ಕಾರು-ಬಸ್‌ ಡಿಕ್ಕಿ : ಮಗು ಸಹಿತ ಮೂವರು ಸಾವು

ಶಿವಮೊಗ್ಗ: ಕಾರು ಮತ್ತು ಕೆಎಸ್‌ಆರ್‌ಟಿಸಿ ಬಸ್‌ ನಡುವೆ ಡಿಕ್ಕಿ ಸಂಭವಿಸಿ ಮಗು ಸೇರಿದಂತೆ ಮೂವರು ಸಾವನ್ನಪ್ಪಿದ ಭೀಕರ ಅಪಘಾತ ತೀರ್ಥಹಳ್ಳಿ ತಾಲೂಕಿನ ಭಾರತೀಪುರ ಕ್ರಾಸ್ ಬಳಿ ನಡೆದಿದೆ. ಮಗು, ಕಾರಿನ ಚಾಲಕ ಮತ್ತು ಪಕ್ಕದ ಸೀಟಿನಲ್ಲಿದ್ದ ಮಹಿಳೆ ಮೃತಪಟ್ಟಿದ್ದು ಕಾರಿನಲ್ಲಿದ್ದ ಉಳಿದ ಮೂವರು ಗಂಭೀರ ಗಾಯಗೊಂಡಿದ್ದಾರೆ. ಮೃತರನ್ನು ರಿಹಾನ್ (15), ರಾಹಿಲ್ (9) ಮತ್ತು ಫಾತಿಮಾ (76) ಎಂದು ಗುರುತಿಸಲಾಗಿದೆ. ಇವರು ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಮೂಲದ ನಿವಾಸಿಗಳು ಎಂದು ತಿಳಿದುಬಂದಿದೆ.

ಅಪಘಾತದಲ್ಲಿ ಕಾರು ಚಾಲಕ ಸೇರಿದಂತೆ ಇನ್ನೂ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಚೆನ್ನಗಿರಿಯಿಂದ ಶೃಂಗೇರಿ ಕಡೆಗೆ ಸ್ವಿಫ್ಟ್ ಕಾರಿನಲ್ಲಿ 6 ಜನರು ತೆರಳುತ್ತಿದ್ದರೆ ಮಂಗಳೂರಿನಿಂದ ರಾಯಚೂರು ಕಡೆಗೆ ಕೆಎಸ್‌ಆರ್‌ಟಿಸಿ ಬಸ್ ಹೋಗುತ್ತಿತ್ತು. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದ್ದು, ಬಸ್ಸಿನ ಮುಂಭಾಗಕ್ಕೆ ಹಾನಿಯಾಗಿದೆ. ಅಪಘಾತದ ತೀವ್ರತೆಯಿಂದ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಸ್ಥಳದಲ್ಲಿ ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡಿತು.

ಮೃತದೇಹ ತೀರ್ಥಹಳ್ಳಿ ತಾಲೂಕು ಆಸ್ಪತ್ರೆ ಶವಾಗಾರಕ್ಕೆ ರವಾನೆ ಮಾಡಲಾಗಿದೆ. ಗಾಯಾಳುಗಳಿಗೆ ತೀರ್ಥಹಳ್ಳಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.





















































 
 
error: Content is protected !!
Scroll to Top