ನನ್ನಿಂದ ಏನೂ ಆಗುತ್ತಿಲ್ಲ, ಹೇಳಲು ಏನೂ ಇಲ್ಲ ಎಂದು ಬೇಸರ ವ್ಯಕ್ತಪಡಿಸಿದ ಕಾಂಗ್ರೆಸ್ ಅಧ್ಯಕ್ಷ
ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಕುರ್ಚಿ ಕಿತ್ತಾಟ ಮತ್ತೊಮ್ಮೆ ದೆಹಲಿಗೆ ಮುಖಮಾಡಿದೆ. ಜಗಳ ಬಗೆಹರಿಸಲು ಬೆಂಗಳೂರಲ್ಲೇ ಠಿಕಾಣಿ ಹೂಡಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಂದ ಯಾವುದೇ ಪರಿಹಾರ ಕಂಡುಕೊಳ್ಳಲು ಸಾಧ್ಯವಾಗಿಲ್ಲ. ಹೀಗಾಗಿ ಅವರು ಕೂಡ ಹೈಕಮಾಂಡ್‌ನತ್ತ ಕೈ ತೋರಿಸಿದ್ದಾರೆ. ಹೈಕಮಾಂಡ್ ಎಂದರೆ ಸೋನಿಯಾ, ರಾಹುಲ್ ಮತ್ತು ಪ್ರಿಯಾಂಕ ಗಾಂಧಿ. ಹೀಗಾಗಿ ಅಂತಿಮ ನಿರ್ಧಾರ ದೆಹಲಿಯಲ್ಲಿ ಆಗುವ ಸಾಧ್ಯತೆ ಇದೆ.
ಸರ್ಕಾರಕ್ಕೆ ಎರಡೂವರೆ ವರ್ಷ ತುಂಬಿಂದ ಬೆನ್ನಲ್ಲೇ ಡಿಸಿಎಂ ಡಿ.ಕೆ ಶಿವಕುಮಾರ್ ಸಿಡಿದೆದ್ದು ಸಿಎಂ ಕುರ್ಚಿಗಾಗಿ ಪಟ್ಟು ಹಿಡಿದ್ದಾರೆ. ಡಿಕೆಶಿ ಬಣದ ಶಾಸಕರು ದೆಹಲಿಗೆ ಹೋಗಿ ಬೆಂಗಳೂರಿಗೆ ವಾಪಸಾಗಿದ್ದಾರೆ. ಡಿ.ಕೆ ಶಿವಕುಮಾರ್ ಅವರನ್ನು ಸಿಎಂ ಮಾಡಲೇಬೇಕೆಂದು ಬಹಿರಂಗವಾಗಿ ಕೆಲವರು ಹೇಳಿದ್ದಾರೆ. ಬೆಂಗಳೂರಿನಲ್ಲಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸಕ್ಕೆ ಕಾಂಗ್ರೆಸ್ ಶಾಸಕರು ಹಾಗೂ ಸಚಿವರು ಪರೇಡ್ ನಡೆಸಿದ್ದು, ಈ ಎಲ್ಲಾ ಬೆಳವಣಿಗೆ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯಿಸಿ ಹೇಳುವುದಕ್ಕೆ ನನ್ನ ಹತ್ತಿರ ಏನೂ ಇಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ ಅವರ ಬೆಂಗಳೂರಿನ ನಿವಾಸ ಹೈವೋಲ್ಟೇಜ್ ಸಭೆಗಳ ಪವರ್ ಸೆಂಟರ್ ಆಗಿದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಮತ್ತು ಎರಡೂ ಬಣಗಳ ನಾಯಕರು ದೆಹಲಿಗೆ ಪರೇಡ್ ನಡೆಸುತ್ತಿದ್ದಂತೆಯೇ ಖರ್ಗೆ ಎಚ್ಚೆತ್ತುಕೊಂಡು ಸಮಸ್ಯೆ ಇತ್ಯರ್ಥಕ್ಕೆ ಬೆಂಗಳೂರಿಗೆ ಬಂದರು. ಆದರೆ, ಈ ಸಮಸ್ಯೆ ಎಐಸಿಸಿ ಅಧ್ಯಕ್ಷರ ವ್ಯಾಪ್ತಿಯನ್ನೂ ಮೀರಿದ ಬಿಕ್ಕಟ್ಟಿನಂತಾಗಿದೆ. ಇದೇ ಕಾರಣಕ್ಕೆ, ‘ನನ್ನ ಬಳಿ ಏನೂ ಇಲ್ಲ’ ಎಂದು ಖರ್ಗೆ ಹೈಕಮಾಂಡ್ ನಾಯಕರತ್ತ ಬೊಟ್ಟು ಮಾಡಿ ತೋರಿಸಿದ್ದಾರೆ.
