ಮನೆಯಲ್ಲಿ ಅಕ್ರಮವಾಗಿ ಶಸ್ತ್ರಾಸ್ತ್ರ ಇಟ್ಟುಕೊಂಡ ಪ್ರಕಣ
ಧರ್ಮಸ್ಥಳ : ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಗುರುವಾರ ನಗರದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ವಜಾಗೊಳಿಸಿದೆ. ತನ್ನ ವಿರುದ್ಧ ದಾಖಲಾಗಿರುವ ಅಕ್ರಮ ಶಸ್ತ್ರಾಸ್ತ್ರ ಹೊಂದಿದ್ದ ಪ್ರಕರಣಕ್ಕೆ ಸಂಬಂಧಿಸಿ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಕೋರಿದ್ದರು.
ತಿಮರೋಡಿ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಧೀಶ ಬಸವರಾಜ್ ಅವರು ಅರ್ಜಿಯ ವಜಾಗೊಳಿಸಿ ಆದೇಶ ನೀಡಿದ್ದಾರೆ. ಹೀಗಾಗಿ ತಿಮರೋಡಿಗೆ ಮತ್ತೆ ಬಂಧನ ಭೀತಿ ಎದುರಾಗಿದೆ. ಜಿಲ್ಲಾ ನ್ಯಾಯಾಲಯದಲ್ಲಿ ಅರ್ಜಿ ವಜಾಗೊಂಡಿರುವ ಹಿನ್ನೆಲೆಯಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್‌ನ ಮೊರೆ ಹೋಗುವ ಅವಕಾಶ ಇದೆ.
ಎಸ್‌ಐಟಿ ಅಧಿಕಾರಿಗಳು ತಿಮರೋಡಿ ಮನೆ ಮೇಲೆ ದಾಳಿ ಮಾಡಿದ ವೇಳೆ ಒಂದು ಬಂದೂಕು ಮತ್ತು ಎರಡು ತಲವಾರುಗಳು ಪತ್ತೆಯಾಗಿದ್ದವು. ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಶಸ್ತ್ರಾಸ್ತ್ರ ಕಾಯಿದೆಯಡಿ ಪ್ರಕರಣ ದಾಖಲಾಗಿದೆ.
ತನಿಖಾ ವರದಿ ಸಲ್ಲಿಸಲು ನೋಟಿಸ್ ಜಾರಿ
ಇನ್ನೊಂದು ಪ್ರಮುಖ ಬೆಳವಣಿಗೆಯಲ್ಲಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ ಆರೋಪಕ್ಕೆ ಸಂಬಂಧಿಸಿದಂತೆ ರಿಟ್ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಎಸ್‌ಐಟಿ, ಇ.ಡಿ., ಪೊಲೀಸ್ ಅಧಿಕಾರಿಗಳು ಸೇರಿದಂತೆ 7 ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿದೆ.
ಷಡ್ಯಂತ್ರದ ಬಗ್ಗೆ ತೇಜಸ್ ಗೌಡ ಮತ್ತು ಇತರರು ವಿಶೇಷ ತನಿಖಾ ದಳಕ್ಕೆ ದೂರು ನೀಡಿದ್ದರು. ಈ ದೂರಿಗೆ ಸಂಬಂಧಿಸಿದಂತೆ ಈ ಅರ್ಜಿದಾರರು ಕರ್ನಾಟಕ ಹೈಕೋರ್ಟ್‌ನಲ್ಲಿ ರಿಟ್ ಅರ್ಜಿಯನ್ನು ಸಲ್ಲಿಸಿದ್ದು, ಅ.9ರಂದು ವಿಚಾರಣೆಗೆ ಬಂದಿತ್ತು. ಅರ್ಜಿಯನ್ನು ಪರಿಗಣಿಸಿದ ನ್ಯಾಯಾಲಯವು SIT, ED, INCOME TAX, DG&IGP, SP ಕರ್ನಾಟಕ ಸರ್ಕಾರ, ಬೆಂಗಳೂರು ಕಮಿಷನರ್ ಸೇರಿದಂತೆ ಒಟ್ಟು ಏಳು ಪ್ರತಿವಾದಿಗಳಿಗೆ ಈ ದೂರಿಗೆ ಸಂಬಂಧಿಸಿದಂತೆ ನಡೆದಿರುವ ತನಿಖಾ ವರದಿಯನ್ನು ಸಲ್ಲಿಸುವಂತೆ ನೋಟೀಸ್ ಜಾರಿ ಮಾಡಿದೆ.
























