳ ಮೇಲೆ ಹಲ್ಲೆ ನಡೆದ ಬಳಿಕ ನಡೆದ ಗುಂಪು ಘರ್ಷಣೆ ನಡೆದಿತ್ತು. ಈ ಸಂದರ್ಭದಲ್ಲಿ ನಿಯಂತ್ರಣ ಮಾಡಲು ಪೊಲೀಸರು ಲಾಠಿಚಾರ್ಜ್ ಮಾಡಿದ್ದರು. ಪೊಲೀಸ್ ಅಧಿಕಾರಿಯಿಂದ ದೂರು ದಾಖಲಾದ ಹಿನ್ನೆಲೆಯಲ್ಲಿ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿ ಆರೋಪಿಗಳನ್ನು ಹುಡುಕುತ್ತಿದ್ದರು.
ಈ ನಡುವೆ ಸೋಷಿಯಲ್ ಮೀಡಿಯಾಗಳಲ್ಲಿ ಕೋಮು ಭಾವನೆ ಕೆರಳಿಸುವ ಪೋಸ್ಟ್ ಹಾಕಿರುವ ಆರೋಪದ ಮೇಲೆ ಪತ್ರಕರ್ತ ವಸಂತ ಗಿಳಿಯಾರ್ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.
ಧರ್ಮಗಳ ನಡುವೆ ವೈಮನಸ್ಸು ಉಂಟು ಮಾಡುವ ಸಂದೇಶವನ್ನು ಫೇಸ್‌ಬುಕ್‌ನಲ್ಲಿ ವಸಂತ ಗಿಳಿಯಾರ್ ಹಾಕಿದ್ದರು. ಈ ಆರೋಪದಲ್ಲಿ ವಸಂತ ಗಿಳಿಯಾರ್ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಈ ಬಗ್ಗೆ ಬೆಳ್ತಂಗಡಿ ತಾಲೂಕಿನ ಸಾಮಾಜಿಕ ಹೋರಾಟಗಾರರಾದ ಶೇಖರ ಲಾಯಿಲ ಎಂಬವರು ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದ್ದು ವಸಂತ ಗಿಳಿಯಾರ್ ಎಂಬಾತ ಫೇಸ್‌ಬುಕ್‌ನಲ್ಲಿ ಹಾಕಿರುವ ಸಂದೇಶದಿಂದ ಧರ್ಮಗಳ ನಡುವೆ ಹಾಗೂ ಸಮುದಾಯಗಳ ನಡುವೆ ವೈಮನಸ್ಸು ಮೂಡುವಂತಿದ್ದು ಇದರಿಂದ ಸಾಮಾಜಿಕ ಸ್ವಾಸ್ಥ್ಯ ಕೆಡುವ ಸಾಧ್ಯತೆಗಳಿವೆ ಎಂಬುದಾಗಿ ದೂರು ನೀಡಿದ್ದರು. ಅದರಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ 196(1)(2), 353(2) ಬಿಎನ್‌ಎಸ್ ಕಾಯಿದೆಯ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
