ಕರ್ನಾಟಕ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಬಗ್ಗೆ ಮೊದಲ ಬಾರಿಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಮಲ್ಲಿಕಾರ್ಜುನ ಖರ್ಗೆ, ಏನೇ ಇದ್ದರೂ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳುತ್ತದೆ. ಹೇಳುವುದಕ್ಕೆ ನನ್ನ ಹತ್ತಿರ ಏನೂ ಇಲ್ಲ. ರಾಜ್ಯದಲ್ಲಿನ ಸದ್ಯದ ಬೆಳವಣಿಗೆ ಬಗ್ಗೆ ನಾನು ಏನೂ ಹೇಳಲ್ಲ. ಈಗ ನಡೆದ ವಿದ್ಯಮಾನದ ಬಗ್ಗೆ ಹೇಳಲು ನನ್ನ ಬಳಿ ಏನೂ ಇಲ್ಲ. ಯಾವುದೇ ವಿಚಾರದ ಬಗ್ಗೆಯೂ ಹೇಳುವುದಕ್ಕೆ ಏನೂ ಇಲ್ಲ. ಏನೇ ಇದ್ದರೂ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಅಸಹಾಯಕತೆ ಹೊರಹಾಕಿದ್ದಾರೆ.
ಮೂರು ದಿನದಿಂದ ಇಲ್ಲೇ ಇದ್ದೇನೆ. ನನಗೆ ತುಂಬಾ ಬೇಜಾರು ಆಗಿದೆ. ನನ್ನ ಹತ್ತಿರ ಹೇಳಲು ಏನು ಇಲ್ಲ. ಸದ್ಯದ ಬೆಳವಣಿಗೆ ಬಗ್ಗೆ ನಾನು ಏನೂ ಹೇಳಲ್ಲ. ನಡೆದ ವಿದ್ಯಮಾನದ ಬಗ್ಗೆ ನನಗೆ ಹೇಳಲು ಏನೂ ಇಲ್ಲ. ದಯವಿಟ್ಟು ನೀವೂ ಇಲ್ಲಿ ಕಾಯುವುದು ಬೇಡ. ಏನೇ ಇದ್ದರೂ ಹೈಕಮಾಂಡ್ ತೀರ್ಮಾನ ತಗೆದುಕೊಳ್ಳುತ್ತೆ ಎಂದು ಕರ್ನಾಟಕ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಗುಂಪುಗಾರಿಕೆ ಬಗ್ಗೆ ಬಹಿರಂಗವಾಗಿಯೇ ಬೇಸರ ಹೊರಹಾಕಿದರು.
ಎಐಸಿಸಿ ಅಧ್ಯಕ್ಷರೇ ಈ ರೀತಿ ಅಸಹಾಯಕತೆ ಹೊರಹಾಕಿದ್ದಾರೆ ಅಂದರೆ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವಿನ ಸಿಎಂ ಕುರ್ಚಿ ಕಾಳಗ ತೀವ್ರ ಸ್ವರೂಪ ಪಡೆದುಕೊಂಡಿದೆ. ಡಿಕೆ ಶಿವಕುಮಾರ್ ಸಿಎಂ ಕುರ್ಚಿ ಬೇಕೆ ಬೇಕು ಎಂದು ಪಟ್ಟು ಹಿಡಿದ್ದರೆ, ಇತ್ತ ಸಿದ್ದರಾಮಯ್ಯ ಐದು ವರ್ಷ ಪೂರೈಸುತ್ತೇನೆ ಎಂದು ಹಠಕ್ಕೆ ಬಿದ್ದಿದ್ದಾರೆ. ಹೀಗಾಗಿ ಪರಿಸ್ಥಿತಿ ಕೈಮಿರಿದಂತಿದೆ. ಇದರಿಂದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ದಿಕ್ಕು ತೋಚದಂತಾಗಿದ್ದು, ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಯತ್ತ ಬೊಟ್ಟು ಮಾಡಿ ತಮ್ಮ ಅಸಹಾಯಕತೆಯನ್ನು ತೋಡಿಕೊಂಡಿದ್ದಾರೆ.
























