ಗೋಕರ್ಣಕ್ಕೆ ಬರುತ್ತಿದ್ದ ಬಸ್‌ಗೆ ಲಾರಿ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತ
ಚಿತ್ರದುರ್ಗ : ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿ ಡಿ.25ರ ನಸುಕಿನ ಹೊತ್ತು ಸಂಭವಿಸಿದ ಭೀಕರ ಅಪಘಾತದಲ್ಲಿ 17ಕ್ಕೂ ಹೆಚ್ಚು ಜನ ಜೀವಂತ ಸುಟ್ಟು ಕರಕಲಾಗಿದ್ದಾರೆ. ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಖಾಸಗಿ ಬಸ್ ಹೊತ್ತಿ ಉರಿದಿದೆ. ಖಾಸಗಿ ಸ್ಲೀಪರ್ ಕೋಚ್ ಬಸ್ನಲ್ಲಿದ್ದ 17ಕ್ಕೂ ಹೆಚ್ಚು ಪ್ರಯಾಣಿಕರು ಸಜೀವ ದಹನವಾಗಿದ್ದಾರೆ. ಉಳಿದ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಎದುರಿನಿಂದ ಬರುತ್ತಿದ್ದ ಲಾರಿಯೊಂದು ಡಿವೈಡರ್ ಹಾರಿ ಮತ್ತೊಂದು ಕಡೆಯಿಂದ ಬರುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಸ್ಲೀಪರ್ ಕೋಚ್ ಬಸ್ ರಸ್ತೆ ಮಧ್ಯೆ ಹೊತ್ತಿ ಉರಿದಿದೆ. ಈ ಅಪಘಾತಕ್ಕೆ ಲಾರಿ ಚಾಲಕನ ನಿರ್ಲಕ್ಷ್ಯವೇ ಕಾರಣ ಎಂದು ಹೇಳಲಾಗಿದೆ. ಈ ಲಾರಿ ಹಿರಿಯೂರಿನಿಂದ ಬೆಂಗಳೂರಿಗೆ ತೆರಳುತ್ತಿತ್ತು. ಘಟನಾ ಸ್ಥಳಕ್ಕೆ ಎಸ್ಪಿ ರಂಜಿತ್ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಹಿರಿಯೂರು ಗ್ರಾಮಾಂತರ ಠಾಣಾಯಲ್ಲಿ ಘಟನೆಗೆ ಸಂಬಂಧಿಸಿದಂತೆ ದೂರು ದಾಖಲಾಗಿದೆ.
ಈ ಬಸ್ಸಿನಲ್ಲಿ 15 ಮಹಿಳೆಯರು, 14 ಪುರುಷರು ಪ್ರಯಾಣಿಸುತ್ತಿದ್ದರು. ಒಟ್ಟು 32 ಸೀಟ್ಗಳ ಬಸ್‌ನಲ್ಲಿ 29 ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಗೋಕರ್ಣದ 25 ಜನ, ಕುಮಟಾದ ಇಬ್ಬರು ಹಾಗೂ ಶಿವಮೊಗ್ಗದ ಇಬ್ಬರು ಇದ್ದರು ಎಂದು ಹೇಳಲಾಗಿದೆ. ಮಂಜುನಾಥ್, ಸಂಧ್ಯಾ, ಶಶಾಂಕ್, ದಿಲೀಪ್, ಪ್ರೀತೀಶ್ವರನ್, ವಿ.ಬಿಂದು, ಕೆ.ಕವಿತಾ, ಅನಿರುದ್ಧ್ ಬೆನರ್ಜಿ, ಅಮೃತಾ, ಇಶಾ, ಸೂರಜ್, ಮಾನಸ, ಮಿಲನಾ, ಹೇಮರಾಜ್ಕುಮಾರ್, ಕಲ್ಪನಾ ಪ್ರಜಾಪತಿ, ಎಂ.ಶಶಿಕಾಂತ್, ವಿಜಯ್ ಭಂಡಾರಿ, ನವ್ಯಾ, ಅಭಿಷೇಕ್, ಹೆಚ್.ಕಿರಣ್ ಪಾಲ್, ಎಂ.ಕೀರ್ತನ್ ಸೇರಿದಂತೆ 29 ಜನ ಪ್ರಯಾಣಿಸುತ್ತಿದ್ದರು ಎಂದು ಹೇಳಲಾಗಿದೆ.
