ಚಾಮರಾಜನಗರ: ಮೈಸೂರು – ಗುಂಡ್ಲುಪೇಟೆ ರಾಷ್ಟ್ರೀಯ ಹೆದ್ದಾರಿ -766 ರ ಬಳಿ ಇಂದು ಮುಂಜಾನೆ ಟಿಪ್ಪರ್ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಕಾರಿನಲ್ಲಿದ್ದ ಕೇರಳ ಮೂಲದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮಗುವೂ ಸೇರು ಮೂವರು ಗಾಯಗೊಂಡ ಘಟನೆ ನಡೆದಿದೆ.
ಮೃತರನ್ನು ಬಷೀರ್, ನಸೀಮಾ ಬಷೀರ್ ಎಂದು ಗುರುತಿಸಲಾಗಿದೆ. ಮಹಮ್ಮದ್ ಷಪಿ, ಜಸೀರಾ ಮತ್ತು ಮೂರು ವರ್ಷದ ಮಗು ಅಜೈಮ್ ಅನಾನ್‌ಗೆ ತೀವ್ರ ಸ್ವರೂಪದ ಗಾಯಗಳಾಗಿವೆ. ಗಾಯಾಳುಗಳನ್ನು ಮೈಸೂರಿನ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿದು ಬಂದಿದೆ.
ಟಿಪ್ಪರ್ ಗುಂಡ್ಲುಪೇಟೆಯಿಂದ ಕಲ್ಲು ತುಂಬಿಕೊಂಡು ಹೋಗುತ್ತಿತ್ತು. ಕಾರು ಮೈಸೂರಿನಿಂದ ಬರುತ್ತಿತ್ತು. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಬೇಗೂರು ಪೊಲೀಸರು ಸ್ಥಳಕ್ಕೆ ಆಗಮಿಸಿ ನಜ್ಜುಗುಜ್ಜಾಗಿದ್ದ ಕಾರಿನಲ್ಲಿ ಸಿಲುಕಿದ್ದವರನ್ನು ಹೊರತೆಗೆದು ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಿರುವುದಾಗಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳಿಸಿದ್ದಾರೆ.
























