15 ಲ.ರೂ. ಪರಿಹಾರ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಶಿವಮೊಗ್ಗ: ಶಿವಮೊಗ್ಗದಲ್ಲಿ ಮುಸ್ಲಿಂ ಯುವಕರು ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಯನ್ನು ಥಳಿಸಿ ಸಾಯಿಸಿದ ಪ್ರಕರಣ ರಾಜ್ಯಾದ್ಯಂತ ಆಕ್ರೋಶದ ಅಲೆಯೆಬ್ಬಿಸಿದೆ. ಶಾಲಾ ಬಾಲಕನ ಹತ್ಯೆಯನ್ನು ಸಿಎಂ ಸಿದ್ದರಾಮಯ್ಯ ಅವರೂ ಖಂಡಿಸಿದ್ದು, ಮೃತ ಬಾಲಕನ ಪೋಷಕರಿಗೆ ಸರ್ಕಾರದ ವತಿಯಿಂದ 15 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.
ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಸಿದ್ದರಾಮಯ್ಯ, ಶಾಲಾ ವಿದ್ಯಾರ್ಥಿಯನ್ನು ಥಳಿಸಿ ಹತ್ಯೆಗೈದಿರುವುದನ್ನು ತೀವ್ರವಾಗಿ ಖಂಡಿಸುತ್ತೇನೆ. ಮೃತ ವಿದ್ಯಾರ್ಥಿಯ ಕುಟುಂಬಕ್ಕೆ ನೆರವಾಗುವುದರ ಜೊತೆಗೆ ಕೃತ್ಯದಲ್ಲಿ ಭಾಗಿಯಾದ ಪ್ರತಿಯೊಬ್ಬ ಅಪರಾಧಿಗೂ ಕಾನೂನಿನ ಮೂಲಕ ತಕ್ಕ ಶಿಕ್ಷೆಯಾಗುವಂತೆ ಕ್ರಮವಹಿಸಿ, ಆತನ ಸಾವಿಗೆ ನ್ಯಾಯ ಕೊಡಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಿದ್ದೇವೆ ಎಂದು ಭರವಸೆ ನೀಡಿದ್ದಾರೆ.
ಕೊಲೆಯಲ್ಲಿ ಭಾಗಿಯಾದವರು ಇನ್ನೂ ಚಿಕ್ಕಪ್ರಾಯದ ಹುಡುಗರು ಎಂದು ಕೇಳಿ ದಿಗ್ಭ್ರಮೆಯಾಯಿತು. ಚೆನ್ನಾಗಿ ಓದಿ, ಭವಿಷ್ಯ ರೂಪಿಸಿಕೊಂಡು, ಕುಟುಂಬಕ್ಕೆ ಆಸರೆಯಾಗಬೇಕಿದ್ದ ಮಕ್ಕಳು ದುಶ್ಚಟಗಳಿಗೆ ಬಲಿಯಾಗಿ, ಹೀಗೆ ಕಾನೂನು ಬಾಹಿರ ಕೃತ್ಯಗಳಲ್ಲಿ ತೊಡಗುವುದು ದುರದೃಷ್ಟಕರ. ಕೊಲೆಯ ಹಿಂದಿನ ಉದ್ದೇಶ ಏನೇ ಇರಲಿ, ಕೊಲೆಗೈದವರು ಯಾರೇ ಆಗಿರಲಿ, ಅವರನ್ನು ಕಾನೂನಿನ ಮೂಲಕ ಹೆಡೆಮುರಿ ಕಟ್ಟಿ, ಭವಿಷ್ಯದಲ್ಲಿ ಇಂತಹ ಕೃತ್ಯಗಳನ್ನು ಎಸಗುವ ಮುನ್ನ ನೂರು ಬಾರಿ ಯೋಚಿಸಬೇಕಾದಂತಹ ಸ್ಥಿತಿ ನಿರ್ಮಾಣ ಮಾಡುವಂತೆ ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದೇನೆ ಎಂದು ಹೇಳಿದ್ದಾರೆ.
ಬಾಲ್ಯದಲ್ಲೇ ದ್ವೇಷ, ಹಿಂಸೆ, ಅಪರಾಧ ಕೃತ್ಯಗಳ ದುರ್ಬುದ್ಧಿ ಬೆಳೆಸಿಕೊಳ್ಳುವುದು ಅತ್ಯಂತ ಅಪಾಯಕಾರಿ. ಇಂತಹ ಮನಸ್ಥಿತಿಯಿರುವವರು ದುಶ್ಚಟಗಳಿಗೆ ದಾಸರಾದರೆ ಪರಿಸ್ಥಿತಿ ಕೈಮೀರಿ ಹೋಗುವುದು ಖಚಿತ. ಪೋಷಕರು ಸಹ ತಮ್ಮ ಮಕ್ಕಳ ಚಲನವಲನಗಳ ಮೇಲೆ ನಿಗಾ ವಹಿಸಬೇಕು. ಮಕ್ಕಳು ಹಾದಿ ತಪ್ಪಿದ್ದರೆ ತಿದ್ದಿ ಬುದ್ಧಿ ಹೇಳಬೇಕು. ಶಾಲೆಯ ಸುತ್ತಮುತ್ತ ಕಾನೂನು ಬಾಹಿರ ಕೃತ್ಯಗಳು ನಡೆಯದಂತೆ ಆಡಳಿತ ಮಂಡಳಿ ನಿಗಾ ವಹಿಸಬೇಕು. ಅಗತ್ಯಬಿದ್ದರೆ ಪೊಲೀಸರ ನೆರವನ್ನು ಪಡೆಯಬೇಕು.