ಬಸ್ ಚಾಲಕ, ನಿರ್ವಾಹಕ ಮತ್ತು ಕೆಲವರು ಬಸ್‌ನಿಂದ ಹೊರ ಜಿಗಿದು ಬಚಾವ್ ಆಗಿದ್ದಾರೆ. ಅಪಘಾತದಲ್ಲಿ ಕಂಟೇನರ್ ಲಾರಿ ಚಾಲಕ ಕುಲದೀಪ್ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. ಅಪಘಾತದಿಂದಾಗಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಸುಮಾರು 30 ಕಿ.ಮೀ. ದೂರದ ವರೆಗೆ ಟ್ರಾಫಿಕ್ ಜಾಮ್ ಆಗಿದ್ದು, ಶಿರಾದವರೆಗೂ ಕಿಲೋ ಮೀಟರ್ಗಟ್ಟಲೇ ವಾಹನಗಳು ನಿಂತಿದ್ದವು.
ಇತ್ತೀಚೆಗೆ ಆಂಧ್ರ ಪ್ರದೇಶದ ಕರ್ನೂಲ್ ಸಮೀಪ 41 ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ ಬೈಕ್ ಗೆ ಡಿಕ್ಕಿ ಹೊಡೆದ ಬಳಿಕ ಬಸ್‌ಗೆ ಏಕಾಏಕಿ ಬೆಂಕಿ ಹೊತ್ತಿಕೊಂಡಿತ್ತು. ಈ ವೇಳೆ ಕೆಲವರು ಹೊರಹಾರಿ ಪ್ರಾಣ ಉಳಿಸಿಕೊಂಡಿದ್ದರೆ ಹಲವರು ಬೆಂಕಿ ಕೆನ್ನಾಲೆಗೆ ಸಿಲುಕಿ ಜೀವ ಕಳೆದುಕೊಂಡಿದ್ದರು. ಘಟನೆಯಲ್ಲಿ ಬೆಂಗಳೂರಲ್ಲಿ ನೆಲೆಸಿದ್ದ ಕುಟುಂಬ ಸೇರಿ 20 ಜನರು ದಾರುಣವಾಗಿ ಸಾವನ್ನಪ್ಪಿದ್ದರು. ಇದೀಗ ಇಂತಹದೇ ಮತ್ತೊಂದು ಘಟನೆ ನಡೆದಿದೆ.
ಬೆಂಗಳೂರಿನಿಂದ ಗೋಕರ್ಣಕ್ಕೆ ಹೊರಟಿದ್ದ ಸೀಬರ್ಡ್ ಸ್ಲೀಪರ್ ಕೋಚ್ ಬಸ್‌ಗೆ ಎದುರಿನಿಂದ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಬಸ್ ಸಂಪೂರ್ಣವಾಗಿ ಬೆಂಕಿ ಹೊತ್ತಿಕೊಂಡು ಭಸ್ಮವಾಗಿದೆ. ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆಯೇ ಬಸ್‌ನ ಚಾಲಕ ಮತ್ತು ನಿರ್ವಾಹಕ ತಕ್ಷಣವೇ ಹೊರಗೆ ಜಿಗಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಲಾರಿ ಚಾಲಕ ಘಟನಾ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಗಾಯಗೊಂಡ 21 ಮಂದಿಯನ್ನು ಹಿರಿಯೂರು ಮತ್ತು ತುಮಕೂರಿನ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಲಾರಿ ಡಿಕ್ಕಿ ಹೊಡೆದ ತಕ್ಷಣ ಬಸ್‌ಗೆ ಬೆಂಕಿ ಹೊತ್ತಿಕೊಂಡಿದ್ದು, ಬಸ್ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.
