ಉನ್ನತ ಆಯ್ಕೆ ಸಮಿತಿ ಆರಿಸಿದವರಿಗಷ್ಟೇ ಪ್ರಶಸ್ತಿ
ಬೆಂಗಳೂರು: ಈ ವರ್ಷದಿಂದಲೇ ಜಾರಿಗೆ ಬರುವಂತೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯ ನಿಯಮ ಬದಲಾಗಲಿದೆ. ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಹಾಕುವ ಪ್ರಕ್ರಿಯೆಯನ್ನೇ ರಾಜ್ಯ ಸರ್ಕಾರ ಕೈಬಿಟ್ಟಿದೆ. ವರ್ಷದಿಂದ ವರ್ಷಕ್ಕೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಸಲ್ಲಿಸುವವರ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಾಗಿ ಸರ್ಕಾರ ಈ ಮಹತ್ವದ ನಿರ್ಧಾರ ಕೈಗೊಂಡಿದೆ.
ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಹೊಸ ನಿಯಮ ಜಾರಿಗೊಳಿಸಲಾಗುತ್ತಿದ್ದು, ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸುವ ಪ್ರಕ್ರಿಯೆ ಕೈಬಿಟ್ಟಿದೆ. ಈ ಬಗ್ಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಮಾಹಿತಿ ನೀಡಿದ್ದಾರೆ. ರಾಜ್ಯೋತ್ಸವ ಪ್ರಶಸ್ತಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಸಲಹಾ ಸಮಿತಿ ಹಾಗೂ ಉನ್ನತ ಆಯ್ಕೆ ಸಮಿತಿ ರಚಿಸಿ ಸಾಧಕರನ್ನು ಗುರುತಿಸಿ ಪ್ರಶಸ್ತಿ ನೀಡಲು ಸರ್ಕಾರ ನಿರ್ಧರಿಸಿದೆ. ಸಮಿತಿಯಿಂದ ಆಯ್ಕೆಯಾದ ಸಾಧಕರಿಗೆ ಮಾತ್ರ ಪ್ರಶಸ್ತಿ ನೀಡಲು ಸರ್ಕಾರ ನಿರ್ಧರಿಸಿದೆ.
ಈ ಬಾರಿ 70 ಜನ ಅರ್ಹರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಲು ಸರ್ಕಾರದ ನಿರ್ಧಾರ ಮಾಡಿದೆ. ಈಗಾಗಲೇ ಇಲಾಖೆಗೆ ಸಲ್ಲಿಕೆಯಾಗಿರುವ ಸ್ವಯಂ ಅರ್ಜಿಗಳನ್ನು ಸಹ ಪ್ರಶಸ್ತಿ ಸಲಹಾ ಸಮಿತಿ ಮುಂದೆ ಮಂಡಿಸಲು ನಿರ್ಧರಿಸಲಾಗಿದೆ. ಕಳೆದ ವರ್ಷ 69 ಪ್ರಶಸ್ತಿಗಳಿಗೆ 2,000ಕ್ಕೂ ಹೆಚ್ಚು ಅರ್ಜಿಗಳು ಸಲ್ಲಿಕೆಯಾಗಿದ್ದವು. ಇದರಲ್ಲಿ ಆನ್ಲೈನ್ ಸೇವಾಸಿಂಧು ಪೋರ್ಟಲ್ ಮೂಲಕವೇ ಬರೋಬ್ಬರಿ 1,135ಕ್ಕೂ ಹೆಚ್ಚು ಹಾಗೂ ಭೌತಿಕವಾಗಿ 85ಕ್ಕೂ ಹೆಚ್ಚು ಅರ್ಜಿಗಳುಬಂದಿದ್ದವು.
2022ರಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರದಲ್ಲಿದ್ದಾಗ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾಗಿದ್ದ ಸುನಿಲ್ ಕುಮಾರ್ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿಗಳನ್ನು ಪಡೆಯದೆ ಆಯ್ಕೆ ಸಮಿತಿಯನ್ನು ರಚಿಸಿ ಸಾಧಕರನ್ನು ಗುರುತಿಸಿ ಪ್ರಶಸ್ತಿ ನೀಡಲಾಗುವುದು ಎಂದು ಘೋಷಿಸಿದ್ದರು. ಆದರೆ 2023ರಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಈ ಪ್ರಕ್ರಿಯೆಗೆ ಬ್ರೇಕ್ ಬಿದ್ದಿತ್ತು.
























