ಮೂರನೇ ದಿನವೂ ಮುಂದುವರಿದ ಹಿಂಸಾಚಾರ; ದೇಶ ಸೇನೆಯ ನಿಯಂತ್ರಣಕ್ಕೆ
ಕಠ್ಮಂಡು: ನೇಪಾಳದಲ್ಲಿ ಸರ್ಕಾರದ ವಿರುದ್ಧ ನಡೆಯುತ್ತಿರುವ ದಂಗೆಯ ಪರಿಣಾಮವಾಗಿ ಕಳೆದ ಮೂರು ದಿನಗಳಿಂದ ನಡೆಯುತ್ತಿರುವ ಹಿಂಸಾಚಾರ ಇನ್ನೂ ನಿಯಂತ್ರಣಕ್ಕೆ ಬಾರದಿರುವ ಹಿನ್ನೆಲೆಯಲ್ಲಿ ಅಲ್ಲಿರುವ ಭಾರತೀಯರ ಸುರಕ್ಷತೆಯ ಬಗ್ಗೆ ಕಳವಳ ವ್ಯಕ್ತವಾಗಿದೆ. ಕರ್ನಾಟಕದ 39 ಮಂದಿಯ ಸಹಿತ ನೂರಾರು ಭಾರತೀಯರು ನೇಪಾಳದಲ್ಲಿ ಸಿಕ್ಕಿ ಬಿದ್ದಿದ್ದಾರೆ. ನೇಪಾಳದ ಜೊತೆಗಿನ ಎಲ್ಲ ಭೂಗಡಿಗಳನ್ನು ಮುಚ್ಚಿ ಬಿಗು ಭದ್ರತೆ ಏರ್ಪಡಿಸಲಾಗಿದೆ. ನೇಪಾಳದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವೂ ಮುಚ್ಚಿರುವುದರಿಂದ ಅಲ್ಲಿ ಸಿಲುಕಿದವರನ್ನು ರಕ್ಷಿಸುವುದು ಸವಾಲಿನ ಕೆಲಸವಾಗಿದೆ. ಕರ್ನಾಟಕದ 39 ಮಂದಿಯನ್ನು ಸುರಕ್ಷಿತವಾಗಿ ಕರೆತರಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಪರಿಣಾಮವಾಗಿ ಕಠ್ಮಂಡು ವಿಮಾನ ನಿಲ್ದಾಣದಲ್ಲಿ ಸಿಲುಕಿರುವ 39 ಮಂದಿ ಕನ್ನಡಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರಿಗೆ ಸೂಚನೆ ನೀಡಿದ್ದಾರೆ. ಮುಖ್ಯ ಕಾರ್ಯದರ್ಶಿ ಅವರು ಸಂಬಂಧಪಟ್ಟ ಅಧಿಕಾರಿಗಳ ಜೊತೆ ಚರ್ಚಿಸಿ ಅಗತ್ಯ ಕ್ರಮ ವಹಿಸಿದ್ದಾರೆ. ಸದ್ಯ ಕನ್ನಡಿಗರು ನೇಪಾಳದಲ್ಲಿ ಸಿಲುಕಿರುವ ಸುರಕ್ಷಿತವಾಗಿದ್ದಾರೆ.
ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಹಾಗೂ ದೆಹಲಿಯ ಕರ್ನಾಟಕ ಭವನದ ನಿವಾಸಿ ಆಯುಕ್ತರು ವಿವಿಧ ತಂಡಗಳಲ್ಲಿ ಇರುವ ಕನ್ನಡಿಗರ ಸಂಪರ್ಕದಲ್ಲಿದ್ದಾರೆ. ರಾಜ್ಯ ಸರ್ಕಾರದ ಅಧಿಕಾರಿಗಳು ವಿದೇಶಾಂಗ ಇಲಾಖೆಯ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದ್ದು ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ಕನ್ನಡಿಗರನ್ನ ಸುರಕ್ಷಿತವಾಗಿ ಕರೆತರಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಿಎಂ ಕಚೇರಿ ಮಾಧ್ಯಮ ಪ್ರಕಟಣೆ ತಿಳಿಸಿದೆ.
ಕರ್ಫ್ಯೂ ಜಾರಿ
ನೇಪಾಳದಲ್ಲಿ ಪರಿಸ್ಥಿತಿ ಕೈಮೀರುತ್ತಿದ್ದಂತೆ ಸೇನೆ ಕಾರ್ಯಾಚರಣೆಗೆ ಇಳಿದಿದೆ. ಕಠ್ಮಂಡು ನಗರವನ್ನ ನೇಪಾಳಿ ಸೇನೆ ಸುತ್ತುವರಿದಿದ್ದು, ರಾಜಧಾನಿಯಾದ್ಯಂತ ಕರ್ಫ್ಯೂ ಜಾರಿಗೊಳಿಸಿದೆ. ನಾಳೆ ಬೆಳಗ್ಗೆ 6 ಗಂಟೆವರೆಗೆ ಜನರು ರಸ್ತೆಗಿಳಿಯದಂತೆ ಸೂಚನೆ ನೀಡಿದೆ. ಜೊತೆಗೆ ಪ್ರವಾಸಿಗರು ಉಳಿದುಕೊಂಡಿರುವ ಹೊಟೇಲ್, ಲಾಡ್ಜ್ ಆವರಣದ ಗೇಟ್‌ಗಳನ್ನ ಕೂಡಲೇ ಬಂದ್ ಮಾಡುವಂತೆ ಸೂಚನೆ ನೀಡಿದೆ. ಇದರೊಂದಿಗೆ ಹಿಂದೂ ದೇವಾಲಯದ ಬಳಿಯೂ ಬಿಗಿ ಭದ್ರತೆ ನೀಡಲಾಗಿದೆ.
ಆನೇಕಲ್ ಸೇರಿದಂತೆ ಬೇರೆ ಬೇರೆ ಏರಿಯಾಗಳಿಂದ ಹೊರಟ್ಟಿದ್ದ 27 ಜನರ ಕನ್ನಡಿಗರ ತಂಡವೂ ನೇಪಾಳದಲ್ಲಿ ಸಂಕಷ್ಟಕ್ಕೆ ಸಿಲುಕಿದೆ. ಟ್ರಾವೆಲ್ಸ್ ಮೂಲಕ ಪ್ರವಾಸ ಹೊರಟಿದ್ದ ತಂಡ ಶನಿವಾರ ವಾಪಸ್ ಬರುವ ನಿರೀಕ್ಷೆಯಲ್ಲಿದೆ, ಫ್ಲೈಟ್ ಕೂಡ ಬುಕಿಂಗ್ ಮಾಡಲಾಗಿದೆ. ಆದರೆ ಸೇನೆಯಿಂದ ಕರ್ಫ್ಯೂ ಜಾರಿಯಾದ ಹಿನ್ನೆಲೆ ಪರಿಸ್ಥಿತಿ ನಿಯಂತ್ರಣಕ್ಕೆ ಬರೋವರೆಗೆ ಅಲ್ಲಿಂದ ಹೊರಡುವುದು ಕಷ್ಟಸಾಧ್ಯವಾಗುತ್ತದೆ ಎಂದು ಕನ್ನಡಿಗರು ಗೋಳಿಟ್ಟಿದ್ದಾರೆ.
