ಈ ದುಷ್ಕೃತ್ಯ ಎಸಗಿದ ಎಲ್ಲರನ್ನೂ ಈಗಾಗಲೇ ಬಂಧಿಸಲಾಗಿದ್ದು, ನಿಷ್ಪಕ್ಷಪಾತ ತನಿಖೆ ನಡೆಸಿ ಗರಿಷ್ಠ ಶಿಕ್ಷೆಯಾಗುವಂತೆ ನೋಡಿಕೊಳ್ಳುವ ವಾಗ್ದಾನವನ್ನು ಕೂಡ ಆ ನೊಂದ ಕುಟುಂಬಕ್ಕೆ ಈ ವೇಳೆ ನೀಡುತ್ತಿದ್ದೇನೆ. ಸಾರ್ವಜನಿಕರು ಯಾವುದೇ ಪ್ರಚೋದನೆಗಳಿಗೆ ಕಿವಿಗೊಡದೆ ಶಾಂತಿ – ಸಂಯಮದಿಂದ ವರ್ತಿಸಬೇಕು ಎಂದು ಮನವಿ ಮಾಡುತ್ತಿದ್ದೇನೆ. ಪರಿಸ್ಥಿತಿಯನ್ನು ದುರ್ಬಳಕೆ ಮಾಡಿಕೊಂಡು ಸಾರ್ವಜನಿಕ ಶಾಂತಿಗೆ ಭಂಗ ಉಂಟುಮಾಡುವ ಕೃತ್ಯದಲ್ಲಿ ತೊಡಗುವವರ ವಿರುದ್ಧವೂ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಶಿವಮೊಗ್ಗದ ಸುಲೇಬೈಲು ಸರ್ಕಾರಿ ಶಾಲೆಯ ಹೊರಗೆ 16 ವರ್ಷದ ಬಾಲಕನ ಕೊಲೆಯಾಗಿದೆ. ಉರಗದೂರಿನ ಸರ್ಕಾರಿ ಪ್ರೌಢಶಾಲೆಯ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಸಂಕೇತ್ (16) ಪರೀಕ್ಷೆಗೆ ಮುನ್ನ ವಿಶೇಷ ತರಗತಿಗೆ ಹಾಜರಾದ ನಂತರ ಈ ಘಟನೆ ಸಂಭವಿಸಿದೆ. ಸಂಕೇತ್ ತನ್ನ ಶಾಲೆಯ ಹೊರಗೆ ಹುಡುಗರ ಗುಂಪಿನ ನಡುವೆ ನಡೆದ ವಾಗ್ವಾದದಲ್ಲಿ ಮಧ್ಯ ಪ್ರವೇಶಿಸಿದ್ದರು. ಈ ವೇಳೆ ವಾಗ್ವಾದ ನಡೆದು ಮುಸ್ಲಿಂ ಯುವಕರು ಯದ್ವಾತದ್ವಾ ಹಲ್ಲೆ ಮಾಡಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ ತಿಳಿಸಿದ್ದಾರೆ.
ಸಂಕೇತ್ ಓದುತ್ತಿದ್ದ ಶಾಲೆಯ ಹಳೆಯ ವಿದ್ಯಾರ್ಥಿಗಳೇ ಕೊಲೆ ಮಾಡಿದ್ದಾರೆ. ಕೊಲೆ ನಡೆದ ಸ್ಥಳದಲ್ಲಿದ್ದ ಮತ್ತೊಬ್ಬ ವಿದ್ಯಾರ್ಥಿಯಿಂದ ನಿನ್ನೆ ರಾತ್ರಿಯೇ ಎಸ್ಪಿ ನಿಖಿಲ್ ಘಟನೆಯ ಮಾಹಿತಿಯನ್ನು ಪಡೆದುಕೊಂಡಿದ್ದಾರೆ. ಘಟನೆಯಲ್ಲಿ ಭಾಗಿಯಾಗಿರುವ ಎಲ್ಲ ಏಳು ಅಪ್ರಾಪ್ತ ವಯಸ್ಕರನ್ನು ಈ ಸಂಬಂಧ ವಶಕ್ಕೆ ಪಡೆಯಲಾಗಿದೆ. ಎರಡು ದಿನದ ಹಿಂದೆ ಕ್ರಿಕೆಟ್ ಮ್ಯಾಚ್ ನಡೆದಿತ್ತು. ಗಾಂಜಾ ಹಾವಳಿ ಬಗ್ಗೆಯೂ ತನಿಖೆ ಮಾಡುತ್ತೇವೆ. ಇಲ್ಲಿ ಒಂದು ಪೊಲಿಸ್ ಉಪ ಠಾಣೆಯನ್ನು ತೆರೆಯಲು ಕ್ರಮ ಕೈಗೊಳ್ಳುತ್ತೇವೆ. ಆರೋಪಿಗಳನ್ನು ಗಾಂಜಾ ಟೆಸ್ಟ್‌ಗೆ ಒಳಪಡಿಸುತ್ತೇವೆ ಎಂದು ಎಸ್ಪಿ ನಿಖಿಲ್ ಹೇಳಿದ್ದಾರೆ.
