ಬೆಂಗಳೂರಿನ ಮೆಜೆಸ್ಟಿಕ್‌ನಿಂದ ಹೊರಟಿದ್ದ ಖಾಸಗಿ ಸೀಬರ್ಡ್ ಸ್ಲೀಪರ್ ಬಸ್, ಶಿವಮೊಗ್ಗ ಮತ್ತು ಹೊನ್ನಾವರ ಮಾರ್ಗವಾಗಿ ಉತ್ತರ ಕನ್ನಡ ಜಿಲ್ಲೆಯ ಗೋಕರ್ಣಕ್ಕೆ ತೆರಳುತ್ತಿತ್ತು. 32 ಆಸನ ಸಾಮರ್ಥ್ಯದ ಬಸ್‌ನಲ್ಲಿ 29 ಆಸನಗಳು ಕಾಯ್ದಿರಿಸಲಾಗಿದ್ದು, 25 ಪ್ರಯಾಣಿಕರು ಗೋಕರ್ಣಕ್ಕೆ, ಇಬ್ಬರು ಕುಮಟಾಕ್ಕೆ ಮತ್ತು ಇಬ್ಬರು ಶಿವಮೊಗ್ಗಕ್ಕೆ ಪ್ರಯಾಣಿಸುತ್ತಿದ್ದರು. ಅಪಘಾತದ ಮಾಹಿತಿ ದೊರೆತ ತಕ್ಷಣ ಚಿತ್ರದುರ್ಗ ಜಿಲ್ಲೆಯ ಡಿವೈಎಸ್ಪಿ ಶಿವಕುಮಾರ್, ರೂರಲ್ ಇನ್‌ಸ್ಪೆಕ್ಟರ್ ಆನಂದ್, ಇನ್‌ಸ್ಪೆಕ್ಟರ್ ಗುಂಡಪ್ಪ, ಹಾಗೂ ಚಿತ್ರದುರ್ಗ ಎಸ್.ಪಿ. ರಣದೀಪ್ ಮಂಡಾರು ಮತ್ತು ತುಮಕೂರಿನ ಎಸ್.ಪಿ. ಅಶೋಕ್ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಗಳನ್ನು ನಡೆಸಿದ್ದಾರೆ. ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ತಕ್ಷಣವೇ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸುವ ಕಾರ್ಯಾಚರಣೆ ನಡೆಸಿದರು. 9 ಮಂದಿ ಗಾಯಾಳುಗಳನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಗಾಯಾಳುಗಳನ್ನು ಹಿರಿಯೂರು, ಶಿರಾಗೆ ಸಮೀಪದ ಆಸ್ಪತ್ರೆಗಳಿಗೆ ಹಾಗೂ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ರಕ್ಷಿಸಲ್ಪಟ್ಟವರ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿಯಾಗಿದೆ.
30 ಕಿಲೋಮೀಟರ್ ಟ್ರಾಫಿಕ್ ಜಾಮ್
ದುರಂತ ಸಂಭವಿಸಿದ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಸುಮಾರು 30 ಕಿಲೋಮೀಟರ್‌ಗಳಷ್ಟು ಉದ್ದಕ್ಕೆ ಸಂಚಾರ ದಟ್ಟಣೆ ಉಂಟಾಗಿದೆ. ಮುಂಬೈಗೆ ಸಂಪರ್ಕ ಕಲ್ಪಿಸುವ ಈ ಹೆದ್ದಾರಿಯಲ್ಲಿ ವಾಹನಗಳು ಸಾಲುಗಟ್ಟಿ ನಿಂತಿವೆ. ಬೆಂಕಿ ನಂದಿಸುವ ಕಾರ್ಯಾಚರಣೆ ಮತ್ತು ಸುಟ್ಟು ಕರಕಲಾದ ಮೃತದೇಹಗಳನ್ನು ಹೊರತೆಗೆಯುವ ಕಾರ್ಯ ಭರದಿಂದ ಸಾಗಿದೆ. ಮೃತದೇಹಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿದ್ದು, ಗುರುತು ಪತ್ತೆ ಹಚ್ಚುವುದು ಕಷ್ಟಕರವಾಗಿದೆ. ಘಟನೆಗೆ ಲಾರಿ ಚಾಲಕನ ನಿರ್ಲಕ್ಷ್ಯವೇ ಕಾರಣ ಎಂದು ಹೇಳಲಾಗುತ್ತಿದ್ದು, ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.
























