ಆರು ವರ್ಷಗಳಿಂದ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಬಂಧಿಯಾಗಿದ್ದ ಉಗ್ರ
ಬೆಂಗಳೂರು : ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಬಂಧಿತನಾಗಿದ್ದ ಶಂಕಿತ ಭಯೋತ್ಪಾದಕನೊಬ್ಬ ಮೃತಪಟ್ಟಿರುವ ಘಟನೆ ನಡೆದಿದೆ. ಸುದ್ದಗುಂಟೆಪಾಳ್ಯ ಸ್ಫೋಟಕ ವಸ್ತು ಸಂಗ್ರಹ ಪ್ರಕರಣದಲ್ಲಿ ಬಂಧಿತನಾಗಿದ್ದ ಸಾಧಿಕ್ ಪಾಷಾ (47) ಅನಾರೋಗ್ಯದಿಂದ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದ. ನಿನ್ನೆ ತಡರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆಂದು ತಿಳಿದು ಬಂದಿದೆ.
ಸಾದಿಕ್ ಪಾಷಾ ಕಳೆದ ಆರು ತಿಂಗಳಿಂದ ಲೋ ಬಿಪಿ ಹಾಗೂ ಹೈ ಶುಗರ್ ಸೇರಿದಂತೆ ಹಲವು ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಎಂದು ತಿಳಿದುಬಂದಿದೆ. ಆರೋಗ್ಯದಲ್ಲಿ ತೀವ್ರ ಏರುಪೇರು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವನನ್ನು ಜೈಲು ಅಧಿಕಾರಿಗಳು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮಧ್ಯರಾತ್ರಿ ಸಾಧಿಕ್ ಸಾವನ್ನಪ್ಪಿದ್ದಾನೆ.
2020ರಲ್ಲಿ ಸುದ್ದಗುಂಟೆಪಾಳ್ಯ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಸ್ಫೋಟಕ ವಸ್ತು ಸಂಗ್ರಹ ಪ್ರಕರಣ ಸಂಬಂಧ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಸಾಧಿಕ್ ಸೇರಿ ಒಟ್ಟು ಆರು ಶಂಕಿತರನ್ನು ಬಂಧಿಸಿತ್ತು. ಅಂದಿನಿಂದ 6 ವರ್ಷಗಳ ಕಾಲ ಪಾಷಾ ಪರಪ್ಪನ ಅಗ್ರಹಾರದಲ್ಲಿ ಬಂಧಿಯಾಗಿದ್ದ.
























